ರಾಮನಗರ: ಮಕ್ಕಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಕ್ರೀಡೆಗಳು ಪೂರಕವಾಗಿವೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮರಿದೇವರು ಅಭಿಪ್ರಾಯಪಟ್ಟರು.
ನಗರದ ನೇತಾಜಿ ಪಾಪ್ಯುಲರ್ ಶಾಲೆಯ ವಾರ್ಷಿಕ ಕ್ರೀಡಾಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಭಾಗವಹಿಸುವಂತೆ ಶಿಕ್ಷಕರು ಹಾಗೂ ಪೋಷಕರು ಪ್ರೋತ್ಸಾಹಿಸಬೇಕು ಎಂದರು.
ನಿರ್ದಿಷ್ಟ ಗುರಿ ಇರಿಸಿಕೊಂಡು, ಸತತ ಪರಿಶ್ರಮ ಪಟ್ಟರೆ ಅಸಾಧ್ಯವಾದುದನ್ನೂ ಸಾಧಿಸಬಹುದು. ಈ ನಿಟ್ಟಿನಲ್ಲಿ ಮಕ್ಕಳು ಓದುವ ಹವ್ಯಾಸವನ್ನು ರೂಢಿಸಿಕೊಂಡು, ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ಉನ್ನತ ಹುದ್ದೆಗಳನ್ನು ಅಲಂಕರಿಸಿ, ಉತ್ತಮ ಬದುಕು ರೂಪಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ವಿವಿಧ ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಮಕ್ಕಳು ಕರಾಟೆ ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಶಾಸಕ ಕೆ.ರಾಜು, ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಹ ನಿರ್ದೇಶಕ ನಾಗೇಂದ್ರಕುಮಾರ್, ನಗರಸಭಾ ಸದಸ್ಯರಾದ ಎ.ಜೆ.ಸುರೇಶ್, ಶಿವಕುಮಾರಸ್ವಾಮಿ, ಕೆ.ಗುರುವೇಗೌಡ, ಕೆ.ವೀರೇಗೌಡ, ಪುಟ್ಟಣ್ಣ, ಸಿದ್ದೇಗೌಡ, ಪರಮೇಶ್ವರಯ್ಯ, ಬಸವರಾಜು, ರಾಜಶೇಖರಯ್ಯ ಮತ್ತಿತರರು ಭಾಗವಹಿಸಿದ್ದರು.