ಜನರನ್ನು ಒಕ್ಕಲೆಬ್ಬಿಸದಂತೆ ಜಿಲ್ಲಾಧಿಕಾರಿಗಳಿಗೆ ಮನವಿ
ದೊಡ್ಡಬಳ್ಳಾಪುರ: ಇಲ್ಲಿನ ಸಂಜಯನಗರದ ಕೊಳಗೇರಿ ವಾಸಿಗಳನ್ನು ಒಕ್ಕಲೆಬ್ಬಿಸದಂತೆ ಒತ್ತಾಯಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶಂಕರ್ ಅವರಿಗೆ ಸ್ಥಳೀಯ ಮುಖಂಡರು ಮನವಿ ಪತ್ರ ಸಲ್ಲಿಸಿದ್ದಾರೆ.
ಕಳೆದ 40 ವರ್ಷಗಳಿಂದ ಇದೇ ಪ್ರದೇಶದಲ್ಲಿ ವಾಸವಿರುವ ದಾಖಲೆಗಳು, ಸರ್ಕಾರ ಕೊಟ್ಟಿರುವ ಸವಲತ್ತುಗಳ ವಿವರ, ಅಧಿಕೃತ ಕೊಳಗೇರಿ ಘೋಷಣೆಗೆ ಸಂಬಂಧಿಸಿದ ಎಲ್ಲ ದಾಖಲಾತಿಗಳು, ಕೊಳಗೇರಿ ಅಭಿವೃದ್ಧಿ ಮಂಡಲಿಯಿಂದ ಲಭ್ಯವಾಗಿರುವ ಸೌಲಭ್ಯಗಳ ಮಾಹಿತಿ ಸೇರಿದಂತೆ ಎಲ್ಲ ಪೂರಕ ದಾಖಲಾತಿಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗಿದೆ. ಯಾವುದೇ ಕಾರಣಕ್ಕೂ ಈ ಪ್ರದೇಶದಲ್ಲಿ ವಾಸವಿರುವ ನೂರಾರು ಕುಟುಂಬಗಳನ್ನು ಒಕ್ಕಲೆಬ್ಬಿಸದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಕೂಡಲೇ ಎಲ್ಲ ವಾಸಿಗಳಿಗೆ ಹಕ್ಕು ಪತ್ರಗಳನ್ನು ವಿತರಣೆ ಮಾಡಬೇಕು ಎಂದು ಆಗ್ರಹಿಸಲಾಗಿದೆ. ಮುಖಂಡರಾದ ಸಂಜೀವನಾಯಕ್, ಜನಪರ ಮಂಜು, ಶಿವಕುಮಾರ್, ವೆಂಕಟೇಶ್ ಮತ್ತಿತರರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ್ದರು.