ಪಾದಚಾರಿ ಮಾರ್ಗ ತೆರವುಗೊಳಿಸಿ: ಡಿಸಿ
ರಾಮನಗರ: ಜಿಲ್ಲೆಯ ನಾಲ್ಕೂ ತಾಲೂಕುಗಳ ನಗರವ್ಯಾಪ್ತಿಯಲ್ಲಿನ ರಸ್ತೆಗಳಲ್ಲಿ ಪಾದಚಾರಿ ಮಾರ್ಗವನ್ನು ಅತಿಕ್ರಮಿಸಿರುವ ಅಂಗಡಿ ಮಾಲೀಕರು ಸ್ವಯಂ ಪ್ರೇರಿತರಾಗಿ ತೆರವುಗೊಳಿಸಬೇಕು. ಇಲ್ಲದಿದ್ದರೆ ಜಿಲ್ಲಾಡಳಿತದಿಂದ ತೆರವು ಕಾರ್ಯಾಚರಣೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ವಿ.ಶ್ರೀರಾಮರೆಡ್ಡಿ ತಿಳಿಸಿದರು.
ಹೆಚ್ಚು ಜನಸಂದಣಿ ಹೊಂದಿರುವ ರಸ್ತೆಗಳಲ್ಲಿ ಅಂಗಡಿ ಮಾಲೀಕರು ಪಾದಚಾರಿ ಮಾರ್ಗ ಒತ್ತುವರಿ, ತಳ್ಳುಗಾಡಿಗಳನ್ನು ರಸ್ತೆಗಳಲ್ಲಿ ನಿಲ್ಲಿಸುವುದು ಹಾಗೂ ಅನಧಿಕೃತವಾಗಿ ಪೆಟ್ಟಿ ಅಂಗಡಿಗಳನ್ನು ಇಟ್ಟುಕೊಂಡಿರುವುದರಿಂದ ಜನರು ರಸ್ತೆಯಲ್ಲಿಯೇ ನಡೆದು ಹೋಗಬೇಕಾದ ಪರಿಸ್ಥಿತಿ ಇದೆ. ಇದರಿಂದಾಗಿ ಅಪಘಾತಗಳು ಹೆಚ್ಚಾಗುತ್ತಿವೆ ಎಂದು ನಗರದ ಜಿಲ್ಲಾಧಿಕಾರಿ ಭವನದಲ್ಲಿ ಕರೆಯಲಾಗಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.
ಮೊದಲ ಹಂತದಲ್ಲಿ ಕನಕಪುರ ನಗರದಲ್ಲಿ ತೆರವು ಕಾರ್ಯಾಚರಣೆಯನ್ನು ಶುಕ್ರವಾರದಿಂದ ಪ್ರಾರಂಭಿಸಲಾಗುವುದು. ರಸ್ತೆ ಅತಿಕ್ರಮಣವು ಕಾನೂನು ಬಾಹಿರವೆಂದು ಸುಪ್ರೀಂ ಕೋರ್ಟ್ ಆದೇಶವಿರುವುದರಿಂದ ಯಾವುದೇ ನೋಟಿಸ್ ನೀಡುವ ಅಗತ್ಯ ಇಲ್ಲ ಎಂದು ಎಸ್ಪಿ ಅನುಪಮ್ ಅಗ್ರವಾಲ್ ತಿಳಿಸಿದರು.
ಪಾದಚಾರಿಗಳು ಹಾಗೂ ವಾಹನ ಸವಾರರ ಹಿತದೃಷ್ಟಿಯಿಂದ ಈ ತೆರವು ಕಾರ್ಯಾಚರಣೆ ಪ್ರಾರಂಭಿಸಲಾಗಿದೆಯೇ ಹೊರತು, ಬೇರಾವುದೇ ಉದ್ದೇಶ ಇಲ್ಲ. ಆದ್ದರಿಂದ ರಸ್ತೆ ಅತಿಕ್ರಮಣಕಾರರು ಇದಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು. ಈ ವೇಳೆ ನಗರಸಭೆ ಆಯುಕ್ತ ಯಶವಂತ್ ಕುಮಾರ್ ಹ್ಹಾಜರಿದ್ದರು.
ಲೋಕಾಯುಕ್ತರ ಭೇಟಿ 23ರಂದು
ರಾಮನಗರ: ಲೋಕಾಯುಕ್ತ ನ್ಯಾ. ಡಾ.ವೈ.ಭಾಸ್ಕರ್ ರಾವ್ ಅವರು ಜು.23ರ ಬೆಳಗ್ಗೆ 10ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿ, ಜಿಲ್ಲಾ ವ್ಯಾಪ್ತಿಯಲ್ಲಿ ಬಾಕಿ ಇರುವ ಲೋಕಾಯುಕ್ತ ಪ್ರಕರಣಗಳ ಬಗ್ಗೆ ಅಧಿಕಾರಿಗಳ ವಿಚಾರಣೆ ನಡೆಸುವರು ಹಾಗೂ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ನಿಗದಿತ ಸಮಯಕ್ಕೆ ಸರಿಯಾಗಿ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಯ ಮಾಹಿತಿಯೊಂದಿಗೆ ಹಾಜರಿದ್ದು, ಬಾಕಿ ಪ್ರಕರಣಗಳ ಬಗ್ಗೆ ಮಾಹಿತಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಸೂಚಿಸಿದ್ದಾರೆ.
ಪಿಯು ಅಂಕಪಟ್ಟಿ ಪಡೆಯಲು ಆದೇಶ
ರಾಮನಗರ: ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರು 2013ರ ಮಾರ್ಚ್ನಲ್ಲಿ ನಡೆದ ದ್ವಿತಿಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂಕಪಟ್ಟಿಗಳನ್ನು ಉಪ ನಿರ್ದೇಶಕರ ಕಚೇರಿಯಿಂದ ಪಡೆದುಕೊಳ್ಳುವಂತೆ ಜಿಲ್ಲಾ ಪದವಿ ಪೂರ್ವ ಹಾಗೂ ವೃತ್ತಿ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಡಿ. ಲಿಂಗರಾಜು ತಿಳಿಸಿದ್ದಾರೆ.