ಇಂದು ರಾಜ್ಯ ಮಟ್ಟದ ಸಮುದಾಯ ಶೈಕ್ಷಣಿಕ ಸಮಾವೇಶ
ಕ.ಪ್ರ.ವಾರ್ತೆ, ರಾಮನಗರ, ಮಾ.15 ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ, ಮಗು ಮತ್ತು ಕಾನೂನು ಕೇಂದ್ರ, ಭಾರತ ವಿಶ್ವವಿದ್ಯಾಲಯದ ಕಾನೂನು ಶಾಲೆ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ರಾಜ್ಯ ಮಟ್ಟದ ಸಮುದಾಯ ಶೈಕ್ಷಣಿಕ ಸಮಾವೇಶವನ್ನು ಚನ್ನಪಟ್ಟಣದ ಖಾಸಗಿ ಬಸ್ ನಿಲ್ದಾಣದ ಮೈದಾನದಲ್ಲಿ ಮಾ.16ರ ಬೆಳಗ್ಗೆ 11ಕ್ಕೆ ನಡೆಯಲಿದೆ.
ಕಾರ್ಯಕ್ರಮವನ್ನು ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್ ಉದ್ಘಾಟಿಸುವರು. ಸಮನ್ವಯ ವೇದಿಕೆಯ ಚಟುವಟಿಕೆಗಳ ವರದಿಯನ್ನು ಎಸ್ಡಿಎಂಸಿ ಸಮನ್ವಯ ವೇದಿಕೆ ಜಿಲ್ಲಾಧ್ಯಕ್ಷ ಗೋವಿಂದರಾಜು ಮಂಡಿಸುವರು. ಭಾರತ ವಿಶ್ವವಿದ್ಯಾಲಯ ರಾಷ್ಟ್ರೀಯ ಕಾನೂನು ಶಾಲೆಯ ಮುಖ್ಯಸ್ಥ ಡಾ. ನಿರಂಜನಾರಾಧ್ಯ ಪ್ರಾಸ್ತಾವಿಕ ನುಡಿಗಳನ್ನಾಡುವರು.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಕಾರ್ಯದರ್ಶಿ ಕುಮಾರ್ ಜಿ ನಾಯಕ್ ಪುಸ್ತಕ ಬಿಡುಗಡೆ ಮಾಡುವರು. ಸಮನ್ವಯ ವೇದಿಕೆ ಅಧ್ಯಕ್ಷ ಜಯಣ್ಣ ಅಧ್ಯಕ್ಷತೆ ವಹಿಸುವರು. ಬೆಳಗ್ಗೆ 9ಕ್ಕೆ ಭಾರತ ವಿಶ್ವವಿದ್ಯಾಲಯ ರಾಷ್ಟ್ರೀಯ ಕಾನೂನು ಶಾಲೆಯ ಕುಲಪತಿ ಪ್ರೊ.ಆರ್.ವೆಂಕಟರಾವ್ ಸರ್ಕಾರಿ ಶಾಲೆಗಳನ್ನು ಉಳಿಸಿ - ಬೆಳೆಸಿ - ಸಮಾಜ ಶಾಲೆಗಳನ್ನಾಗಿ ಪರಿವರ್ತಿಸುವ ಮೆರವಣಿಗೆಗೆ ಚನ್ನಪಟ್ಟಣದ ಸ್ಪನ್ ಸಿಲ್ಕ್ ಮುಂಭಾಗದಿಂದ ಚಾಲನೆ ನೀಡುವರು.
ನಂತರ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಸಂಸದ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಕಸಾಪ ಅಧ್ಯಕ್ಷ ಪುಂಡಲೀಕ ಹಾಲಂಬಿ ಮತ್ತಿತರರು ಭಾಗವಹಿಸುವರು.