ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಜಿಲ್ಲಾ ಕೇಂದ್ರ ರಚನೆ ಬಗ್ಗೆ ಸರ್ಕಾರಕ್ಕೆ ಸಮಗ್ರ ವರದಿ

Vishwanath S
Updated On : 14 Nov 2013, 12:51 pm

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರವನ್ನು ಜಿಲ್ಲಾ ಕೇಂದ್ರವಾಗಿ ಘೋಷಿಸಬೇಕು ಎಂಬ ಕೂಗು ಕೇಳಿ ಬಂದಿರುವಂತೆ ದೇವನಹಳ್ಳಿಯಿಂದಲೂ ಒತ್ತಾಯಗಳು ಬಂದಿವೆ.
ಈ ಹಿನ್ನಲೆಯಲ್ಲಿ ಎರಡೂ ನಗರಗಳ ಸಮಗ್ರ ಅಂಕಿ-ಅಂಶಗಳು, ಜಿಲ್ಲಾ ಕೇಂದ್ರವಾಗಲು ಬೇಕಾದ ಅರ್ಹತೆ, ಅಗತ್ಯ, ಅವಶ್ಯಕತೆ, ಜಮೀನಿನ ಲಭ್ಯತೆ, ಜನಸಾಂದ್ರತೆ, ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣೆ, ಸಾರ್ವಜನಿಕರಿಗೆ ಆಗಬೇಕಾದ ಅನುಕೂಲತೆಗಳೂ ಸೇರಿದಂತೆ ಹತ್ತು ಹಲವು ವಿಚಾರಗಳ ಬಗ್ಗೆ ಅಂಕಿ-ಅಂಶಗಳ ದಾಖಲೆಯೊಂದಿಗೆ ವರದಿಯನ್ನು ಸರ್ಕಾರದ ಕಂದಾಯ ಇಲಾಖೆಗೆ ನೀಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶಂಕರ್ ಹೇಳಿದರು.
ಬುಧವಾರ ಇಲ್ಲಿನ ತಾಲೂಕು ಕಚೇರಿಗೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ದೊಡ್ಡಬಳ್ಳಾಪುರ ಜಿಲ್ಲಾ ಕೇಂದ್ರ ಹೋರಾಟ ಸಮಿತಿ ಸದಸ್ಯರೊಂದಿಗೆ ಮಾತನಾಡಿದ ಅವರು, ಎರಡೂ ನಗರಗಳ ಒತ್ತಾಯ ಈಗ ಸರ್ಕಾರದ ಅಂಗಳದಲ್ಲಿದೆ. ಸರ್ಕಾರ ಈ ಬಗ್ಗೆ ಅಧ್ಯಯನ ನಡೆಸುತ್ತಿದೆ. ಮುಂಬರುವ ದಿನಗಳಲ್ಲಿ ಸರ್ಕಾರದಿಂದ ಸೂಕ್ತ ನಿರ್ಧಾರ ಹೊರಬೀಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಉಪವಿಭಾಗ ಕೇಂದ್ರ ಶೀಘ್ರ: ಉಳಿದಂತೆ ದೊಡ್ಡಬಳ್ಳಾಪುರ ನಗರದಲ್ಲಿ ದೊಡ್ಡಬಳ್ಳಾಪುರ ಉಪವಿಭಾಗ ಕೇಂದ್ರ ಕಾರ್ಯನಿರ್ವಹಿಸಬೇಕು ಎಂಬ ಬೇಡಿಕೆಗೆ ಈಗಾಗಲೇ ಸರ್ಕಾರದ ಹಂತದಲ್ಲಿ ಸ್ಪಂದನೆ ಸಿಕ್ಕಿದ್ದು, ಈ ನಿಟ್ಟಿನಲ್ಲಿ ಶೀಘ್ರದಲ್ಲೇ ನಿರ್ಧಾರ ಹೊರಬೀಳಲಿದೆ. ಈ ಹಿಂದೆ ಕೆಲ ದಿನಗಳ ಕಾಲ ಇಲ್ಲಿ ಉಪವಿಭಾಗಾಧಿಕಾರಿ ಕಚೇರಿ ಕಾರ್ಯನಿರ್ವಹಣೆ ಮಾಡಿರುವ ಬಗ್ಗೆಯೂ ಕಂದಾಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಶೀಘ್ರದಲ್ಲೇ ದೊಡ್‌ಡಬಳ್ಳಾಪುರಕ್ಕೆ ಉಪವಿಭಾಗ ಕಚೇರಿ ವರ್ಗಾವಣೆಯಾಗಲಿದೆ ಎಂದರು.
