ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಜೀತ ಪದ್ಧತಿ ನಿರ್ಮೂಲನೆಗೆ ಸಂಘ ಸಂಸ್ಥೆ ಕೈಜೋಡಿಸಬೇಕು: ವೆಂಕಟೇಶ್

Srinivasa Murthy VN
Updated On : 4 Jul 2013, 12:34 pm

ರಾಮನಗರ:  ಆಧುನಿಕ ಸಮಾಜಕ್ಕೆ ಶಾಪವಾಗಿ ಪರಿಣಮಿಸಿರುವ ಜೀತ ಪದ್ಧತಿ ನಿರ್ಮೂಲನೆಗೆ ಸರ್ಕಾರದ ಜತೆಗೆ ಸಂಘ-ಸಂಸ್ಥೆಗಳು ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಎಂ.ವಿ. ವೆಂಕಟೇಶ್ ಕರೆ ನೀಡಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾರ್ಮಿಕ ಇಲಾಖೆ ಹಾಗೂ ಸಂಘ-ಸಂಸ್ಥೆಗಳಿಂದ ಬುಧವಾರ ನಡೆದ ಜಿಲ್ಲಾ ಮಟ್ಟದ ಜೀತ ಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಕ್ರಿಯಾ ಯೋಜನೆ, ಜೀತದಾಳು ಸಮೀಕ್ಷೆಯ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜೀತ ಪದ್ಧತಿಯಿಂದ ಸಮಾಜದಲ್ಲಿ ಭೌತಿಕ, ಆರ್ಥಿಕ ಬೆಳವಣಿಗೆ ಕುಂಠಿತವಾಗುತ್ತದೆ. ಜೀತ ಪದ್ಧತಿಯು ಕಟ್ಟಡ ನಿರ್ಮಾಣ, ಇಟ್ಟಿಗೆ ಕಾರ್ಖಾನೆಗಳು, ಜಲ್ಲಿ ಕ್ರಷರ್‌ಗಳು, ಹಾಗೂ ಗಣಿಗಾರಿಕೆಗಳಲ್ಲೇ ಹೆಚ್ಚಾಗಿ ಕಂಡು ಬರುತ್ತಿದೆ. ಇದರ ನಿಯಂತ್ರಣಕ್ಕೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದರು.
ಜೀತ ಪದ್ಧತಿ ನಿರ್ಮೂಲನೆಗಾಗಿ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳು ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ನಡೆಯಬೇಕು. ಗ್ರಾಮ ಪಂಚಾಯಿತಿ ಅಧಿಕಾರಿಗಳು ಈ ನಿಟ್ಟಿನಲ್ಲಿ ಕಾಳಜಿ ವಹಿಸಬೇಕು. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ವೆಂಕಟೇಶ್ ತಿಳಿಸಿದರು.
ಜೀತ ಪದ್ಧತಿಗೆ ಸಿಲುಕಿ ಜೀತ ಮಾಡುತ್ತಿರುವವರನ್ನು ಗುರುತಿಸಿ, ಅವರಿಗೆ ಪುನರ್ವಸತಿ ಕಲ್ಪಿಸಬೇಕು ಎಂದು ಜೀವಿಕ ರಾಜ್ಯ ಸಂಚಾಲಕ ಹಾಗೂ ಮಾನವ ಹಕ್ಕುಗಳ ಆಯೋಗದ ಸದಸ್ಯ ಕಿರಣ್ ಕಮಲ್ ಪ್ರಸಾದ್ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ಉಪ ವಿಭಾಗಾಧಿಕಾರಿ ಡಾ.ರಾಜೇಂದ್ರಪ್ರಸಾದ್, ಸಮಾಜ ಕಲ್ಯಾಣಾಧಿಕಾರಿ ತಿಮ್ಮಪ್ಪ, ಕಾರ್ಮಿಕಾಧಿಕಾರಿ ನಾಗರಾಜು, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಜಯಮ್ಮ, ಜೀವಿಕ ಸಂಚಾಲಕ ಗಂಗಹನುಮಯ್ಯ, ರಾಜ್ಯ ಮಹಿಳಾ ಸಂಚಾಲಕ ವಿಜಯಕುಮಾರಿ, ಸುಂದರೇಶ್ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement