ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲೇ ಒಬ್ಬ ಸಾವು, ಐವರಿಗೆ ತೀವ್ರ ಗಾಯ
ನೆಲಮಂಗಲ: ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿರುವ ಮಾಕಳಿ ಬಸ್ ನಿಲ್ದಾಣದ ಬಳಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಮಾರುತಿ ವ್ಯಾನ್‌ನ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಒಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಗಾಯಗೊಂಡಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಶಿರಾ ತಾಲೂಕಿನ ಮೂರ್ತಿ (40) ಎಂದು ಗುರುತಿಸಲಾಗಿದೆ. ತೀವ್ರ ಗಾಯಗೊಂಡಿರುವ ಮೋಹನ್ ಕುಮಾರ್ (21), ಭಾಗ್ಯಮ್ಮ (45), ಅಭಿಲಾಷ (22), ಹೇಮ (1) ಹಾಗೂ ಇನ್ನೊಬ್ಬರ ಹೆಸರು ತಿಳಿದಿಲ್ಲ. ಗಾಯಗೊಂಡವರನ್ನು ದಾಸರಹಳ್ಳಿಯ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತಕ್ಕೊಳಗಾದವರೆಲ್ಲರೂ ಒಂದೇ ಕುಟುಂಬದವರಾಗಿದ್ದು ತುಮಕೂರು ಜಿಲ್ಲೆ ಶಿರಾ ತಾಲೂಕಿನವರು. ಯುಗಾದಿ ಹಬ್ಬದ ಪ್ರಯುಕ್ತ ಬೆಂಗಳೂರಿನ ಸಂಬಂದಿಕರ ಮನೆಗೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ದುರ್ಘಟನೆ ಸಂಭವಿಸಿದೆ. ಈ ಬಗ್ಗೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.