'ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಡಿ'
ರಾಮನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಕರುನಾಡ ಸೇನೆ ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಐಜೂರು ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಕೆಲ ಕಾಲ ಬೆಂಗಳೂರು-ಮೈಸೂರು ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಪಡಿಸಿದರು. ಕೇಂದ್ರ, ರಾಜ್ಯ ಹಾಗೂ ತಮಿಳುನಾಡು ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದೆ. ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೂ ತತ್ವಾರ ಉಂಟಾಗಿದೆ. ಜಲಾಶಯಗಳು ನೀರಿಲ್ಲದೇ ಬರಿದಾಗಿವೆ. ಇಂತಹ ಪರಿಸ್ಥಿಯಲ್ಲಿ ನೀರು ಬಿಡುವ ದುಸ್ಸಾಹಸಕ್ಕೆ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಕೈ ಹಾಕಬಾರದು ಎಂದು ಆಗ್ರಹಿಸಿದರು.
ರಾಜ್ಯದ ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ಕೇವಲ 3 ಟಿಎಂಸಿ ನೀರು ಮಾತ್ರ ಇದೆ. ಸುಪ್ರೀಂ ಕೋರ್ಟ್ ಆದೇಶ ನೀಡಿರುವಂತೆ 2.44 ಟಿಎಂಸಿ ನೀರು ಹರಿಸಿದರೆ ಕಾವೇರಿ ಆಶ್ರಿತ ಪ್ರದೇಶಗಳಲ್ಲಿ ಕುಡಿಯಲು ಸಹ ನೀರು ಇರದಂತಾಗುತ್ತದೆ ಎಂದರು.
ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವು ಆಂತರಿಕ ಕಚ್ಚಾಟದಲ್ಲಿ ತೊಡಗಿದೆ. ಕುರ್ಚಿ ಉಳಿಸಿಕೊಳ್ಳುವುದಕ್ಕೆ ಹರಸಾಹಸ ನಡೆಸುತ್ತಿರುವ ಬಿಜೆಪಿಯು ರಾಜ್ಯದ ಹಿತ ಮರೆತಿದೆ ಎಂದು ಟೀಕಿಸಿದರು.
ಪ್ರತಿಭಟನೆಯಲ್ಲಿ ಸೇನೆಯ ರಾಜ್ಯ ಉಪಾಧ್ಯಕ್ಷ ಜಗದೀಶ್, ವಕೀಲ ನಿರಂಜನ, ಷಡಕ್ಷರಿ, ಗಾಯತ್ರಿ ಬಾಯಿ, ಚಂದ್ರು ಮತ್ತಿತರರು ಭಾಗವಹಿಸಿದ್ದರು.