ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರ ಉದ್ಘಾಟನೆ
ಕ.ಪ್ರ.ವಾರ್ತೆ ರಾಮನಗರ ಮಾ.19
ಗ್ರಾಮೀಣ ಪ್ರದೇಶದಲ್ಲಿ ವಿದ್ಯಾರ್ಥಿಗಳು ಶ್ರಮದಾನ ಮಾಡುವುದರಿಂದ ಮಹಾತ್ಮಾ ಗಾಂಧೀಜಿಯರ ಆದರ್ಶವನ್ನು ಪ್ರಾಯೋಗಿಕವಾಗಿ ಅನುಷ್ಠಾನಕ್ಕೆ ತಂದಂತಾಗುತ್ತದೆ ಎಂದು ಶಾಸಕ ಕೆ.ರಾಜು ಅಭಿಪ್ರಾಯಪಟ್ಟರು.
ತಾಲೂಕಿನ ಕವಣಾಪುರ ಗ್ರಾಮದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಂದ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಳ್ಳಿಗಳಲ್ಲಿ ವಾಸಿಸುತ್ತಿರುವ ಜನರ ಜೀವನಮಟ್ಟವನ್ನು ಉತ್ತಮಪಡಿಸಲು ವಿದ್ಯಾರ್ಥಿಗಳ ಸೇವೆ ಅವಶ್ಯಕ ಎಂದರು.
ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದಲ್ಲಿ ಶ್ರಮದಾನ ಮಾಡುವುದರಿಂದ ಗ್ರಾಮೀಣರಿಗೆ ಶ್ರಮದಾನದ ಮಹತ್ವವನ್ನು ಪರಿಚಯಿಸಿದಂತಾಗುತ್ತದೆ. ಹಾಗೂ ವಿದ್ಯಾರ್ಥಿಗಳು ನಡೆಸಿಕೊಡುವ ಸಾಂಸ್ಕಣತಿಕ ಕಾರ್ಯಕ್ರಮಗಳು ಹಳ್ಳಿ ಜನರಲ್ಲಿರುವ ಮೌಢ್ಯತೆ ಅಳಿಸಿ, ವೈಜ್ಞಾನಿಕತೆ ಬೆಳೆಸಲು ಸಹಕಾರಿಯಾಗುತ್ತವೆ ಎಂದು ರಾಜು ತಿಳಿಸಿದರು.
ವಿದ್ಯಾವಂತರು ಹಳ್ಳಿಗಳನ್ನು ತೊರೆಯುತ್ತಿರುವ ಈ ಸಂದರ್ಭದಲ್ಲಿ ರಾಷ್ರೀಯ ಸೇವಾ ಯೋಜನೆ ವಿಶೇಷ ಶಿಬಿರಗಳ ಮೂಲಕ ವಿದ್ಯಾರ್ಥಿಗಳನ್ನು ಮತ್ತೆ ಹಳ್ಳಿಗಳಿಗೆ ಕರೆತರುವ ಪ್ರಯತ್ನ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಹಳ್ಳಿಗಳ ಉದ್ಧಾರವೇ ದೇಶದ ಉದ್ಧಾರ ಎಂಬ ಮಹಾತ್ಮಾ ಗಾಂಧೀಜಿಯವರು ತತ್ವವನ್ನು ಆಧಾರವಾಗಿಟ್ಟುಕೊಂಡು ರಾಷ್ರೀಯ ಸೇವಾ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ. ನಗರದ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಕಲಿಯುವುದರ ಜತೆಗೆ ಹತ್ತು ದಿನ ಹಳ್ಳಿಗಳಿಗಳಲ್ಲಿ ಶ್ರಮದಾನ ಮಾಡುತ್ತಾ ಹಳ್ಳಿಗರ ಬದುಕನ್ನು ಅರ್ಥ ಮಾಡಿಕೊಳ್ಳುವ ವಿಶೇಷ ಪ್ರಯತ್ನ ಇದರ ಉದ್ದೇಶವಾಗಿದೆ ಎಂದು ಶಿಬಿರಾಧಿಕಾರಿ ಡಿ.ಎಸ್. ಶೇಕ್ ಹೈದರ್ ಅಲಿ ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲ ಕೆ.ಆರ್.ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಪಿ.ಅಶ್ವತ್ಥ್, ಕೆ.ಶಿವಲಿಂಗಯ್ಯ, ಕುಮಾರ್, ಪ್ರಭಾಕರ್, ರಾಜೇಶ್, ಪ್ರಾಧ್ಯಾಪಕ ಜಯಣ್ಣ, ಅನುರಾಧ ಭಾಗವಹಿಸಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.