ಬಿಜೆಪಿಯೊಂದಿಗೆ ಕೆಜೆಪಿ ವಿಲೀನವಾಗಿಲ್ಲ'
ರಾಮನಗರ: ಕರ್ನಾಟಕ ಜನತಾ ಪಕ್ಷವು ಬಿಜೆಪಿಯೊಂದಿಗೆ ವಿಲೀನವಾಗಿಲ್ಲ. ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲೂ ಕೆಜೆಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಫೆ.26ರಂದು ಮೈಸೂರಿನಲ್ಲಿ 13 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಕೆಜೆಪಿ ಸಂಸ್ಥಾಪಕ ಅಧ್ಯಕ್ಷ ಪದ್ಮನಾಭ ಪ್ರಸನ್ನಕುಮಾರ್ ಹೇಳಿದರು.
ರಾಜ್ಯದ ಎಲ್ಲಾ ಜಿಲ್ಲೆಗಳ ಪ್ರವಾಸ ಮುಗಿದ ನಂತರ ಮಾ.18ರಂದು ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಪಕ್ಷಗಳು ಅಭ್ಯರ್ಥಿಗಳ ಹುಡುಕಾಟದಲ್ಲಿ ನಿರತವಾಗಿವೆ ಎಂದು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಬಿ.ಎಸ್. ಯಡಿಯೂರಪ್ಪನವರಿಗೂ ಕೆಜೆಪಿಗೂ ಇನ್ನು ಮುಂದೆ ಯಾವ ಸಂಬಂಧವೂ ಇರುವುದಿಲ್ಲ. ಕೆಜೆಪಿಯಿಂದ ಗೆದ್ದಿರುವ ಇಬ್ಬರು ಶಾಸಕರು ನಮ್ಮೊಂದಿಗಿದ್ದಾರೆ. ಕೆಜೆಪಿ, ಬಿಜೆಪಿಯಲ್ಲಿ ವಿಲೀನವಾಗಿದೆ ಎಂದು ಬಿ.ಎಸ್.ವೈ, ಶೋಭಾ ಕರಂದ್ಲಾಜೆ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅನ್ನಭಾಗ್ಯ ಯೋಜನೆ ಕೆಲವರಿಗೆ ಹಣಭಾಗ್ಯ ಯೋಜನೆಯಾಗಿ ಬಿಟ್ಟಿದೆ. ಈ ಯೋಜನೆಯ ಮೂಲಕ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಸಚಿವ ಶಾಮನೂರು ಶಿವಶಂಕರಪ್ಪರ ಪುತ್ರ ಅನ್ನಭಾಗ್ಯ ಯೋಜನೆಯ ಭ್ರಷ್ಟಾಚಾರದಲ್ಲಿ ನೇರ ಭಾಗಿಯಾಗಿದ್ದಾರೆ. ಇದನ್ನು ಸಿದ್ದರಾಮಯ್ಯ ಕಂಡೂ ಕಾಣದಂತಿದ್ದಾರೆ ಎಂದು ದೂರಿದರು.
ಗೋಷ್ಠಿಯಲ್ಲಿ ಕೆಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಕುಮಾರ್, ಜಿಲ್ಲಾಧ್ಯಕ್ಷ ಪ್ರದೀಪ್, ಜಿಲ್ಲಾ ಯುವ ಘಟಕದ ಅಧ್ಯಕ್ಷ ಜಿ.ವೆಂಕಟೇಶ್, ಮಾಗಡಿ ತಾಲೂಕು ಯುವ ಘಟಕದ ಅಧ್ಯಕ್ಷ ತಿಲಕ್, ರಾಮನಗರ ತಾಲೂಕು ಯುವ ಘಟಕದ ಅಧ್ಯಕ್ಷ ಮೊಹಮ್ಮದ್ಯೂಸುಫ್ಮುಂತಾದವರು ಹಾಜರಿದ್ದರು.