ಕೊಠಡಿ ನಿರ್ಮಾಣಕ್ಕೆ ಶಂಕುಸ್ಥಾಪನೆ
ಹೊಸಕೋಟೆ: ಪಟ್ಟಣದ ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಲಾಗುವುದು ಎಂದು ಶಾಸಕ ಎನ್.ನಾಗರಾಜ್ ಹೇಳಿದರು.
ಅವರು ಕಾಲೇಜಿಗೆ ನೂತನವಾಗಿ ನಿರ್ಮಿಸಲಿರುವ 7ಕೊಠಡಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಯೋಜನಾ ಪ್ರಾಧಿಕಾರದ ವತಿಯಿಂದ ಕೊಠಡಿ ನಿರ್ಮಾಣಕ್ಕಾಗಿ 46 ಲಕ್ಷ ರು. ಮಂಜೂರಾಗಿದ್ದು 90 ದಿನಗಳೊಳಗಾಗಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಕಾಲೇಜಿನ ಬಹಳಷ್ಟು ವಿದ್ಯಾರ್ಥಿಗಳು ಸುತ್ತಮುತ್ತಲಿನ ಗ್ರಾಮಗಳವರಾಗಿದ್ದು, ಬೆಳಗಿನ ಉಪಹಾರ ವ್ಯವಸ್ಥೆ ಮಾಡಲು ಯೋಜಿಸಲಾಗಿದೆ. ಖಾಲಿ ಇರುವ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಇಲಾಖೆಯ ಅಧಿಕಾರಿಗಳೊಂದಿಗೆ ಶೀಘ್ರದಲ್ಲೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಕೊಠಡಿಗಳಿಗೆ ಸಮರ್ಪಕ ಪೀಠೋಪಕರಣಗಳನ್ನು ಒದಗಿಸಲು 50 ಡೆಸ್ಕ್‌ಗಳನ್ನು ನೀಡಲಾಗುವುದು. ಕುಡಿಯುವ ನೀರಿನ ಹಾಗೂ ಇನ್ನಿತರೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಗಮನಹರಿಸಲಾಗುವುದು ಎಂದು ತಿಳಿಸಿದರು. ಪ್ರಿನ್ಸಿಪಾಲ್ ಪ್ರಾಸದ್ ಮಾತನಾಡಿ, ಜು.1ರಿಂದ ವಿದ್ಯಾರ್ಥಿಗಳಿಗೆ ತಜ್ಞ ತರಬೇತುದಾರರಿಂದ ಇಂಗ್ಲಿಷ್ ಕಲಿಕೆ ಬಗ್ಗೆ ಶಾಸಕರ ಪ್ರಾಯೋಜಕತ್ವದಲ್ಲಿ ವಿಶೇಷ ತರಗತಿಗಳನ್ನು ಪ್ರಾರಂಭಿಸಲಾಗುವುದು ಎಂದರು. ವಕೀಲ ರಾಮಚಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಸಹ ಮಾತನಾಡಿದರು.