ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಜಿಲ್ಲೆಯಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯ ಆರೋಪ

Rashmi Kasaragodu
Updated On : 5 Dec 2013, 1:41 am

ರಾಮನಗರ: ಜಿಲ್ಲೆಯಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರದಂತ ಕೃತ್ಯಗಳು ನಿರಂತರವಾಗಿ ನಡೆಯುತ್ತಿವೆ. ಜಿಲ್ಲಾಡಳಿತದಿಂದ ಸೂಕ್ತ ರಕ್ಷಣೆ ದೊರೆಯದ ಕಾರಣ ದಲಿತರು ಭಯದ ವಾತಾವರಣದಲ್ಲಿ ಜೀವಿಸುವಂತಾಗಿದೆ. ಈ ಸಂಬಂಧ ಕೂಡಲೇ ದಲಿತ ಮುಖಂಡರ ಸಭೆ ಕರೆಯಬೇಕೆಂದು ಒತ್ತಾಯಿಸಿ ದಲಿತ ಮುಖಂಡರ ನಿಯೋಗ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತು.
ಇತ್ತೀಚೆಗೆ ತಾಲೂಕಿನ ಚಿಕ್ಕಗಂಗವಾಡಿ ಗ್ರಾಮದಲ್ಲಿ ದಲಿತ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದರೂ ಜಿಲ್ಲಾಧಿಕಾರಿ ಸಹಿತ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ. ಕನಕಪುರ ತಾಲೂಕಿನಾದ್ಯಂತ ದಲಿತರ ಮೇಲೆ ನಿತ್ಯ ದೌರ್ಜನ್ಯ ನಡೆಯುತ್ತಿದ್ದರೂ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ದಲಿತರ ಮೇಲೆ ದೌರ್ಜನ್ಯ ತಡೆ ಸಂಬಂಧ ಪ್ರತಿ ಮೂರು ತಿಂಗಳಿಗೊಮ್ಮೆ ದಲಿತ ಮುಖಂಡರ ಸಭೆ ಕರೆಯಬೇಕೆಂಬ ಸರ್ಕಾರಿ ಆದೇಶವನ್ನು ಜಿಲ್ಲಾಡಳಿತ ನಿರ್ಲಕ್ಷಿಸಿದೆ. ಇದರಿಂದ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿವೆ. ಕೂಡಲೇ ಸಭೆ ಕರೆದು, ಕುಂದು ಕೊರತೆಗಳನ್ನು ನಿವಾರಿಸಬೇಕು ಎಂದು ನಿಯೋಗ ಆಗ್ರಹಿಸಿತು.
ಜಿಲ್ಲಾಡಳಿತವು ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ ದಿನವನ್ನು ಸಾಂಕೇತಿಕವಾಗಿ ಆಚರಿಸಲು ನಿರ್ಧರಿಸಿದೆ. ಈ ಬಗ್ಗೆ ದಲಿತ ಸಮುದಾಯದ ಸಭೆಯನ್ನು ಕರೆಯದೆ ಅಧಿಕಾರಿಗಳು ಏಕ ಪಕ್ಷೀಯ ನಿರ್ಧಾರ ಕೈಗೊಂಡಿರುವುದನ್ನು ನಿಯೋಗ ಖಂಡಿಸಿತು.  ಜಿಲ್ಲಾಡಳಿತ ಈ ಕೂಡಲೇ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ದಲಿತರ ಕುಂದು-ಕೊರತೆ ಸಭೆಯ ಕರೆಯಬೇಕು. ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಸಮುದಾಯದ ನಾಯಕರನ್ನು ಒಳಗೊಂಡಂತೆ ಕಾರ್ಯಕ್ರಮ ನಡೆಸಬೇಕು. ತಪ್ಪಿದಲ್ಲಿ ಜಿಲ್ಲಾಡಳಿತದ ವಿರುದ್ಧ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ನಿಯೋಗ ಎಚ್ಚರಿಸಿತು.
ನಿಯೋಗದಲ್ಲಿ ಸಮತಾ ಸೈನಿಕ ದಳದ ಜಿಲ್ಲಾಧ್ಯಕ್ಷ ಜಿ.ಗೋವಿಂದಯ್ಯ, ದಲಿತ ಮುಖಂಡರಾದ ಶಿವಕುಮಾರಸ್ವಾಮಿ, ಶಿವಶಂಕರ್, ರಾಂಪುರ ನಾಗೇಶ್, ಪುರುಶೋತ್ತಮ್, ರಮೇಶ, ಗುಮಲ್ಲಯ್ಯ, ಕುಮಾರ್, ಬಾಬು, ಸಂತೋಷ್, ಶಿವರಾಜ ಮತ್ತಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement