ಉದ್ಯೋಗ ಅರಸಿ ಬರುವ ಅನ್ಯ ಭಾಷಿಕರಿಗೆ ಕನ್ನಡ ಕಲಿಸಿ
ರಾಮನಗರ: ಬಿಡದಿಯ ಕೈಗಾರಿಕಾ ಪ್ರದೇಶದಲ್ಲಿ ಹಲವಾರು ಬಹುರಾಷ್ಟ್ರೀಯ ಕಂಪನಿಗಳು ಸ್ಥಾಪನೆಯಾಗುತ್ತಿವೆ. ಇಲ್ಲಿಗೆ ಉದ್ಯೋಗವನ್ನರಸಿ ಬರುವ ಅನ್ಯ ಭಾಷಿಕರಿಗೆ ಕನ್ನಡವನ್ನು ಕಲಿಸುವ ಮೂಲಕ ಕನ್ನಡ ಭಾಷೆಯ ಮೇಲೆ ಅಭಿಮಾನ ಮೂಡಿಸಬೇಕು ಎಂದು ಸಂಸದ ಡಿ.ಕೆ. ಸುರೇಶ್ ತಿಳಿಸಿದರು.
ಬಿಡದಿಯಲ್ಲಿ ರಾಷ್ಟ್ರಕವಿ ಕುವೆಂಪು ಕನ್ನಡ ಯುವಕರ ಸಂಘವು ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಲ್ಲಿಗೆ ಬರುವ ಅನ್ಯ ಭಾಷಿಕರಿಗೆ ಕನ್ನಡ ಕಲಿಸದಿದ್ದರೆ ತಮ್ಮ ಭಾಷೆಯನ್ನೇ ಸ್ಥಳೀಯರಿಗೆ ಕಲಿಸಿ ಕನ್ನಡವನ್ನು ಮರೆಸುವ ಸಂಭವವಿದೆ ಎಂದು ಆತಂಕ ವ್ಯಕ್ತಪಡಿಸಿದರು. ಬಿಡದಿಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದು, ಅತಿ ವೇಗದಿಂದ ಬೆಳೆಯುತ್ತಿದೆ. ಆದರೆ ಇಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಕಾಡುತ್ತಿದೆ. ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಸಚಿವರು, ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.
ರಸ್ತೆ ನಿರ್ಮಾಣ, ಒಳ ಚರಂಡಿ ವ್ಯವಸ್ಥೆ ಕಲ್ಪಿಸುವುದು, ವಿದ್ಯುತ್ ಚಿತಾಗಾರ ನಿರ್ಮಾಣ, ಶುದ್ಧ ಕುಡಿಯುವ ನೀರು ಘಟಕಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು. ಈ ಎಲ್ಲಾ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.
ಮಹಾದ್ವಾರ ನಿರ್ಮಾಣಕ್ಕೆ ಚಿಂತನೆ: ಕಾಯಕ ಯೋಗಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರು ಬಿಡದಿಯ ಬಾನಂದೂರಿನಲ್ಲಿ ಜನಿಸಿದವರು. ಅವರ ಸವಿನೆನಪಿಗಾಗಿ ಬಿಡದಿಯ ಪಟ್ಟಣದ ಪ್ರವೇಶದಲ್ಲಿ ಸ್ವಾಮೀಜಿಯವರ ಹೆಸರಿನಲ್ಲಿ ಮಹಾದ್ವಾರ ನಿರ್ಮಾಣಕ್ಕೆ ಚಿಂತಿಸಲಾಗಿದೆ ಎಂದು ಡಿ.ಕೆ.ಸುರೇಶ್ ಹೇಳಿದರು.ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರವೇ ಕನ್ನಡ ಉಳಿದಿದೆ. ರಾಜಧಾನಿ ಬೆಂಗಳೂರು ಅನ್ಯ ಭಾಷಿಕರಿಂದಲೇ ತುಂಬಿಹೋಗಿದ್ದು, ಕನ್ನಡಿಗರನ್ನು ಹುಡುಕಬೇಕಾದ ಪರಿಸ್ಥಿತಿಯಿದೆ. ಬೆಂಗಳೂರಿನಲ್ಲಿ ಕನ್ನಡಿಗರೇ ಅಲ್ಪ ಸಂಖ್ಯಾತರಾಗಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಎ.ಮಂಜುನಾಥ್ ಆತಂಕ ವ್ಯಕ್ತಪಡಿಸಿದರು.
ಕನ್ನಡ ಭಾಷೆಯು ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಾದರೆ ಯುವ ಪೀಳಿಗೆ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು. ಎಷ್ಟು ಭಾಷೆಯನ್ನು ಬೇಕಾದರೂ ಕಲಿಯಿರಿ, ಆದರೆ, ಮಾತೃ ಭಾಷೆ ಕನ್ನಡವನ್ನು ಮರೆಯಬೇಡಿ ಎಂದು ಅವರು ಸಲಹೆ ನೀಡಿದರು. ಕನ್ನಡದ ಮೇಲಿನ ಪ್ರೀತಿ ಕೇವಲ ನವೆಂಬರ್ ತಿಂಗಳಿಗಷ್ಟೇ ಸೀಮಿತವಾಗಬಾರದು. ಕನ್ನಡವನ್ನು ಬದುಕಿನ ಭಾಷೆಯನ್ನಾಗಿ ಸ್ವೀಕರಿಸಿದರೆ ಮಾತ್ರ ಕನ್ನಡ ಭಾಷೆಯ ಉಳಿವು ಸಾಧ್ಯ ಎಂದು ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ತಿಳಿಸಿದರು.
ಸನ್ಮಾನ: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ರಾಮಯ್ಯ, ಅಶೋಕ್ ಗುಡಿಗಾರ್, ಶಿವಣ್ಣ, ಶಿವಪ್ರಸಾದ್, ಸುಬ್ರಹ್ಮಣ್ಯಂ ಅವರನ್ನು ಸನ್ಮಾನಿಸಲಾಯಿತು. ವಿಧಾನಪರಿಷತ್ ಮಾಜಿ ಸದಸ್ಯ ಎಸ್.ರವಿ, ಬಮೂಲ್ ನಿರ್ದೇಶಕ ಪಿ.ನಾಗರಾಜು, ಜಿ.ಪಂ. ಸದಸ್ಯೆ ಶಾಂತಮ್ಮ, ತಾ.ಪಂ. ಅಧ್ಯಕ್ಷೆ ಲಕ್ಷ್ಮೀ, ಸದಸ್ಯ ಮಹಿಪತಿ, ಮುಖಂಡರಾದ ಕೆ.ರಮೇಶ್, ಗಾಣಕಲ್ ನಟರಾಜ್ ಮತ್ತಿತರರು ಭಾಗವಹಿಸಿದ್ದರು.