ಮೊರಾರ್ಜಿ ಶಾಲೆಯ ಶಿಕ್ಷಕ ಆತ್ಮಹತ್ಯೆ
ರಾಮನಗರ: ಆರ್ಥಿಕ ಮುಗ್ಗಟ್ಟಿನ ಹಿನ್ನೆಲೆಯಲ್ಲಿ ಮೊರಾರ್ಜಿ ಶಾಲೆಯ ಶಿಕ್ಷಕ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ರೈಲು ನಿಲ್ದಾಣದಲ್ಲಿ ಬುಧವಾರ ಸಂಭವಿಸಿದೆ. ತಾಲೂಕಿನ ಹುಣಸನಹಳ್ಳಿ ಗ್ರಾಮದ ಮಧುಸೂದನ್(33) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ. ಅವರು ತಾಲೂಕಿನ ಆನಮಾನಹಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿ ಹೊರಗುತ್ತಿಗೆ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಬೆಳಗ್ಗೆ 11.30ರಲ್ಲಿ ಚೆನ್ನೈನಿಂದ ಮೈಸೂರು ಕಡೆ ತೆರಳುತ್ತಿದ್ದ ಶತಾಬ್ದಿ ಎಕ್ಸ್‌ಪ್ರೆಸ್ ರೈಲುಗಾಡಿಗೆ ಸಿಲುಕಿ ಮಧುಸೂದನ್ ಆತ್ಮಹತ್ಯೆ ಮಾಡಿಕೊಂಡರು. ಮಧುಸೂದನ್ ವರ್ಷದ ಹಿಂದಷ್ಟೇ ವಿವಾಹವಾಗಿದ್ದರು. ಪತ್ನಿ ಗರ್ಭಿಣಿಯಾಗಿದ್ದಾರೆ. ಕಳೆದ ನಾಲ್ಕೈದು ತಿಂಗಳಿಂದ ಮೃತರಿಗೆ ವೇತನ ಬಿಡುಗಡೆ ಆಗಿರಲಿಲ್ಲ. ಪತ್ನಿಯ ಸೀಮಂತ ಮಾಡುವುದಕ್ಕೂ ಹಣಕಾಸಿನ ತೊಂದರೆ ಇತ್ತು. ಆರ್ಥಿಕ ಮುಗ್ಗಟ್ಟಿನಿಂದ ಬೇಸತ್ತು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಿಕಟವರ್ತಿ ಮೂಲಗಳು ತಿಳಿಸಿವೆ. ಘಟನೆ ಸಂಬಂಧ ರಾಮನಗರ ರೇಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.