ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಮಾಹಿತಿ, ತಂತ್ರಜ್ಞಾನದಿಂದ ಸಮರ್ಥ ಪೈಪೋಟಿ: ರಾಜು

Srinivasa Murthy VN
Updated On : 19 Nov 2013, 12:44 pm

ಕ.ಪ್ರ. ವಾರ್ತೆ ರಾಮನಗರ ನ.18
ನಮ್ಮ ಹಳ್ಳಿಗಾಡಿನ ಮಕ್ಕಳು ಮಾಹಿತಿ ಮತ್ತು ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಸ್ಪರ್ಧಾತ್ಮಕ ಯುಗದಲ್ಲಿ ಪೈಪೋಟಿಯನ್ನು ಸಮರ್ಥವಾಗಿ ಎದುರಿಸುವಂತಾಗಬೇಕು ಎಂದು ಜಿ.ಪಂ. ಅಧ್ಯಕ್ಷ ಎಚ್.ಸಿ. ರಾಜು ಕರೆ ನೀಡಿದರು.
ನಗರದ ಬೇತೆಲ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆಯೋಜಿಸಿರುವ ಮೂರು ದಿನಗಳ ಜಿಲ್ಲಾ ಮಟ್ಟದ ಸ್ಟೂಡೆಂಟ್ ಇಂಟರ್ನೆಟ್ ವರ್ಲ್ಡ್- 2013 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಮಾಹಿತಿ ತಂತ್ರಜ್ಞಾನ ಅಗತ್ಯ ಎಂದರು.
ಇಂದಿನ ದಿನಗಳಲ್ಲಿ ವಿಜ್ಞಾನ ತಂತ್ರಜ್ಞಾನ ಸಾಕಷ್ಟು ವೇಗವಾಗಿ ಬೆಳೆಯುತ್ತಿದೆ. ವಿಶ್ವವೇ ಒಂದು ಹಳ್ಳಿಯಾಗಿದೆ. ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ಕುಳಿತಲ್ಲೇ ಕ್ಷಣಾರ್ಧದಲ್ಲಿ ತಿಳಿದುಕೊಳ್ಳಬಹುದಾದ ವ್ಯವಸ್ಥೆ ಇದೆ. ಆದರೆ, ಇದನ್ನು ಸಮರ್ಪಕ ರೀತಿಯಲ್ಲಿ ಬಳಸಿಕೊಳ್ಳಲು ನಾವಿನ್ನೂ ವಿಫಲರಾಗಿದ್ದಾರೆ ಎಂದು ವಿಷಾದಿಸಿದರು.
ಕಡೆಗಣನೆ ಸಲ್ಲದು: ವಿಜ್ಞಾನ ಮತ್ತು ತಂತ್ರಜ್ಞಾನದಿಂದ ಎಷ್ಟೆಲ್ಲಾ ಉಪಯೋಗಗಳಿದ್ದರೂ ಮೂಲ ವಿಜ್ಞಾನವನ್ನು ಕಡೆಗಣಸುವುದು ಸರಿಯಲ್ಲ. ಬೃಹತ್ ಕಟ್ಟಡವನ್ನು ನಿರ್ಮಿಸಲು ತಳಹದಿ ಹೇಗೆ ಮುಖ್ಯವೋ ಹಾಗೆಯೇ ತಂತ್ರಜ್ಞಾನದ ಅಭಿವೃದ್ಧಿಗೆ ಮೂಲ ವಿಜ್ಞಾನ ಅಷ್ಟೇ ಮುಖ್ಯವಾಗಿದೆ. ವಿದ್ಯಾರ್ಥಿಗಳನ್ನು ಇದರ ಕಡೆಗೆ ಆಕರ್ಷಿಸುವ ಕೆಲಸ ಆಗಬೇಕಿದೆ ಎಂದು ರಾಜು ಅಭಿಪ್ರಾಯಪಟ್ಟರು.
ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಂಡ ಪಾಶ್ಚಿಮಾತ್ಯ ದೇಶಗಳು ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಸಾಧಿಸಿವೆ. ಭಾರತ ಅಭಿವೃದ್ಧಿ ಹೊಂದುತ್ತಿರುವ ದೇಶವಾಗಿದ್ದು, ಈ ವಿಷಯದಲ್ಲಿ ಹಿಂದುಳಿದಿದೆ. ಜತೆಗೆ ಆವಿಷ್ಕಾರಗಳನ್ನು ಕೈಗೊಂಡು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ದೇಶೀಯವಾಗಿ ಸ್ವಾವಲಂಬನೆ ಸಾಧಿಸದಿದ್ದರೆ ದೇಶದ ಅಭಿವೃದ್ಧಿ ಅಸಾಧ್ಯ ಎಂದರು.
ಆಸಕ್ತಿ ಮೂಡಿಸಬೇಕು: ಇಂದು ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಆಸಕ್ತಿ ಕಡಿಮೆಯಾಗಿದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ತಂತ್ರಜ್ಞಾನದ ಮಹತ್ವವನ್ನು ತಿಳಿಸಬೇಕು. ಸೂಕ್ತ ಪ್ರೋತ್ಸಾಹ ಮತ್ತು ಮಾರ್ಗದರ್ಶನದೊಂದಿಗೆ ಈ ವಿಷಯವಾಗಿ ಆಸಕ್ತಿ ಮೂಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ರಘುಕುಮಾರ್ ಸಲಹೆ ನೀಡಿದರು.
ವಿದ್ಯಾರ್ಥಿಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದತ್ತ ಆಕರ್ಷಿಸಲು ಎಲ್ಲಾ ಶಾಲೆಗಳಲ್ಲಿಯೂ ಪ್ರಯೋಗಾಲಯ, ವಿಜ್ಞಾನ ಸಂಘಗಳನ್ನು ಸ್ಥಾಪಿಸಬೇಕು. ಸರ್ಕಾರ ನೀಡಿರುವ ಸೌಲಭ್ಯಗಳನ್ನು ಬಳಸಿಕೊಂಡು ಶಿಕ್ಷಕರು ವಿದ್ಯಾರ್ಥಿಗಳನ್ನು ಸಂಶೋಧನೆ ಕೈಗೊಳ್ಳುವಂತೆ ಪ್ರೇರೇಪಿಸಬೇಕು ಎಂದು ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪ್ರಹ್ಲಾದಗೌಡ, ವಿಷಯ ಪರಿವೀಕ್ಷಕ ಕನಕಪ್ಪ, ಸೋಮಲಿಂಗಯ್ಯ, ಬೇತಲ್ ಇಂಟರ್ನ್ಯಾಷನಲ್ ಸ್ಕೂಲ್ನ ಪ್ರಾಂಶುಪಾಲೆ ರೀಟಾಮನು, ಮನೋಹರ್ ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement