ಯಾವಪ್ಪನಿಂದಲೂ ಸರ್ಕಾರ ಪತನ ಅಸಾಧ್ಯ
ದೊಡ್ಡಬಳ್ಳಾಪುರ: ಯಡಿಯೂರಪ್ಪ ಮಾತ್ರವಲ್ಲ, ಯಾವ ಅಪ್ಪನಿಂದಲೂ ಪ್ರಸಕ್ತ ಬಿಜೆಪಿ ನೇತೃತ್ವದ ಸರ್ಕಾರ ಬೀಳಿಸಲು ಸಾಧ್ಯವಿಲ್ಲ. ಸರ್ಕಾರ ಸುಭದ್ರವಾಗಿದೆಎಂದು ಉಪ ಮುಖ್ಯಮಂತ್ರಿ ಆರ್.ಅಶೋಕ ನೇರವಾಗಿ ಕುಟುಕಿದ್ದಾರೆ.
ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಲುವಾಗಿ ಇಲ್ಲಿನ ಜಯಚಾಮರಾಜೇಂದ್ರ ವೃತ್ತದಲ್ಲಿ ಬುಧವಾರ ಮಧ್ಯಾಹ್ನ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎಷ್ಟೇ ಮಂದಿ ರಾಜಿನಾಮೆ ನೀಡಿದರೂ ಸರ್ಕಾರ ತಾಂತ್ರಿಕವಾಗಿ ಉಳಿದೇ ಉಳಿಯುತ್ತದೆ. ಜೊತೆಗೆ ಸಿಎಂ ಜಗದೀಶ ಶೆಟ್ಟರ್ ಈ ಬಾರಿಯ ಬಜೆಟ್ ಅನ್ನು ಯಶಸ್ವಿಯಾಗಿ ಮಂಡಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ದೊಡ್ಡಬಳ್ಳಾಪುರ ಕೇಂದ್ರ ಬಿಂದು: ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೇಂದ್ರವಾಗಲು ಎಲ್ಲ ಅರ್ಹತೆ ಹೊಂದಿದೆ. ಈ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು.
ಜೊತೆಗೆ ದೊಡ್ಡಬಳ್ಳಾಪುರ ತಾಲೂಕಿನ ಅಭಿವೃದ್ಧಿಗೆ 300 ಕೋಟಿ ವೆಚ್ಚದ ಅನುದಾನವನ್ನೂ ಮುಂಬರುವ ದಿನಗಳಲ್ಲಿ ನೀಡುವ ಭರವಸೆ ನೀಡಿದ ಅವರು, ಈ ಭಾಗದ ಜನರ ನೀರಿನ ಬವಣೆ ನೀಗಿಸಲು ಎತ್ತಿನಹೊಳೆ ಯೋಜನೆಗೆ ಸಂಪುಟ ಅನುಮೋದನೆ ನೀಡಿದೆ. ಹೇಮಾವತಿ ನೀರನ್ನು ಈ ಭಾಗಕ್ಕೆ ಹರಿಸುವ ಕುರಿತೂ ಪರಿಶೀಲನೆ ನಡೆಯುತ್ತಿದೆ. ಆರೋಗ್ಯ ಸಚಿವ ಅರವಿಂದ ಲಿಂಬಾವಳಿ ಮಾತನಾಡಿ, ರಾಜ್ಯದ ಎಲ್ಲ ಭಾಗಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ನಡೆಯುತ್ತಿದೆ. ದೊಡ್ಡಬಳ್ಳಾಪುರ ಆಸ್ಪತ್ರೆಯನ್ನು 200 ಹಾಸಿಗೆಗಳ ಜಿಲ್ಲಾಸ್ಪತ್ರೆಯಾಗಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಮುಂಬರುವ ದಿನಗಳಲ್ಲಿ ಸರ್ಕಾರ ಗರ್ಭಿಣಿ ಮಹಿಳೆಯರಿಗೆ ಮನೆಯಲ್ಲೇ ಚಿಕಿತ್ಸೆ ನೀಡಲು 104 ಎಂಬ ನೂತನ ಸೇವಾ ಯೋಜನೆ ಜಾರಿಗೆ ತರಲು ಚಿಂತಿಸುತ್ತಿದೆ ಎಂದರು.
