ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಸಾಮೂಹಿಕ ಅತ್ಯಾಚಾರ: ಪೊಲೀಸರ ವಿರುದ್ಧ ಕಿಡಿ

Rashmi Kasaragodu
Updated On : 16 Feb 2013, 12:29 pm

ರಾಮನಗರ: ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹತ್ತು ದಿನಗಳ ಹಿಂದೆ ನಡೆದ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿರುವ ಪೊಲೀಸರ ವಿರುದ್ಧ  ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ನಗರದ ಐಜೂರು ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದರು. ರಾಜ್ಯ ಸರ್ಕಾರ, ಗೃಹ ಸಚಿವರು ಹಾಗೂ ಗೃಹ ಇಲಾಖೆ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ತಾವರೆಕೆರೆ ಬಳಿ ದುಷ್ಕರ್ಮಿಗಳು ಯುವತಿಯ ಮೇಲೆ ಅತ್ಯಾಚಾರ ನಡೆಸಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪರಾರಿಯಾಗಿದ್ದಾರೆ. ಆಕೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾರೆ. ಘಟನೆ ನಡೆದು 10 ದಿನಗಳೇ ಕಳೆದರೂ ಆರೋಪಿತರನ್ನು ಬಂಧಿಸದಿರುವುದು ಪೊಲೀಸರ ವೈಫಲ್ಯಕ್ಕೆ ಸಾಕ್ಷಿ ಎಂದು ಟೀಕಿಸಿದರು.
ನಾಚಿಕೆಗೇಡಿನ ಸಂಗತಿ:  ದೆಹಲಿಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಪ್ರತಿಭಟನೆ ನಡೆದಿತ್ತು. ಇಷ್ಟಾದರೂ ಕೂಡ ಸರ್ಕಾರ ಎಚ್ಚೆತ್ತುಕೊಳ್ಳದಿರುವುದು ನಾಚಿಕೆಗೇಡಿನ ಸಂಗತಿ ಎಂದು ಪ್ರತಿಭಟನಾಕಾರರು ಆರೋಪಿಸಿದರು.  
ಅತ್ಯಾಚಾರಕ್ಕೊಳಗಾಗಿ ಕೋಮಾ ಸ್ಥಿತಿಯಲ್ಲಿರುವ ಯುವತಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ದೊರೆಯುತ್ತಿಲ್ಲ. ಯುವತಿಯನ್ನು ಕೂಡಲೇ ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಿ, ಉತ್ತಮ ಚಿಕಿತ್ಸೆ ಕೊಡಿಸಬೇಕು. ಒಂದು ವೇಳೆ ಯುವತಿ ಸಾವನ್ನಪ್ಪಿದರೆ ಸರ್ಕಾರವೇ ನೇರ ಹೊಣೆ ಎಂದು ಎಚ್ಚರಿಸಿದರು.
ಯುವತಿಯ ಮೇಲೆ ಅತ್ಯಾಚಾರ ಎಸಗಿ, ಮಾರಣಾಂತಿಕ ಹಲ್ಲೆ ಮಾಡಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ, ಅವರಿಗೆ ಪುರುಷತ್ವ ಹರಣ ಇಲ್ಲವೇ ಮರಣದಂಡನೆಯಂತ ಉಗ್ರ ಶಿಕ್ಷೆ ನೀಡಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.
ಘಟನೆಗೆ ನೈತಿಕ ಹೊಣೆ ಹೊತ್ತು ಗೃಹ ಸಚಿವರು ರಾಜೀನಾಮೆ ನೀಡಬೇಕು. ತಪ್ಪಿದಲ್ಲಿ ಆರ್.ಅಶೋಕ್ ಅವರನ್ನು ವೇದಿಕೆ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಎಂದರು. ಪ್ರತಿಭಟನೆಯಲ್ಲಿ ಸಂಘಟನೆ ರಾಜ್ಯಾಧ್ಯಕ್ಷ ರಮೇಶ್‌ಗೌಡ, ಪದಾಧಿಕಾರಿಗಳಾದ ಬೇವೂರು ಯೋಗೇಶ್, ರಂಜಿತ್‌ಗೌಡ, ಲಕ್ಷ್ಮಮ್ಮ ಇತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement