ವಿಚಾರ ಸಂಕಿರಣ, ಪರಮೇಶ್ವರ್ಗೆ ಅಭಿನಂದನೆ
ಕ.ಪ್ರ.ವಾರ್ತೆ ರಾಮನಗರ ಡಿ.25
ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 57ನೇ ಪುಣ್ಯಸ್ಮರಣೆ ಪ್ರಯುಕ್ತ ವಿಚಾರ ಸಂಕಿರಣ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರಿಗೆ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಎಸ್ಸಿ, ಎಸ್ಟಿ ಸಮಾನ ಮನಸ್ಕ ನೌಕರರ ವೇದಿಕೆ ಅಧ್ಯಕ್ಷ ಎಂ.ನಾಗರಾಜು ತಿಳಿಸಿದರು.
ರಾಜ್ಯ ಎಸ್ಸಿ, ಎಸ್ಟಿ ಸಮಾನ ಮನಸ್ಕ ನೌಕರರ ವೇದಿಕೆ, ಜಿಲ್ಲೆಯ ವಿವಿಧ ಇಲಾಖೆಗಳ ಎಸ್ಸಿ, ಎಸ್ಟಿ ನೌಕರರ ಸಂಘ ಮತ್ತು ವಿವಿಧ ದಲಿತ ಸಂಘಟನೆಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ಯಾವುದೇ ಒಂದು ಜನಾಂಗಕ್ಕೆ ಸೀಮಿತರಾದ ವ್ಯಕ್ತಿಯಲ್ಲ. ಎಲ್ಲಾ ವರ್ಗದ ಶೋಷಿತ ಸಮುದಾಯಗಳ ಧ್ವನಿಯಾಗಿದ್ದರು. ಆ ಮೂಲಕ ಅವರಿಗೆ ಸಂವಿಧಾನಬದ್ಧ ಹಕ್ಕು ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಮಹಾನ್ ವ್ಯಕ್ತಿಯಾಗಿದ್ದಾರೆ ಎಂದರು.
ಡಿ.29ರ ಬೆಳಗ್ಗೆ 11ಕ್ಕೆ ನಡೆಯುವ ಕಾರ್ಯಕ್ರಮವನ್ನು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು
ಉದ್ಘಾಟಿಸುವರು. ಕಾರ್ಮಿಕ ಸಚಿವ ಪಿ.ಟಿ. ಪರಮೇಶ್ವರ್ ನಾಯಕ್ ಅಧ್ಯಕ್ಷತೆ ವಹಿಸುವರು. ಬೆಂಗಳೂರಿನ ಮಹಾಬೋಧಿ ಸೊಸೈಟಿಯ ಪೂಜ್ಯ ಬುದ್ಧ ಪ್ರಕಾಶ್ ಬಂತೇಜಿ ಸಾನಿಧ್ಯ ವಹಿಸುವರು. ಸಂಸದ ಡಿ.ಕೆ.ಸುರೇಶ್ ಕುಮಾರ್, ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಭಾಗವಹಿಸುವರು.
ಕಾರ್ಮಿಕರ ಸಾಮಾಜಿಕ ಸುರಕ್ಷತೆಗೆ ದೀನದಲಿತರ ಆಶಾ ಜ್ಯೋತಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆ ವಿಷಯವಾಗಿ ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಮಹೇಶ್ಚಂದ್ರ ಗುರು ಹಾಗೂ ಅಸ್ಪೃಷ್ಯರ ಮೇಲಿನ ಸಾಮಾಜಿಕ ಬಹಿಷ್ಕಾರ ಇನ್ನೂ ಜೀವಂತ ವಿಷಯವಾಗಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವಿಜಯನಾರಸಿಂಹ ವಿಷಯ ಮಂಡಿಸುವರು.
ಡಾ.ನೆಲ್ಸನ್ ಮಂಡೇಲಾ, ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಹಾಗೂ ರಾಷ್ಟ್ರಕವಿ ಕುವೆಂಪು ಅವರಿಗೆ ಗೌರವ ನುಡಿನಮನ ಸಲ್ಲಿಸಲಾಗುವುದು ಎಂದರು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಪುಷ್ಪಾಲಂಕಾರ ಮಾಡಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ವಿವಿಧ ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ನಗರದ ಕಂದಾಯ ಭವನದ ಆವರಣದಿಂದ ಅಂಬೇಡ್ಕರ್ ಭವನದವರೆಗೆ ಮೆರವಣಿಗೆಯಲ್ಲಿ ತರಲಾಗುವುದು ಎಂದು ನಾಗರಾಜು ತಿಳಿಸಿದರು.