ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ
ರಾಮನಗರ: 2013-14ನೇ ಸಾಲಿನಲ್ಲಿ ಸರ್ಕಾರವು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬುದ್ದೀಸ್) ವಿದ್ಯಾಭ್ಯಾಸವನ್ನು ಮುಂದುವರೆಸಲು ಪ್ರೋತ್ಸಾಹ ಧನವನ್ನು ಮಂಜೂರು ಮಾಡಲು ಉದ್ದೇಶಿಸಿದೆ. ಎಸ್ಎಸ್ಎಲ್ಸಿ, ಪಿಯುಸಿ ಮತ್ತು ಪದವಿ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿ ಮುಂದಿನ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಈ ಪ್ರೋತ್ಸಾಹ ಧನ ಪಡೆಯಲು ಅರ್ಹರಾಗಿರುತ್ತಾರೆ. ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರು.3000, ಪದವಿ ರು.4000 ಹಾಗೂ ಸ್ನಾತಕೋತ್ತರ ಪದವಿಗಳಿಗೆ ರು.5000 ಪ್ರೋತ್ಸಾಹ ಧನ ನೀಡಲಾಗುತ್ತಿದೆ.
ಅಭ್ಯರ್ಥಿಯ ವಯೋವುತಿ 18 ರಿಂದ 30 ವರ್ಷದೊಳಗಿರಬೇಕು. ವಾರ್ಷಿಕ ಆದಾಯ ರು.22000 ಮೀರಿರಬಾರದು. ಅರ್ಜಿಯನ್ನು ಆಯಾ ಕಾಲೇಜಿನ ಪ್ರಾಂಶುಪಾಲರು ದೃಢೀಕರಿಸಿ ಸಲ್ಲಿಸಬೇಕು. ವಿದ್ಯಾರ್ಥಿಗಳು ನೇರವಾಗಿ ಕಚೇರಿಗೆ ಅರ್ಜಿ ಸಲ್ಲಿಸಿದ್ದಲ್ಲಿ ಅಂತಹ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ರಾಮನಗರ ಜಿಲ್ಲೆ, ಪಿ.ಎಲ್.ಡಿ ಬ್ಯಾಂಕ್ ರಸ್ತೆ, ಲಕ್ಷ್ಮೀದೇವಮ್ಮ ಬಿಲ್ಡಿಂಗ್, ಐಜೂರು, ರಾಮನಗರ ಇವರಿಂದ ಉಚಿತವಾಗಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜುಲೈ 31ರೊಳಗೆ ಮೇಲ್ಕಂಡ ಕಚೇರಿಗೆ ಸಲ್ಲಿಸಬಹುದು.