ಅನಿತಾಗೆ ಕೆಜೆಪಿ ಬೆಂಬಲ
ಕ.ಪ್ರ.ವಾರ್ತೆ ಟಿ ರಾಮನಗರ ಟಿ ಆ.17
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರಿಗೆ ಕೆಜೆಪಿ ಬೆಂಬಲ ವ್ಯಕ್ತಪಡಿಸಿದೆ. ಈ ಕುರಿತು ಕೆಜೆಪಿ ಜಿಲ್ಲಾಧ್ಯಕ್ಷ ಎಸ್.ಆರ್.ನಾಗರಾಜು ಅವರು ನಿರ್ಧಾರ ಪ್ರಕಟಿಸಿದ್ದಾರೆ.
ನಗರದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಶನಿವಾರ ರಾತ್ರಿ ನಡೆದ ಕೆಜೆಪಿ ಮುಖಂಡರ ಸಭೆಯಲ್ಲಿ ಜೆಡಿಎಸ್ ಬೆಂಬಲಿಸುವ ತೀರ್ಮಾನ ಕೈಗೊಳ್ಳಲಾಯಿತು. ಇದರ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಕೂಡ ಸಭಾಂಗಣಕ್ಕೆ ತೆರಳಿ ಕೆಜೆಪಿ ನಿಲುವನ್ನು ಸ್ವಾಗತಿಸಿದರು.
ಕಾಂಗ್ರೆಸ್ ಸೋಲಿಸುವ ಏಕೈಕ ಗುರಿಯೊಂದಿಗೆ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸಲಾಗುತ್ತಿದೆ. ಕ್ಷೇತ್ರಾದ್ಯಂತ ಇರುವ ನಮ್ಮ ಪಕ್ಷದ ಎಲ್ಲ ಕಾರ್ಯಕರ್ತರು ಜೆಡಿಎಸ್ ಅಭ್ಯರ್ಥಿ ಪರ ಮತ ಹಾಕಿಸಲಿದ್ದಾರೆ ಎಂದು ನಾಗರಾಜು ಹೇಳಿದರು.
ಜೆಡಿಎಸ್ಗೆ ಬೆಂಬಲ ನೀಡುವ ವಿಷಯದಲ್ಲಿ ಕೆಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಈ ತೀರ್ಮಾನ ಸರ್ವಾನುಮತದ್ದಾಗಿದೆ. ಕ್ಷೇತ್ರಾದ್ಯಂತ ಮನೆ ಮನೆಗೆ ತೆರಳಿ ಜೆಡಿಎಸ್ ಪರ ಮತಯಾಚಿಸಿ, ಪೂರ್ಣ ಪ್ರಮಾಣದಲ್ಲಿ ಬೆಂಬಲವಾಗಿ ನಿಡಲಾಗುವುದು ಎಂದು ತಿಳಿಸಿದರು.
ಕುಮಾರಸ್ವಾಮಿ ಸ್ವಾಗತ
ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸುವ ಕೆಜೆಪಿ ಮುಖಂಡರ ಸರ್ವಾನುಮತದ ತೀರ್ಮಾನವನ್ನು ಸ್ವಾಗತಿಸಿದ ಎಚ್.ಡಿ. ಕುಮಾರಸ್ವಾಮಿ, ಪ್ರಚಾರ ಮತ್ತು ಎಲ್ಲ ಹಂತದಲ್ಲೂ ಕೆಜೆಪಿ ಮುಖಂಡರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಬೆಂಗಳೂರು ಗ್ರಾಮಾಂತರವಲ್ಲದೆ ಮಂಡ್ಯದಲ್ಲೂ ಜೆಡಿಎಸ್ ಗೆಲವು ನಿಶ್ಚಿತ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದರ್ಪದ ರಾಜಕಾರಣದಿಂದ ಬೇಸತ್ತ ಮತದಾರರು ಜೆಡಿಎಸ್ ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಭೆಯಲ್ಲಿ ಜೆಡಿಎಸ್ ಮುಖಂಡರಾದ ಗಿರೀಗೌಡ, ಬಿ.ಉಮೇಶ್, ಮಂಜುನಾಥ್, ಕೆಜೆಪಿ ಪದಾಧಿಕಾರಿಗಳಾದ ಶ್ರೀನಿವಾಸ್, ಮಹೇಶಯ್ಯ ಹಾಗೂ ಮುಖಂಡರು, ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
ಕಾಪುಸಿ ಪ್ರಚಾರ ಸಭೆ
ಕೆಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಬಲಗೈ ಬಂಟ ಎಂದೇ ಬಿಂಬಿಸಲ್ಪಟ್ಟಿರುವ ಕಾ.ಪು. ಸಿದ್ದಲಿಂಗಸ್ವಾಮಿ ಅವರು ರಾಮನಗರ ಜಿಲ್ಲೆಯೂ ಸಹಿತ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮ ಪಕ್ಷದ ಮುಖಂಡರ ಸಭೆ ನಡೆಸಿ, ಜೆಡಿಎಸ್ ಪರ ಪ್ರಚಾರದಲ್ಲಿ ತೊಡಗಿದ್ದಾರೆ. ಶನಿವಾರವೂ ಅವರು ವಿವಿಧೆಡೆ ಪ್ರಚಾರ ನಡೆಸಿದ್ದಾರೆ.