ಸ್ಥಳೀಯ ಹಂತದಲ್ಲೇ ಸಮಸ್ಯೆ ಬಗೆಹರಿಸಿ
ಕ.ಪ್ರ.ವಾರ್ತೆ ಟಿ ದೊಡ್ಡಬಳ್ಳಾಪುರ ಟಿ ಜೂ.22
ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಎಂ.ವೀರಪ್ಪ ಮೊಯ್ಲಿ ಶನಿವಾರ ಜನಸಂಪರ್ಕ ಸಭೆಗಳನ್ನು ನಡೆಸಿದರು.
ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದ ಅವರು ತಾವು ಆಯ್ಕೆಯಾದಾಗಿನಿಂದಲೂ ಕಾಲ ಕಾಲಕ್ಕೆ ಜನ ಸಂಪರ್ಕ ಸಭೆಗಳನ್ನು ನಡೆಸುತ್ತ, ಸ್ಥಳೀಯ ಹಂತದಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಂಡಿದ್ದೇನೆ. ಅದೇ ರೀತಿ ಈ ಸಭೆಗಳೂ ನಡೆಯುತ್ತಿವೆಯೇ ಹೊರತು ಇದಕ್ಕೆ ಮತ್ತಾವುದೇ ಉದ್ದೇಶ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಇದು ಜನ ಬದಲಾವಣೆ ಬಯಸಿದ ಪರಿಣಾಮ. ಜನರ ನಿರೀಕ್ಷೆಗಳಿಗೆ ಪೂರಕವಾಗಿ ಸರ್ಕಾರ ಕೂಡ ಜನಸ್ನೇಹಿ ಯೋಜನೆಗಳನ್ನು ಒಂದೊಂದಾಗಿ ಜಾರಿಗೆ ತರುತ್ತಿರುವುದು ಗಣನೀಯ ಎಂದರು.
ಅಹವಾಲು ಸ್ವೀಕಾರ: ಪಂಚಾಯಿತಿ ವ್ಯಾಪ್ತಿಯ ಸಮಸ್ಯೆಗಳನ್ನು ಸ್ಥಳೀಯವಾಗಿಯೇ ಚರ್ಚಿಸಿ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ತಾಲೂಕಿನ 4 ಗ್ರಾಮ ಪಂಚಾಯಿತಿಗಳಲ್ಲಿ ಶನಿವಾರ ಸಭೆ ನಡೆಸಿ ಜನರ ಅಹವಾಲುಗಳನ್ನು ಸ್ವೀಕರಿಸಿದರು.
ಸಚಿವ ಸ್ಥಾನ ನಿರೀಕ್ಷೆ: ಇದೇ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯದಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಂಪುಟದಲ್ಲಿ ಇನ್ನೂ 4 ಸ್ಥಾನಗಳು ಖಾಲಿ ಇದೆ. ಅದೇ ರೀತಿ ಉಪಸಭಾಪತಿ ಹುದ್ದೆ ಕೂಡ ಖಾಲಿ ಇದೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸೂಕ್ತ ತೀರ್ಮಾನ ಕೈಗೊಳ್ಳುತ್ತದೆ ಎಂದು ಹೇಳಿವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದರು.
ಲೋಕಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ಮೊಯ್ಲಿ ಅವರು ಅಪರೂಪಕ್ಕೆ ಎಂಬಂತೆ ನಡೆಸುತ್ತಿರುವ ಜನ ಸಂಪರ್ಕ ಸಭೆಗಳು ಜನರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿವೆ. ಸಭೆಗಳಲ್ಲಿ ಸ್ಥಳೀಯ ಶಾಸಕ ಟಿ.ವೆಂಕಟರಮಣಯ್ಯ, ಮಾಜಿ ಶಾಸಕ ಆರ್.ಜಿ. ವೆಂಕಟಾಚಲಯ್ಯ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸಿ.ಡಿ.ಸತ್ಯನಾರಾಯಣಗೌಡ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.