15 ದಿನಗಳ ಗಡುವು:  ದೊಡ್ಡಬಳ್ಳಾಪುರದ ನಾಗರಕೆರೆ ಸೇರಿದಂತೆ ವಿವಿಧ ಭಾಗಗಳಲ್ಲಿ ಒತ್ತುವರಿಯಾಗಿರುವ ಸರ್ಕಾರಿ ಜಮೀನುಗಳ ತೆರವು ಕಾರ್ಯಾಚರಣೆ 15 ದಿನಗಳ ಒಳಗೆ ಚುರುಕಾಗಬೇಕು. ಇಡೀ ಜಿಲ್ಲೆಯಲ್ಲಿ ದೊಡ್ಡಬಳ್ಳಾಪುರದಿಂದಲೇ ಹೆಚ್ಚಿನ ಅರ್ಜಿಗಳು ಸರ್ಕಾರಿ ಭೂಮಿ ಒತ್ತುವರಿಯ ಕುರಿತು ಜಿಲ್ಲಾಧಿಕಾರಿಗಳ ಕಚೇರಿಗೆ ಬಂದಿವೆ. ಈ ಬಗ್ಗೆ ಸಮಗ್ರವಾಗಿ ಪರಿಶೀಲನೆ ನಡೆಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ತಹಶೀಲ್ದಾರರು ತಕ್ಷಣ ಕಾರ್ಯಪ್ರವೃತ್ತರಾಗಬೇಕು. ಒತ್ತುವರಿಯಾಗಿರುವ ನೂರಾರು ಎಕರೆ ಸರ್ಕಾರಿ ಭೂಮಿಯನ್ನು ಮರಳಿ ಸರ್ಕಾರದ ವಶಕ್ಕೆ ಪಡೆಯುವಲ್ಲಿ ಯಾವುದೇ ಒತ್ತಡಗಳಿಗೆ ಮಣಿಯಬಾರದು. ಕಾನೂನು ರೀತ್ಯ ಕ್ರಮ ಕೈಗೊಳ್ಳಬೇಕು ಎಂದು ಮಾರ್ಗದರ್ಶನ ಮಾಡಿದರು. ಇದೇ ಸಂದರ್ಭದಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ಸರ್ಕಾರಿ ಜಮೀನು ಒತ್ತುವರಿ ಸೇರಿದಂತೆ ಅನೇಕ ವಿಚಾರಗಳ ಕುರಿತು ಮನವಿ ಪತ್ರ ಸಲ್ಲಿಸಿದರು.
ಸದ್ಯಕ್ಕೆ ಯಥಾಸ್ಥಿತಿ ಕಾಯ್ದುಕೊಳ್ಳಿ: ಇದೇ ಸಂದರ್ಭದಲ್ಲಿ ಇಲ್ಲಿನ ಸಂಜಯನಗರ ಕೊಳಗೇರಿ ವಾಸಿಗಳನ್ನು ಒಕ್ಕಲೆಬ್ಬಿಸುವುದರ ವಿರುದ್ಧ ಕೊಳಚೆ ಪ್ರದೇಶ ಹೋರಾಟ ಸಮಿತಿ ನೀಡಿದ ಮನವಿಗೆ ಸ್ಪಂದಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಸದ್ಯಕ್ಕೆ ಈ ಪ್ರದೇಶದಲ್ಲಿ ಯಾರನ್ನೂ ತೆರವುಗೊಳಿಸುವುದು ಬೇಡ. ಅಕ್ರಮ-ಸಕ್ರಮ ಕಾನೂನಿನನ್ವಯ ಸರ್ಕಾರ ನೀಡುವ ಮುಂದಿನ ಮಾರ್ಗದರ್ಶನದ ಮೇಲೆ ಈ ಬಡಾವಣೆಯ ಅಕ್ರಮ ಒತ್ತುವರಿ ಕುರಿತು ಕ್ರಮ ಕೈಗೊಳ್ಳಲಾಗುವುದು. ಅಲ್ಲಿಯವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು. ತಹಸೀಲ್ದಾರ್ ಕೆ.ಬಿ.ಸಿದ್ಧಲಿಂಗಯ್ಯ ಸೇರಿದಂತೆ ತಾಲೂಕು ಮಟ್ಟದ ಅನೇಕ ಅಧಿಕಾರಿಗಳು ಉಪಸ್ತಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement