ಸರ್ಕಾರದಿಂದ ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚು ಒತ್ತು
ರಾಮನಗರ: ಸರ್ಕಾರವು ಶೈಕ್ಷಣಿಕ ಕ್ಷೇತ್ರಕ್ಕೆ ಒತ್ತು ನೀಡಿದ್ದು, ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ಒದಗಿಸುವ ಕಾರ್ಯಕ್ರಮ ರೂಪಿಸಿದೆ. ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕುಮಾರಸ್ವಾಮಿ ತಿಳಿಸಿದರು.
ತಾಲೂಕಿನ ಶ್ಯಾನುಭೋಗನಹಳ್ಳಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಸಂಭ್ರಮಸಿರಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳ ಬಗ್ಗೆಯೂ ಆಸಕ್ತಿ ಮೂಡಿಸಿ ಅವರನ್ನು ಸತ್ಪ್ರಜೆಗಳನ್ನಾಗಿ ರೂಪಿಸಬೇಕು ಎಂದರು.
ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ಆಕರ್ಷಿಸಲು ಗುಣಮಟ್ಟದ ಶಿಕ್ಷಣದ ಜತೆಗೆ ಅಕ್ಷರ ದಾಸೋಹ ಯೋಜನೆಯಡಿ ಮಧ್ಯಾಹ್ನದ ಬಿಸಿಯೂಟ, ಉಚಿತ ಬೈಸಿಕಲ್, ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ಪ್ರೋತ್ಸಾಹ ಧನ, ಕ್ಷೀರಭಾಗ್ಯದಡಿ ಹಾಲು ನೀಡಲಾಗುತ್ತಿದೆ ಎಂದು ತಿಳಿಸಿದರು.
ಖಾಸಗಿ ಶಿಕ್ಷಣ ಸಂಸ್ಥೆಗಳು ಮಕ್ಕಳು ಮತ್ತು ಪೋಷಕರನ್ನು ಮರುಳು ಮಾಡುತ್ತಿವೆ. ಅಂತಹ ಕಡೆ ದುಬಾರಿ ಶುಲ್ಕ ತೆತ್ತು ಮಕ್ಕಳನ್ನು ದಾಖಲಿಸುವ ಮೂಲಕ ಪೋಷಕರು ಹಣ ಕಳೆದುಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದರು.
ಮಾದರಿ ಶಾಲೆಯಾಗಿ ಘೋಷಣೆಯಾಗಿರುವ ಶ್ಯಾನುಭೋಗನಹಳ್ಳಿಯ ಸರ್ಕಾರಿ ಶಾಲೆಗೆ ರು.25 ಲಕ್ಷ ವೆಚ್ಚದಲ್ಲಿ ಕೊಠಡಿಗಳ ನಿರ್ಮಾಣಕ್ಕೆ ಮಂಜೂರಾತಿ ದೊರೆತಿದೆ ಎಂದು ಕುಮಾರಸ್ವಾಮಿ ತಿಳಿಸಿದರು.
ಇದೇ ವೇಳೆ ಟಯೋಟೊ ಕಿರ್ಲೋಸ್ಕರ್ ಬಷಾಕೋ ಕಾರ್ಖಾನೆಯ ಕಾರ್ಮಿಕರು ಮಕ್ಕಳ ಬಿಸಿಯೂಟಕ್ಕೆ ತಟ್ಟೆಗಳನ್ನು ಕೊಡುಗೆಯಾಗಿ ನೀಡಿದರು. ಶಾಲೆಯ ಮುಖ್ಯ ಶಿಕ್ಷಕಿ ಸತ್ಯಭಾಮ, ಎಸ್ಡಿಎಂಸಿ ಅಧ್ಯಕ್ಷ ಚಿನ್ನಗಿರಿಗೌಡ, ಶಿಕ್ಷಕ ಮನಮೋಹನ್, ಗ್ರಾ.ಪಂ. ಮಾಜಿ ಅಧ್ಯಕ್ಷ ಎಸ್.ಬಿ.ಜಗದೀಶ್, ಸದಸ್ಯೆ ವಿನೋದ ಪಟೇಲ್, ಅಡುಗೆ ಸಹಾಯಕಿ ಹೊನ್ನಮ್ಮ ಭಾಗವಹಿಸಿದ್ದರು.