ಗ್ಯಾಂಗ್ರೇಪ್: ಪಾರದರ್ಶಕ ತನಿಖೆ ನಡೆಸಿ
ಕ.ಪ್ರ.ವಾರ್ತೆ ದೊಡ್ಡಬಳ್ಳಾಪುರ ನ.23
ತಾಲೂಕಿನ ಕನ್ನಮಂಗಲ ಗ್ರಾಮದಲ್ಲಿ ದಲಿತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಪಾರದರ್ಶಕವಾಗಿ ತನಿಖೆ ನಡೆಸಿ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಪೊಲೀಸರು ಯಾವ ಕಾರಣಕ್ಕೂ ಆರೋಪಿಗಳಿಗೆ ಜಾಮೀನು ಸಿಗುವ ಅವಕಾಶ ಮಾಡಿಕೊಡಬಾರದು ಎಂದು ಆಗ್ರಹಿಸಿ ತಾಲೂಕು ಪ್ರಜಾ ವಿಮೋಚನಾ ಚಳವಳಿ ಮತ್ತು ಮಹಿಳಾ ವಿಮೋಚನಾ ಚಳವಳಿ (ಸಮತಾವಾದ) ನೇತೃತ್ವದಲ್ಲಿ ಶನಿವಾರ ಮಧ್ಯಾಹ್ನ ದೊಡ್ಡಬಳ್ಳಾಪುರ ಡಿವೈಎಸ್ಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ತಾಲೂಕಿನಲ್ಲಿ ನಡೆದಿರುವ ಈ ಕೃತ್ಯ ಅತ್ಯಂತ ಹೇಯ ಮತ್ತು ಅನಾಗರಿಕವಾಗಿದೆ. ಪೊಲೀಸರು ಈಗಾಗಲೇ 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ ಮುಂದಿನ ದಿನಗಳಲ್ಲಿ ಈ ಆರೋಪಿಗಳು ಯಾವುದೇ ಕಾರಣಕ್ಕೂ ಕಾನೂನಿನ ಮುಷ್ಟಿಯಿಂದ ತಪ್ಪಿಸಿಕೊಳ್ಳಲು ಅವಕಾಶ ಮಾಡಿಕೊಡಬಾರದು. ಅತ್ಯಾಚಾರಿಗಳೆಲ್ಲರ ಮೇಲೆ ಕಠಿಣ ಪ್ರಕರಣಗಳನ್ನು ದಾಖಲು ಮಾಡಬೇಕು. ಜಾಮೀನು ರಹಿತ ನ್ಯಾಯಾಂಗ ಬಂಧನಕ್ಕೆ ಶಿಫಾರಸ್ಸು ಮಾಡಬೇಕು. ಸಾಮಾಜಿಕ ಕಳಂಕಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಅತ್ಯಾಚಾರಿಗಳಿಗೆ ಉಗ್ರ ಶಿಕ್ಷೆ ವಿಧಿಸಬೇಕು.
ಪೊಲೀಸರು ಆರೋಪಿಗಳನ್ನು ಯಾವುದೇ ಹಂತದಲ್ಲೂ ರಕ್ಷಿಸುವ ಕೆಲಸ ಮಾಡಬಾರದು ಎಂದು ಆಗ್ರಹಿಸಿದರು.
ಶೋಷಣೆಗೊಳಗಾದ ಬಾಲಕಿಯ ಕುಟುಂಬಕ್ಕೆ ಪರಿಹಾರ ಒದಗಿಸಿಕೊಡಬೇಕು. ಬಾಲಕಿಯ ಚಿಕಿತ್ಸಾ ವೆಚ್ಚವನ್ನೂ ಭರಿಸಲು ಸೂಕ್ತ ವ್ಯವಸ್ಥೆ ಮಾಡಬೇಕು. ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳಿಗೆ ತಾರ್ಕಿಕ ಅಂತ್ಯ ಕಾಣಿಸಬೇಕು ಎಂದು ಒತ್ತಾಯಿಸಲಾಯಿತು.
