ಅತ್ಯಾಚಾರ ಹೆಚ್ಚಳಕ್ಕೆ ಹೈಕೋರ್ಟ್ ಆತಂಕ
ಬೆಂಗಳೂರು: ನಗರದ ಜ್ಞಾನಭಾರತಿ ಆವರಣದಲ್ಲಿ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆಯ ನಂತರ ರಾಜ್ಯದಲ್ಲಿ ಬರೋಬ್ಬರಿ 40 ಅತ್ಯಾಚಾರ ಹಾಗೂ ಸಾಮೂಹಿಕ ಅತ್ಯಾಚಾರ ಪ್ರಕರಣಗಳು ದಾಖಲಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಪೀಠ, ಹೆಚ್ಚುತ್ತಿರುವ ಪ್ರಕರಣಗಳ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದೆ.
ನಗರದಲ್ಲಿ ಹೆಚ್ಚುತ್ತಿರುವ ಸಾಮೂಹಿಕ ಅತ್ಯಾಚಾರಗಳ ಕುರಿತು ವಕೀಲರಾದ ವಿಜಯ್‌ಕುಮಾರ್ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ.ಡಿ.ಎಚ್.ವಘೇಲ ಹಾಗೂ ನ್ಯಾ.ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ಪೀಠ, ಪೊಲೀಸ್ ಇಲಾಖೆ ಹಾಗೂ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಅತ್ಯಾಚಾರ ಪ್ರಕರಣಗಳ ತನಿಖೆಯನ್ನು ತೀವ್ರಗೊಳಿಸಿ, ತಕ್ಷಣ ಆರೋಪಿಗಳನ್ನು ಬಂಧಿಸಬೇಕು. ಪ್ರತಿನಿತ್ಯ ಇಂತಹ ಪ್ರಕರಣಗಳು ಹೆಚ್ಚುತ್ತಿರುವುದು ಪೊಲೀಸ್ ವ್ಯವಸ್ಥೆಯ ವೈಫಲ್ಯವನ್ನು ತೋರಿಸುತ್ತದೆ. ಇದು ಉತ್ತಮ ಲಕ್ಷಣವಲ್ಲ. ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ತಮಗೆ ಪ್ರತಿ ಪ್ರಕರಣದ ಪ್ರಗತಿ ವರದಿಯನ್ನು ಸಲ್ಲಿಸಬೇಕು ಎಂದು ಆದೇಶಿಸಿದೆ.
ಇದರೊಂದಿಗೆ, ನಗರದ 13 ವರ್ಷದ ಬಾಲಕಿ ಶಮಾತಾಜ್‌ನ ಮೇಲೆ ಅತ್ಯಾಚಾರವೆಸಗಿ ಜೈಲು ಸೇರಿದ್ದ ಆರೋಪಿ, ಪರಾರಿಯಾಗಿರುವ ವಿಷಯಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪೀಠ, ನೀವು ಆತನನ್ನು ತಕ್ಷಣ ಬಂಧಿಸಬೇಕು. ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ಆದೇಶ ನೀಡಿ. ನಮಗೆ ತಕ್ಷಣ ಇದರ ವಿವರ ಬೇಕು. ಅಗತ್ಯಬಿದ್ದಲ್ಲಿ ನಾವು ತನಿಖೆಯನ್ನು ಸಿಐಡಿ ತನಿಖೆಗೆ ವಹಿಸಲು ಸಿದ್ಧ ಎಂದು ಪೀಠ ತಿಳಿಸಿದೆ.
ಆದರೆ, ಬಾಲಕಿಯ ವಿದ್ಯಾಭ್ಯಾಸಕ್ಕೆಂದು ಸ್ವಯಂ ಸೇವಾ ಸಂಘಟನೆಗಳು ನೀಡಿರುವ ಹಣವನ್ನು ಆಕೆಯ ತಂದೆ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪವನ್ನು ತಳ್ಳಿಹಾಕಿದ ಪೀಠ, ವೈಯಕ್ತಿಕ ಆರೋಪಗಳನ್ನು ಬಿಟ್ಟು, ದೊಡ್ಡ ಪ್ರಮಾಣದ ಸಮಸ್ಯೆಗಳನ್ನು ಬಗೆಹರಿಸುವತ್ತ ಗಮನ ಹರಿಸಿ ಎಂದು ಆದೇಶಿಸಿದೆ.
ಅಧಿಕಾರಿ ಹಾಜರಿಗೆ ಆದೇಶ: ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳವಣಿಗೆಗಳ ವಿವರ ನೀಡುವ ಸಲುವಾಗಿ ಮುಂದಿನ ವಿಚಾರಣೆಯ ಸಂದರ್ಭದಲ್ಲಿ ಗೃಹ ಇಲಾಖೆಯ ಅಧಿಕಾರಿಯೊಬ್ಬರು ಹಾಜರಿರಬೇಕು ಎಂದು ಪೀಠ ಆದೇಶಿಸಿ, ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.
ಅಲ್ಲದೆ, ಪೊಲೀಸ್ ವರ್ಗಾವಣೆಯಲ್ಲಿ ರಾಜಕಾರಣಿಗಳ ಹಸ್ತಕ್ಷೇಪ ಪ್ರಶ್ನಿಸಿ ಅಖಿಲ ಕರ್ನಾಟಕ ಪೊಲೀಸ್ ಮಹಾ ಸಭಾ ಸಲ್ಲಿಸಿರುವ ಅರ್ಜಿಯನ್ನು ಮುಂದಿನ ವಿಚಾರಣೆಯಲ್ಲಿ ಕೈಗೆತ್ತಿಕೊಳ್ಳುವುದಾಗಿ ಪೀಠ ತಿಳಿಸಿದೆ.