ತೇಜಸ್ವಿನಿ ಸಾವು: ಆರೋಪಿಗಳ ಬಂಧನಕ್ಕೆ ಒತ್ತಾಯ
ಕ.ಪ್ರ.ವಾರ್ತೆ ಮಂಡ್ಯ ಮೇ 28
ಕಲ್ಲಹಳ್ಳಿಯಲ್ಲಿ ಕಳೆದ ಮೇ 18ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಡಿ. ತೇಜಸ್ವಿನಿ ಸಾವಿಗೆ ಕಾರಣರಾದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು, ಸಂಬಂಧಿಕರು ಹಾಗೂ ಸಾರ್ವಜನಿಕರು ನಗರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಬೃಹತ್ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಹಾಗೂ ಜಿಲ್ಲಾಧಿಕಾರಿ ಕಚೇರಿ ಎದುರು ಕೆಲಕಾಲ ಧರಣಿ ನಡೆಸಿ ಮನವಿ ಸಲ್ಲಿಸಿದರು. ಮಂಡ್ಯ ಮಿಮ್ಸ್ ಸಹಾಯಕ ಪ್ರಾಧ್ಯಾಪಕ ವೈದ್ಯ ಡಾ.ರಾಘವೇಂದ್ರ ಅವರ ಪತ್ನಿ ಡಿ.ತೇಜಸ್ವಿನಿ ಆತ್ಮಹತ್ಯೆ ಮಾಡಿಕೊಂಡಿಲ್ಲ. ಪತಿ ಡಾ.ರಾಘವೇಂದ್ರ ಹಾಗೂ ಕುಟುಂಬದ ಸದಸ್ಯರು ಕೊಲೆ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ನೇರವಾಗಿ ಆರೋಪಿಸಿದರು.
ಡಿ.ತೇಜಸ್ವಿನಿ ಸಾವಿಗೆ ವರದಕ್ಷಿಣೆ ಕಿರುಕುಳ ಕಾರಣ ಎಂದು ಶಂಕಿಸಲಾಗಿದೆ. ಇದಕ್ಕೆ ಕಾರಣರಾದ ಮೃತಳ ಮಾವ ಲಿಂಗೇಗೌಡ, ಅತ್ತೆ ಇಂದ್ರಮ್ಮ, ಮೃತಳ ನಾದಿನಿ ಶ್ವೇತಾ ಮತ್ತು ಸ್ಮಿತಾ ಹಾಗೂ ಕುಟುಂಬದ ಸಂಬಂಧಿ ಶಂಕರೇಗೌಡರ ಕಿರುಕುಳದಿಂದ ಸಾವನ್ನಪ್ಪಿದ್ದಾರೆ ಎಂದು ದೂರಿದರು.
ಮೃತ ತೇಜಸ್ವಿನಿ ಕತ್ತಿನ ಕೆಳಭಾಗದಲ್ಲಿ ಗಾಯವಾಗಿರುವ ಬಗ್ಗೆ ವೈದ್ಯಕೀಯ ಪರೀಕ್ಷೆಯಿಂದ ತಿಳಿದುಬಂದಿದೆ. ವರದಕ್ಷಿಣೆ ಕಿರುಕುಳ ನೀಡಿ, ನಂತರ ಕುಟುಂಬ ಸದಸ್ಯರು ಕೊಲೆ ಮಾಡಿರುವ ಬಗ್ಗೆ ಸಂಶಯವಿದೆ. ಕೂಡಲೇ ಆರೋಪಿಗಳನ್ನು ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಆರೋಪಿಗಳನ್ನು ಜೂ.2 ರೊಳಗೆ ಬಂಧಿಸಿ ಕ್ರಮ ಕೈಗೊಳ್ಳದಿದ್ದರೆ ನಗರದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್ಗೌಡ, ರೈತ ಸಂಘದ ನಾಯಕಿ ಸುನಂದ ಜಯರಾಂ, ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಶಂಕರೇಗೌಡ, ದಸಂಸ ಮುಖಂಡ ಎಂ.ಬಿ.ಶ್ರೀನಿವಾಸ್, ಕನ್ನಡ ಸೇನೆ ಕರ್ನಾಟಕ ಜಿಲ್ಲಾಧ್ಯಕ್ಷ ಎಚ್.ಸಿ.ಮಂಜುನಾಥ್, ಮಹಿಳಾ ಮಂಡಳಿ ಅಧ್ಯಕ್ಷೆ ಯಶೋದಮ್ಮ, ಶೀಲಾ, ಜಿಪಂ ಸದಸ್ಯೆ ಸವಿತಾ ಮಧುಸೂದನ್, ಟಿ.ನಾರಾಯಣ, ಹೇಮವತಿ ಭಾಗವಹಿಸಿದ್ದರು.