ಡಿವೈಎಸ್ಪಿ ಪ್ರತಿಕ್ರಿಯೆ: ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ಪಾರದರ್ಶಕವಾಗಿ ನಡೆಯುತ್ತಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ಪ್ರತಿ ಹಂತದಲ್ಲೂ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪ್ರಕರಣದ ಎಲ್ಲ 6 ಆರೋಪಿಗಳೂ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪೊಲೀಸರು ಯಾವುದೇ ಕಾರಣಕ್ಕೂ ಯಾವ ಆರೋಪಿಗಳನ್ನೂ ರಕ್ಷಿಸುವ ಮಾತೇ ಇಲ್ಲ. ಪ್ರಕರಣದ ಬಗ್ಗೆ ನ್ಯಾಯಾಲಯ ವಿಚಾರಣೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತದೆ. ಪೊಲೀಸ್ ಇಲಾಖೆ ಪಾಲಿಸಬೇಕಾದ ಎಲ್ಲ ನಿಯಮಾವಳಿಗಳನ್ನೂ ಈ ಪ್ರಕರಣದಲ್ಲಿ ವ್ಯವಸ್ಥಿತವಾಗಿ ಪಾಲಿಸಲಾಗಿದೆ. ಸಂಘಟನೆಗಳು ಮತ್ತು ಸಾರ್ವಜನಿಕರ ಸಹಕಾರದೊಂದಿಗೆ ಈ ಬಗೆಯ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಕೆ ವಹಿಸುವ ಅನಿವಾರ್ಯತೆ ಇದ್ದು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಾರ್ವಜನಿಕರ ಸಹಕಾರ ಕೂಡ ಮುಖ್ಯ ಎಂದರು. ಡಿವೈಎಸ್ಪಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಮುಖಂಡರಾದ ಮುನಿಆಂಜನಪ್ಪ, ಚಿಕ್ಕನರಸಯ್ಯ, ಮುನಿಕೃಷ್ಣ, ಸುತ್ತಳ್ಳಿ ಚಂದ್ರು, ಗೌರಮ್ಮ ಮತ್ತಿತರರು ಭಾಗವಹಿಸಿದ್ದರು.
ಬಾಲಕಿ ಮನೆಗೆ ಶಾಸಕರ ಭೇಟಿ: ಪರಿಹಾರ ಭರವಸೆ
ದೊಡ್ಡಬಳ್ಳಾಪುರ: ಕನ್ನಮಂಗಲ ಗ್ರಾಮದಲ್ಲಿ ಕಳೆದ ಭಾನುವಾರ ರಾತ್ರಿ ಗ್ಯಾಂಗ್ರೇಪ್ಗೆ ತುತ್ತಾದ ದಲಿತ ಬಾಲಕಿಯ ಮನೆಗೆ ದೊಡ್ಡಬಳ್ಳಾಪುರ ಶಾಸಕ ಟಿ. ವೆಂಕಟರಮಣಯ್ಯ ಶನಿವಾರ ಸಂಜೆ ಭೇಟಿ ನೀಡಿ ಘಟನೆಗೆ ವಿಷಾದ ವ್ಯಕ್ತಪಡಿಸಿದರು.
ಬಾಲಕಿ ಮತ್ತು ಬಾಲಕಿಯ ಪೋಷಕರೊಂದಿಗೆ ಮಾತನಾಡಿದ ಅವರು, ಘಟನೆ ಅತ್ಯಂತ ದುರ್ದೈವ. ಈ ಬಗೆಯ ದುರಂತ ನಡೆಯಬಾರದಿತ್ತು. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಚುರುಕು ಕಾರ್ಯಾಚರಣೆ ನಡೆಸಿದ್ದಾರೆ. ಎಲ್ಲ ಆರೋಪಿಗಳನ್ನೂ ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ನ್ಯಾಯಾಲಯ ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡುತ್ತದೆ. ಈ ಮಧ್ಯೆ ಘಟನೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಬಾಲಕಿ ಕುಟುಂಬ ಧೃತಿಗೆಡುವ ಅವಶ್ಯಕತೆ ಇಲ್ಲ. ಅವರ ಸಹಾಯಕ್ಕೆ ನಾವಿದ್ದೇವೆ ಎಂದರು.
ಪರಿಹಾರ ಭರವಸೆ: ಸರ್ಕಾರದ ವ್ಯಾಪ್ತಿಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ದೊರೆಯುವ ಪರಿಹಾರವನ್ನು ಬಾಲಕಿ ಕುಟುಂಬಕ್ಕೆ ಒದಗಿಸಲು ಸಂಬಂಧಪಟ್ಟವರೊಂದಿಗೆ ಚರ್ಚೆ ಮಾಡಿ ಸಹಕಾರ ನೀಡುತ್ತೇನೆ. ಪರಿಹಾರ ಒದಗಿಸಿಕೊಡುವ ವ್ಯವಸ್ಥೆ ಮಾಡುತ್ತೇನೆ. ಆಕೆಯ ಮುಂದಿನ ಶಿಕ್ಷಣಕ್ಕೆ ಕೂಡ ಅಗತ್ಯ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ದಲಿತ ಸಂಘಟನೆಗಳ ಹಲವು ಮುಖಂಡರು ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ ಜಮೀನು ನೀಡಬೇಕು. ಸೂಕ್ತ ಪರಿಹಾರದ ವ್ಯವಸ್ಥೆ ಮಾಡಿಕೊಡಬೇಕು. ದಲಿತರ ಮೇಲೆ ಆಗುತ್ತಿರುವ ಈ ಬಗೆಯ ದೌರ್ಜನ್ಯಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.