ಶಾಲೆ ಬಿಟ್ಟ ಮಕ್ಕಳಿಗೆ ನಗದು ಪ್ರೋತ್ಸಾಹ ನೀಡಿ; ಸರ್ಕಾರಕ್ಕೆ ಹೈಕೋರ್ಟ್ ಸಲಹೆ
ಬೆಂಗಳೂರು: ಶಾಲೆ ಬಿಟ್ಟ ಹಾಗೂ ಹೊರಗುಳಿದ ವಿದ್ಯಾರ್ಥಿಗಳನ್ನು ಸೆಳೆಯಲು 'ನಗದು ಪ್ರೋತ್ಸಾಹ' ಯೋಜನೆ ಪ್ರಾರಂಭಿಸುವ ಬಗ್ಗೆ ಚಿಂತನೆ ನಡೆಸಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸಲಹೆ ನೀಡಿದೆ.
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಕರೆತರಲು ಮೊದಲು ಪೋಷಕರನ್ನು ಮನವೊಲಿಸಬೇಕು. ಪೋಷಕರಿಗೆ ಶಿಕ್ಷಣದ ಮಹತ್ವ ಹಾಗೂ ಸರ್ಕಾರದ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಇದರ ಜತೆಗೆ ನಗದು ಪ್ರೋತ್ಸಾಹ ನೀಡಲು ಸಾಧ್ಯವಿದೆಯೇ ಎಂಬ ಬಗ್ಗೆ ಗಂಭೀರ ಚಿಂತನೆ ನಡೆಸಿ ಎಂದು ಸರ್ಕಾರಕ್ಕೆ ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲಾ ಹಾಗೂ ನ್ಯಾ.ಬಿ.ವಿ.ನಾಗರತ್ನ ಅವರ ವಿಭಾಗೀಯ ಪೀಠ ಸೂಚಿಸಿದೆ.
ಮಕ್ಕಳಿಗೆ ಶಿಕ್ಷಣ ನೀಡಲು ಸರ್ಕಾರದ ನಾನಾ ಇಲಾಖೆ ಜತೆ ಕೈ ಜೋಡಿಸಬೇಕು. ಈ ಸಂಬಂಧ ಕೇಂದ್ರ ಸರ್ಕಾರವು ಸಾಕಷ್ಟು ಅನುದಾನ ನೀಡುತ್ತಿದೆ. ಆದರೆ ರಾಜ್ಯ ಸರ್ಕಾರ ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ. ಮಕ್ಕಳ ಶಿಕ್ಷಣ ಹಕ್ಕುಗಳನ್ನು ರಕ್ಷಿಸುವುದು ನ್ಯಾಯಾಂಗ ಹಾಗೂ ಶಾಸಕಾಂಗದ ಆದ್ಯ ಕರ್ತವ್ಯ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು. ಪೋಷಕರು ವಲಸೆ ಹೋಗುವುದರಿಂದ ಮಕ್ಕಳು ಶಾಲೆಯಿಂದ ಹೊರಗುಳಿಯುತ್ತಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಕೋರ್ಟ್ ಮನ್ನಣೆ ನೀಡಲಿಲ್ಲ. ಇದೊಂದು ಕಾರಣವೇ ಹೊರತು, ಶಾಲೆ ಬಿಟ್ಟ ಎಲ್ಲ ಉದಾಹರಣೆಗೆ ಇದೇ ಕಾರಣವಲ್ಲ ಎಂದು ಕೋರ್ಟ್ ಬೇಸರ ವ್ಯಕ್ತಪಡಿಸಿತು.
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ವಾಪಸ್ ಕರೆತರಲು ಸರ್ಕಾರ ಹಾಗೂ ಸ್ವಯಂಸೇವಾ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ. ರಾಜ್ಯ ಸರ್ಕಾರ ಈ ಸಂಬಂಧ ಸಾಕಷ್ಟು ವಿಶೇಷ ಯೋಜನೆಗಳನ್ನು ಪ್ರಾರಂಭಿಸಿದೆ. ಆದರೆ, ಕಲಿಕಾ ಸಾಮರ್ಥ್ಯವೂ ಈ ಬೆಳವಣಿಗೆಗೆ ಕಾರಣವಾಗಿದೆ ಎಂದು ಶಿಕ್ಷಣ ಇಲಾಖೆ ಕಾರ್ಯದರ್ಶಿ ಜಿ.ಕುಮಾರ್‌ನಾಯಕ್ ತಿಳಿಸಿದರು.
ರಾಜ್ಯದ ಸುಮಾರು 7 ಲಕ್ಷ ಮಕ್ಕಳು ಶಾಲೆಯಿಂದ ವಿಮುಖರಾಗಿದ್ದಾರೆ ಎಂದು ಹೈಕೋರ್ಟ್ ಸ್ವಯಂ ಪ್ರೇರಿತ ಅರ್ಜಿ ದಾಖಲಿಸಿಕೊಂಡಿತ್ತು.