ಹಳೆ ವಿದ್ಯಾರ್ಥಿಗಳು ಹೆಚ್ಚಿನ ಸಹಕಾರ ನೀಡಲು ಮನವಿ
ಚನ್ನಪಟ್ಟಣ: ಕಾಲೇಜಿನ ಅಭಿವೃದ್ಧಿ ಚಟುವಟಿಕೆಗಳಿಗೆ ಹಳೆ ವಿದ್ಯಾರ್ಥಿಗಳು ಹೆಚ್ಚಿನ ಸಹಕಾರ ನೀಡುವ ಮೂಲಕ ಸಂಸ್ಥೆಯನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಕೈಜೋಡಿಸಬೇಕೆಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಲಿಂಗಣ್ಣಯ್ಯ ಮನವಿ ಮಾಡಿದರು.
ಕಾಲೇಜಿನಲ್ಲಿ ನಡೆದ ಹಳೆ ವಿದ್ಯಾರ್ಥಿಗಳ ಸಭೆಯಲ್ಲಿ ಮಾತನಾಡಿ, 28 ವರ್ಷಗಳ ಇತಿಹಾಸ ವಿರುವ ಸಂಸ್ಥೆ ಅಸಂಖ್ಯಾತ ವಿದ್ಯಾರ್ಥಿಗಳಿಗೆ ಜ್ಞಾನ ನೀಡುವ ಜತೆಗೆ ಅವರ ಬದುಕಿನ ಸಾರ್ಥಕತೆಯಲ್ಲಿ ತನ್ನದೂ ಒಂದು ಪಾಲನ್ನು ಹೊಂದಿದೆ. ಗ್ರಾಮೀಣ ಮಟ್ಟದಲ್ಲಿರುವ ಸರ್ಕಾರಿ ಕಾಲೇಜು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು ಇನ್ನೂ ಹೆಚ್ಚಿನ ಸೇವೆ ಸಲ್ಲಿಸಲು ಹಳೆ ವಿದ್ಯಾರ್ಥಿಗಳ ಸಹಕಾರ ಅಗತ್ಯ ಎಂದು ಮನವಿ ಮಾಡಿದರು.
ಹಳೆವಿದ್ಯಾರ್ಥಿಗಳು ಕಾಲೇಜಿನ ಉನ್ನತಿಗೆ ಹೆಚ್ಚಿನ ಸಹಕಾರ ನೀಡುವ ಮೂಲಕ ಸಂಸ್ಥೆಯ ಕಿರಿಯ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ತಿಳಿಸಿದ ಅವರು, ಹಳೆವಿದ್ಯಾರ್ಥಿಗಳ ಜತೆಗೆ ನಮ್ಮ ಸಂಸ್ಥೆಯ ಸಿಬ್ಬಂದಿ ಸಹಕಾರ ನೀಡಲಿದ್ದಾರೆ ಎಂದು ತಿಳಿಸಿದರು. ಸಭೆಯಲ್ಲಿ ಮಾತನಾಡಿದ ಹಳೆ ವಿದ್ಯಾರ್ಥಿ ಸಂಘದ ಸಂಚಾಲಕ ಪ್ರೊ.ಮಾಯೀಗೌಡ ಸಾಕಷ್ಟು ಹಳೆ ವಿದ್ಯಾರ್ಥಿಗಳಿಗೆ ಈ ಕಾಲೇಜಿನೊಂದಿಗೆ ಒಡನಾಟವಿದ್ದು ಅವರೆಲ್ಲರ ಕಾಳಜಿಯನ್ನು ಗೌರವಿಸುವ ಕೆಲಸವೇ ಈ ಸಂಘದ ಕೆಲಸವಾಗಿದ್ದು ಎಲ್ಲಾ ವಿದ್ಯಾರ್ಥಿಗಳು ಸಂಘದ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಸಂಘವನ್ನು ಸದಾ ಚಟುವಟಿಕೆಯಿಂದ ಇರುವಂತೆ ನೋಡಿಕೊಳ್ಳ ಬೇಕೆಂದು ಮನವಿ ಮಾಡಿದರು. ಸಮಯದ ಅಭಾವದಿಂದ ಸಭೆಯ ಬಗ್ಗೆ ಸಾಕಷ್ಟು ವಿದ್ಯಾರ್ಥಿಗಳಿಗೆ ಮಾಹಿತಿ ತಿಳಿಸಲಾಗಿಲ್ಲ, ಮುಂದಿನ ದಿನಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೂ ಮಾಹಿತಿ ನೀಡುವ ಕೆಲಸ ಮಾಡಲಾಗುವುದೆಂದು ತಿಳಿಸಿದ ಅವರು ಹಳೆಯ ವಿದ್ಯಾರ್ಥಿಗಳು ಹೊಸ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗುವ ನಿಟ್ಟಿನಲ್ಲಿ ಕೆಲಸ ಮಾಡಬೇಕೆಂದು ಮನವಿ ಮಾಡಿದರು. ಕಾಲೇಜಿನ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಸೈಕಲ್ ಸ್ಟ್ಯಾಂಡ್ ನಿರ್ಮಾಣ ಮಾಡಲು ಹಳೆ ವಿದ್ಯಾರ್ಥಿ ಸಂಘದ ಸಭೆ ಸರ್ವಾನುಮತದಿಂದ ನಿರ್ಧಾರ ಕೈಗೊಂಡಿತು. ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಹಳೆವಿದ್ಯಾರ್ಥಿಗಳ ಸಂಘದ ಹಣದಲ್ಲಿ ಸೈಕಲ್ ಸ್ಟ್ಯಾಂಡ್ ನಿರ್ಮಾಣ ಮಾಡಲು ಹಳೆ ವಿದ್ಯಾರ್ಥಿಗಳು ಒಪ್ಪಿಗೆ ಸೂಚಿಸಿದರು.
ಸಭೆಯಲ್ಲಿ ಉಪನ್ಯಾಸಕರಾದ ಡಾ. ಬಿ.ಟಿ.ನೇತ್ರಾವತಿ ಗೌಡ, ಪುಟ್ಟಸ್ವಾಮಿ, ಶ್ರೀಕಾಂತ್, ಮಹೇಶ್, ಗ್ರಂಥಪಾಲಕ ವೆಂಕಟೇಶ್ ಮುಂತಾದವರು ಉಪಸ್ಥಿತರಿದ್ದರು.