ಟಿಪ್ಪರ್ ಲಾರಿ ಡಿಕ್ಕಿ; ಆಟೋ ಚಾಲಕ ಸಾವು
ಮಾಗಡಿ: ಆಟೋಗೆ ಜಲ್ಲಿ ತುಂಬಿದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ಮಾಗಡಿ ಪಟ್ಟಣದ ಬಿ.ಕೆ. ರಸ್ತೆಯಲ್ಲಿ ನಡೆದಿದೆ. ತಾಲೂಕಿನ ಜಮಾಲ್ ಸಾಬರ್ ಪಾಳ್ಯದ ಅಮ್ಜದ್ ಪಾಷಾ (24) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಜಲ್ಲಿ ತುಂಬಿದ ಟಿಪ್ಪರ್ ಲಾರಿ, ಬಸ್ ನಿಲ್ದಾಣಕ್ಕೆ ಹೋಗುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದ್ದು, ಆಟೋ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಆಟೋ ಸಂಪೂರ್ಣ ಜಖಂಗೊಂಡಿದ್ದು, ಲಾರಿ ಚಾಲಕ ಪರಾರಿಯಾಗಿದ್ದಾನೆ. ಮಾಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.