ದಲಿತರ ಮೇಲೆ ದೌರ್ಜನ್ಯ: ಕಠಿಣ ಕ್ರಮಕ್ಕೆ ಆಗ್ರಹ
ಕ.ಪ್ರ.ವಾರ್ತೆ ರಾಮನಗರ ನ.29
ದಲಿತರ ಮೇಲೆ ದೌರ್ಜನ್ಯ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಜನಾಂದೋಲನ ಸಂಘಟನೆ (ಕೆಜೆಎಸ್) ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ನಗರದ ಮಿನಿ ವಿಧಾನಸೌಧದ ಆವಣರದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿ ಕೆಲ ಕಾಲ ಪ್ರತಿಭಟನೆ ನಡೆಸಿದರು. ನಂತರ ಕಂದಾಯ ಭವನದವರೆಗೆ ಕಾಲ್ನಡಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಅಪರ ಜಿಲ್ಲಾಧಿಕಾರಿ ಬಸವರಾಜು ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಹದಗೆಟ್ಟ ಕಾನೂನು: ಜಿಲ್ಲೆಯಲ್ಲಿ ದಲಿತರ ವಿರುದ್ಧ ನಿರಂತರವಾಗಿ ದೌರ್ಜನ್ಯ, ಅತ್ಯಾಚಾರ ನಡೆಯುತ್ತಿದ್ದರೂ ಜಿಲ್ಲಾಡಳಿತ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳದೆ ನಿರ್ಲಕ್ಷ ವಹಿಸಿದೆ. ಸ್ವತಃ ಗೃಹ ಮಂತ್ರಿಯಾಗಿರುವ ಕೆ.ಜೆ.ಜಾರ್ಜ್ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿದ್ದರೂ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದರು.
ತಾಲೂಕಿನ ಚಿಕ್ಕಗಂಗವಾಡಿ ಗ್ರಾಮದ ದಲಿತ ಕುಟುಂಬಕ್ಕೆ ಸೇರಿದ ಭಾಗ್ಯಮ್ಮ ಮತ್ತು ಶಶಿಕುಮಾರ್ ಅವರನ್ನು ಕತ್ತು ಕೊಯ್ದು ಕೊಲೆ ಮಾಡಲು ಯತ್ನಿಸಿದ್ದು, ಘಟನೆ ನಡೆದು ವಾರ ಕಳೆದರೂ ಯಾವೊಬ್ಬ ಅಧಿಕಾರಿಯೂ ಸ್ಥಳ ಪರಿಶೀಲನೆ ನಡೆಸಿ ನೊಂದ ಕುಟುಂಬದ ರಕ್ಷಣೆಗೆ ಧಾವಿಸಿಲ್ಲ ಎಂದು ಟೀಕಿಸಿದರು.
ಒತ್ತುವರಿ ಆರೋಪ: ಜಾಲಮಂಗಲ ಗ್ರಾಮದಲ್ಲಿ ದಲಿತರಿಗೆ ಸೇರಿದ ನಿವೇಶನಗಳನ್ನು ಸವರ್ಣೀಯರು ಒತ್ತುವರಿ ಮಾಡಿಕೊಂಡಿದ್ದಾರೆ. ನ್ಯಾಯ ದೊರಕಿಸಿಕೊಡುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರೂ ಇದುವರೆಗೂ ಸ್ಪಂದಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಗರದ ಅರಳೇಪೇಟೆಯಲ್ಲಿ ದಲಿತ ಜನಾಂಗಕ್ಕೆ ಸೇರಿದ ಮಹೇಂದ್ರ ಮತ್ತು ಮರಿಯಮ್ಮ ಎಂಬುವರಿಗೆ ಮನೆ ಭೋಗ್ಯದ ಹಣ ಪಾವತಿಸದೆ ಮಾಲೀಕ ನಟರಾಜ್ ಎಂಬುವರು ದೌರ್ಜನ್ಯ ನಡೆಸಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದರು.
ಜಿಲ್ಲಾಡಳಿತ ಈಗಲಾದರೂ ಎಚ್ಚೆತ್ತುಕೊಂಡು ನೊಂದ ದಲಿತರ ರಕ್ಷಣೆಗೆ ನಿಲ್ಲಬೇಕು. ದಲಿತರ ವಿರುದ್ಧದ ದೌರ್ಜನ್ಯ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಜಿಲ್ಲಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಕೆ.ಮರಿಯಪ್ಪ, ಪದಾಧಿಕಾರಿಗಳಾದ ಪರಮೇಶ್, ವೆಂಕಟೇಶ್, ಲಕ್ಷ್ಮಮ್ಮ, ಬೋರಯ್ಯ, ಸರೋಜಮ್ಮ ಮತ್ತಿತರರು ಭಾಗವಹಿಸಿದ್ದರು.