ಶಿಕ್ಷಣ ಕೇವಲ ಅಂಕಗಳಿಗೆ ಸೀಮಿತ ಬೇಡ
ರಾಮನಗರ: ಶಿಕ್ಷಣ ಎಂದರೆ ಕೇವಲ ಅಕ್ಷರಗಳನ್ನು ಕಲಿತು, ಅಂಕ ಗಳಿಸುವುದಕ್ಕೆ ಮಾತ್ರ ಎನ್ನುವ ಕಲ್ಪನೆ ತಪ್ಪು. ಓದಿನ ಜತೆಗೆ ಸಾಮಾಜಿಕ ಪ್ರಜ್ಞೆ, ಸನ್ನಡತೆ, ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಕಡೆಗೂ ಗಮನ ಹರಿಸಬೇಕು ಎಂದು ವಿದ್ಯಾರ್ಥಿಗಳಿಗೆ ನಗರಸಭೆ ಮಾಜಿ ಅಧ್ಯಕ್ಷ ಕೆ. ಶೇಷಾದ್ರಿ ಕರೆ ನೀಡಿದರು. ನಗರಸಭೆ ವ್ಯಾಪ್ತಿಯ ವಿಜಯನಗರ ಬಡಾವಣೆಯಲ್ಲಿರುವ ರಾಮದುರ್ಗ ಸರ್ಕಾರಿ ಪ್ರೌಢ ಶಾಲೆಯ ಮಕ್ಕಳಿಗೆ ಉಚಿತ ಸೈಕಲ್ ವಿತರಿಸಿ ಮಾತನಾಡಿದ ಅವರು, ಸಮಾಜದಲ್ಲಿನ ಅಸಮಾನತೆಯನ್ನು ತೊಡೆದು ಹಾಕಿ, ದೇಶವನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯಲು ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು ಎಂದರು.
ಶಿಕ್ಷಣಕ್ಕೆ ಸರ್ಕಾರ ಸಾಕಷ್ಟು ಒತ್ತು ನೀಡಿದ್ದು, ಹಲವು ಸೌಲಭ್ಯಗಳನ್ನು ಒದಗಿಸಿದೆ. ಅದನ್ನು ಸದ್ಬಳಕೆ ಮಾಡಿಕೊಳ್ಳಲು ಮಕ್ಕಳು ಮುಂದಾಗಬೇಕು ಎಂದು ಹೇಳಿದರು. ನಗರಸಭೆ ಮಾಜಿ ಸದಸ್ಯ ಶಿವಕುಮಾರಸ್ವಾಮಿ, ಎಸ್. ಕೃಷ್ಣಮೂರ್ತಿ, ನಿವೃತ್ತ ಶಿಕ್ಷಕ ಕಗ್ಗಲ್ಲಯ್ಯ, ರಂಗರಾಜು, ಮುಖ್ಯ ಶಿಕ್ಷಕ ಕೃಷ್ಣಪ್ಪ ಮತ್ತಿತರರು ಭಾಗವಹಿಸಿದ್ದರು.