ವಸತಿ ಸಚಿವ ವಿ.ಸೋಮಣ್ಣ ಮಾತನಾಡಿ, ರಾಜೀವಗಾಂಧಿ ವಸತಿ ಯೋಜನೆಯಡಿ ಒಂದು ಸಾವಿರ ಮನೆಗಳನ್ನು ದೊಡ್ಡಬಳ್ಳಾಪುರಕ್ಕೆ ನೀಡಲಾಗಿದೆ. ಇದೇ ಯೋಜನೆಯಲ್ಲಿ ನೀಡುತ್ತಿದ್ದ ಮನೆ ನಿರ್ಮಾಣ ಅನುದಾನವನ್ನು 75 ಸಾವಿರದಿಂದ 1 ಲಕ್ಷಕ್ಕೆ ಏರಿಸಿ ಈ ಬಜೆಟ್ನಲ್ಲಿ ಮಂಡಿಸಲಾಗುವುದು ಎಂದು ವಿವರಿಸಿದರು.
ಸ್ಥಳೀಯ ಶಾಸಕ, ಕೊಳಗೇರಿ ಅಭಿವೃದ್ಧಿ ಮಂಡಲಿ ಅಧ್ಯಕ್ಷ ಜೆ.ನರಸಿಂಹಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿವಿಧ ಇಲಾಖೆಗಳ ಅನುದಾನಗಳಲ್ಲಿ ಈಗ ದೊಡ್ಡಬಳ್ಳಾಪುರ ನಗರದಲ್ಲಿ ನೂತನವಾಗಿ ನಿರ್ಮಿಸಲಾಗುವ ಕೆಎಸ್ಆರ್ಟಿಸಿ ಬಸ್ನಿಲ್ದಾಣಕ್ಕೆ ಶಂಕುಸ್ಥಾಪನೆ, 100 ಹಾಸಿಗೆಗಳ ವ್ಯವಸ್ಥೆ ಇರುವ ಸುಸಜ್ಜಿತ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ ಶಂಕುಸ್ಥಾಪನೆ, ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಿಸಲಾಗಿರುವ ಪ್ರವಾಸಿ ಮಂದಿರದ ನೂತನ ಕಟ್ಟದ ಉದ್ಘಾಟನೆ, ಕೊಳಗೇರಿ ನಿವಾಸಿಗಳಿಗೆ ಹಕ್ಕುಪತ್ರಗಳ ವಿತರಣೆ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆಯ ಗೋದಾಮುಗಳ ಉದ್ಘಾಟನೆ ನಡೆಯುತ್ತಿದೆ ಎಂದರು.ರೇಷ್ಮೆ ಮಂಡಲಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ಜಿಲ್ಲಾಧಿಕಾರಿ ಅಯ್ಯಪ್ಪ, ಸಿಇಒ ಎನ್.ಕೃಷ್ಣಪ್ಪ, ಜಿಪಂ ಅಧ್ಯಕ್ಷ ವಿ.ನಾರಾಯಣಸ್ವಾಮಿ, ತಾಪಂ ಅಧ್ಯಕ್ಷ ಡಿ.ನಾಗರಾಜ್, ನಗರಸಭೆ ಅಧ್ಯಕ್ಷ ಜಗದೀಶರೆಡ್ಡಿ, ಜಿಪಂ ಉಪಾಧ್ಯಕ್ಷ ಹನುಮಂತೇಗೌಡ, ಸದಸ್ಯ ಎನ್.ಅರವಿಂದ್, ಉಮಾಬಾಯಿ, ಭಾಗ್ಯಮ್ಮ, ಎಪಿಎಂಸಿ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್, ಕೃಷ್ಣಮೂರ್ತಿ, ಬಿ.ಸಿ.ನಾರಾಯಣಸ್ವಾಮಿ ಮತ್ತಿತರರು ಭಾಗವಹಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.