ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಜಿಲ್ಲಾ ಕೇಂದ್ರ ಸಮಗ್ರ ಅಂಕಿ-ಅಂಶದ ವರದಿ ಸರ್ಕಾರಕ್ಕೆ ಸಲ್ಲಿಕೆ

Rashmi Kasaragodu
Updated On : 21 Feb 2014, 1:46 am

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಕೇಂದ್ರ ಘೋಷಣೆ ಕುರಿತಂತೆ ಸರ್ಕಾರಕ್ಕೆ ಈಗಾಗಲೇ ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ತಾಲೂಕುಗಳಲ್ಲಿ ಲಭ್ಯವಿರುವ ಸರ್ಕಾರಿ ಜಮೀನುಗಳು ಮತ್ತು ಇತರ ಅಂಕಿ-ಅಂಶಗಳ ಸಮಗ್ರ ವರದಿಯನ್ನು ಸರ್ಕಾರಕ್ಕೆ ನೀಡಲಾಗಿದೆ. ಈ ಹಂತದಲ್ಲಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ವಿ.ಶಂಕರ್ ತಿಳಿಸಿದರು.
ಇಲ್ಲಿನ ಬೆಸೆಂಟ್ ಪಾರ್ಕ್‌ನಲ್ಲಿ ದೊಡ್ಡಬಳ್ಳಾಪುರ ಉಪವಿಭಾಗದ ಜಮಾಬಂಧಿ ಕಡತ ವಿಲೇವಾರಿಯಲ್ಲಿ ಪಾಲ್ಗೊಂಡಿದ್ದ ವೇಳೆ ಅವರನ್ನು ಭೇಟಿ ಮಾಡಿದ ಜಿಲ್ಲಾ ಕೇಂದ್ರ ಹೋರಾಟ ಸಮಿತಿ ಮುಖಂಡರ ಮನವಿಗೆ  ಸ್ಪಂದಿಸಿ ಅವರು ಮಾತನಾಡಿದರು. ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯನ್ನು ಕೇಂದ್ರ ಸ್ಥಳಕ್ಕೆ ಸ್ಥಳಾಂತರಿಸಿ ಸರ್ಕಾರ ಕಳೆದ ಜ.24ರಂದೇ ಅಧಿಕೃತ ಆದೇಶ ನೀಡಿದೆ. ಆದಾಗ್ಯೂ ಈವರೆಗೆ ಕಚೇರಿ ವರ್ಗಾವಣೆಯಾಗಿಲ್ಲ ಎಂಬುದರ ಕುರಿತು ಪ್ರತಿಕ್ರಿಯಿಸಿದ ಅವರು ಕಚೇರಿ ವರ್ಗಾವಣೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ಎಪಿಎಸಿ ಆವರಣದಲ್ಲಿರುವ ಕಟ್ಟಡಕ್ಕೆ ಕಚೇರಿಯನ್ನು ಸ್ಥಳಾಂತರಿಸಲು ಅಧಿಕಾರಿಗಳು ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಅಲ್ಲದೆ ನೂತನ ಕಚೇರಿ ನಿರ್ಮಾಣಕ್ಕೆ ಡಿವೈಎಸ್ಪಿ ಕಚೇರಿ ಹಿಂಭಾಗದಲ್ಲಿ ಸ್ಥಳ ಗುರುತಿಸಲಾಗಿದ್ದು, ಸದ್ಯದಲ್ಲೇ ಸ್ಥಳಾಂತರ ಪ್ರಕ್ರಿಯೆ ಆರಂಭವಾಗಲಿದೆ. ಈ ಬಗ್ಗೆ ಅನುಮಾನ ಬೇಡ ಎಂದು ವಿವರಿಸಿದರು.
ಜಿಲ್ಲಾ ಕೇಂದ್ರ ಎಲ್ಲಿ: ಬೆಂ.ಗ್ರಾ.ಜಿಲ್ಲೆಗೆ ಜಿಲ್ಲಾ ವ್ಯಾಪ್ತಿಯ ಒಳಗೆ ಜಿಲ್ಲಾ ಕೇಂದ್ರವನ್ನು ಸ್ಥಾಪಿಸಿ ಜಿಲ್ಲಾ ಮಟ್ಟದ ಎಲ್ಲ ಕಚೇರಿಗಳನ್ನೂ ವರ್ಗಾಯಿಸಲು ಅಗತ್ಯವಿರುವ ಸ್ಥಳಾವಕಾಶ, ತಾಲೂಕು ಕೇಂದ್ರಗಳ ಅಂಕಿ-ಅಂಶ, ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ನಗರ ಸುತ್ತಮುತ್ತ ಇರುವ ಸರ್ಕಾರಿ ಜಮೀನುಗಳ ಮಾಹಿತಿ ಸೇರಿದಂತೆ ಹಲವು ವಿವರಗಳನ್ನು ಪ್ರಾಥಮಿಕ ವರದಿಯಾಗಿ ಸರ್ಕಾರಕ್ಕೆ ನೀಡಲಾಗಿದೆ. ಸರ್ಕಾರದ ಸಂಬಂಧಪಟ್ಟ ಇಲಾಖೆ ಈ ಬಗ್ಗೆ ಸಂಪೂರ್ಣ ಪರಿಶೀಲನೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಹೋರಾಟಗಾರರ ಭಾವನೆಗಳಿಗೆ ಮುಕ್ತ ಸ್ವಾಗತವಿದೆ. ಆದರೆ ಅಧಿಕಾರಿಗಳ ಹಂತದಲ್ಲಿ ಆಗಬೇಕಿರುವ ಎಲ್ಲ ಪ್ರಕ್ರಿಯೆಗಳನ್ನೂ ಪಾರದರ್ಶಕವಾಗಿ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದರು. ಜಿಲ್ಲಾ ಕೇಂದ್ರ ಹೋರಾಟ ಸಮಿತಿ ನೇತೃತ್ವದಲ್ಲಿ ಜಿಲ್ಲಾ ಕೇಂದ್ರ ಮತ್ತು ಉಪವಿಭಾಗಾಧಿಕಾರಿ ಕಚೇರಿ ಸ್ಥಳಾಂತರಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement