ಕೆರೆ ಅಂಗಳ ಒತ್ತುವರಿ ಖಂಡಿಸಿ ಪ್ರತಿಭಟನೆ
ದೊಡ್ಡಬಳ್ಳಾಪುರ: ತಾಲೂಕಿನ ತಿಪ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಹಳ್ಳಿ ತಾಂಡದಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಕೆರೆ ಅಂಗಳದ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಅಲ್ಲಿ ಕೊಳವೆ ಬಾವಿ ತೆರೆಸಿ ತೋಟ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಕೂಡಲೇ ಇದನ್ನು ತೆರವು ಮಾಡಬೇಕು ಎಂದು ಆಗ್ರಹಿಸಿ ಹೊಸಹಳ್ಳಿ ತಾಂಡದ ಅನೇಕ ಗ್ರಾಮಸ್ಥರು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆ ವೇಳೆ ಮಾತನಾಡಿದ ಗ್ರಾಮಸ್ಥರು, ಕೆರೆ ಅಂಗಳ ಸುಮಾರು 40 ಎಕರೆ ಇದ್ದು, ಅದರಲ್ಲಿ ಹಲವು ಎಕರೆಗಳು ಒತ್ತುವರಿಯಾಗಿವೆ. ಈ ಬಗ್ಗೆ ಪ್ರಶ್ನಿಸಿದ ಗ್ರಾಮಸ್ಥರ ಮೇಲೆ ಒತ್ತುವರಿದಾರರು ದೌರ್ಜನ್ಯ ಎಸಗಿದ್ದಾರೆ. ಈ ಬಗ್ಗೆ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ಆರೋಪಿಯನ್ನು ಬಂಧಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಗ್ರಾಮ ಪಂಚಾಯಿತಿ ಸದಸ್ಯ ಮಾತ್ರವಲ್ಲದೆ, ಹಲವಾರು ಮಂದಿ ಅಕ್ರಮವಾಗಿ ಒತ್ತುವರಿ ಮಾಡಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ತಹಶೀಲ್ದಾರರು ಕೂಡಲೇ ಈ ಬಗ್ಗೆ ಗಂಭೀರ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಹತ್ತಾರು ಗ್ರಾಮಸ್ಥರು, ಮಹಿಳೆಯರು ಭಾಗವಹಿಸಿದ್ದರು. ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ಚಂದ್ರ, ಈ ಬಗ್ಗೆ ಅಧಿಕಾರಿಗಳ ಮಟ್ಟದಲ್ಲಿ ತನಿಖೆ ನಡೆಸಿ ಆರೋಪ ಸಾಬೀತಾದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.