ಉಪ ಚುನಾವಣೆ: ಸಿಎಂ-ಪರಮೇಶ್ವರ ಚರ್ಚೆ
ಬೆಂಗಳೂರು: ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಆಡಳಿತಾರೂಢ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಕುರಿತ ಚರ್ಚೆ ಆರಂಭಿಸಿದೆ.
ಈ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿಯ ಕುರಿತೂ ಉಭಯ ನಾಯಕರು ಮಾತುಕತೆ ನಡೆಸಿದ್ದಾರೆ. ಎಚ್.ಡಿ. ಕುಮಾರಸ್ವಾಮಿ ಅವರು ವಿಧಾನಸಭೆಗೆ ಆಯ್ಕೆಯಾಗಿ ಲೋಕಸಭಾ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಮತ್ತು ಎನ್. ಚಲುವರಾಯಸ್ವಾಮಿ ಅವರ ರಾಜಿನಾಮೆಯಿಂದಾಗಿ ಮಂಡ್ಯ ಲೋಕಸಭಾ ಕ್ಷೇತ್ರ ಖಾಲಿಯಾಗಿದ್ದು, ಈ ಕ್ಷೇತ್ರಗಳಿಗೆ ಆ. 21ರಂದು ಚುನಾವಣೆ ನಿಗದಿಪಡಿಸಿದೆ.
ಈ ಎರಡೂ ಕ್ಷೇತ್ರಗಳು ಜೆಡಿಎಸ್ ಕೈಯ್ಯಲ್ಲಿದ್ದವು. ಇದನ್ನು ಹೇಗಾದರೂ ಮಾಡಿ ತನ್ನ ವಶಕ್ಕೆ ತೆಗೆದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ. ಲೋಕಸಭೆ ಅವಧಿ ಇನ್ನು ಕೆಲವೇ ತಿಂಗಳು ಇದ್ದರೂ ಈ ಕ್ಷೇತ್ರಗಳಲ್ಲಿ ಗೆಲುವು ಆಡಳಿತ ಪಕ್ಷಕ್ಕೆ ಪ್ರತಿಷ್ಠೆಯಾಗಿರುವುದರಿಂದ ಪ್ರಬಲ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಕಾಂಗ್ರೆಸ್ನ ಹಿರಿಯ ಶಾಸಕ ಹಾಗೂ ಮಾಜಿ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಅವರ ಸಹೋದರ ಡಿ.ಕೆ. ಸುರೇಶ್, ಮಾಜಿ ಸಂಸದೆ ತೇಜಸ್ವಿನಿ ಗೌಡ ಹಾಗೂ ಕನಕಪುರ ಮೂಲದ ಉದ್ಯಮಿಯೊಬ್ಬರ ಹೆಸರು ಪ್ರಸ್ತಾಪವಾಗಿದೆ. ಇನ್ನು ಮಂಡ್ಯ ಲೋಕಸಕ್ಷಾ ಕ್ಷೇತ್ರಕ್ಕೆ ಮಾಜಿ ಸಚಿವ ಆತ್ಮಾನಂದ ಮತ್ತು ಎಲ್.ಆರ್. ಶಿವರಾಮೇಗೌಡರ ಹೆಸರು ಇದ್ದು, ಜು. 25ರಂದು ನವದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಈ ಪೈಕಿ ಎರಡು ಹೆಸರುಗಳನ್ನು ಅಂತಿಮಗೊಳಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಬೆಂಗಳೂರು ಗ್ರಾಮಾಂತರ: ಜೆಡಿಎಸ್ನ ಭದ್ರ ಕೋಟೆಯಾಗಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಅಲುಗಾಡಿದೆ. ಕಾಂಗ್ರೆಸ್ ಪ್ರಬಲ ಅಭ್ಯರ್ಥಿಯನ್ನೇ ಕಣಕ್ಕಿಳಿಸಲು ನಿರ್ಧರಿಸಿ ಡಿ.ಕೆ. ಸುರೇಶ್ ಮತ್ತು ತೇಜಸ್ವಿನಿ ಗೌಡ ಅವರ ಹೆಸರನ್ನು ಪ್ರಸ್ತಾಪಿಸಿದೆ.
ಡಿ.ಕೆ. ಸುರೇಶ್ಗೆ ಟಿಕೆಟ್ ನೀಡಿದರೆ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಡಿ.ಕೆ. ಶಿವಕುಮಾರ್ ಸ್ವಲ್ಪ ಮಟ್ಟಿಗೆ ಸಮಾಧಾನಗೊಳ್ಳಬಹುದು ಎಂಬುದು ಒಂದು ಚಿಂತನೆ. ಆದರೆ, ಡಿ.ಕೆ. ಶಿವಕುಮಾರ್ ಅವರ ಕಡು ವೈರಿಯಾಗಿರುವ ತೇಜಸ್ವಿನಿಗೌಡ ಅವರು ಇದಕ್ಕೆ ಒಪ್ಪುವ ಸಾಧ್ಯತೆ ಇಲ್ಲ. ಹೀಗಾಗಿ ಈ ಇಬ್ಬರ ಮಧ್ಯೆ ಸಂಧಾನ ನಡೆಸುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ. ಒಂದು ವೇಳೆ ಈ ಎರಡು ಹೆಸರುಗಳ ಪೈಕಿ ಒಂದು ಹೆಸರು ಅಂತಿಮಗೊಳಿಸಲು ಕಷ್ಟಸಾಧ್ಯವಾದರೆ ರಾಜಿ ಅಭ್ಯರ್ಥಿಯಾಗಿ ಕನಕಪುರ ಮೂಲದ ಉದ್ಯಮಿಯೊಬ್ಬರನ್ನು ಕಣಕ್ಕಿಳಿಸುವ ಯೋಚನೆ ಕಾಂಗ್ರೆಸ್ನದ್ದು.