ಕೇಂದ್ರ, ರಾಜ್ಯ ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ
ನೆಲಮಂಗಲ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ದುರಾಡಳಿತ ವಿರುದ್ಧ ಬೃಹತ್ ಪ್ರತಿಭಟನಾ ಮೆರವಣಿಗೆ ತಾಲೂಕು ಬಿಜೆಪಿ ವತಿಯಿಂದ ನಡೆಯಿತು. ನೂರಾರು ಕಾರ್ಯಕರ್ತರು ಸೋಮವಾರ ತಾಲೂಕು ಕಚೇರಿ ಮುಂಭಾಗ ಪ್ರತಿಭಟನಾ ಧರಣಿ ನಡೆಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿ ಮಾಜಿ ಶಾಸಕ ಎಂ.ವಿ.ನಾಗರಾಜು ಮಾತಾಡಿ ಕೇಂದ್ರ ಸರ್ಕಾರದ ಹಗರಣಗಳು ಬೆಲೆ ಏರಿಕೆಗೆ ಕಡಿವಾಣ ಹಾಕದೆ ಇರುವುದು ಮತ್ತು ಅಡುಗೆ ಅನಿಲ, ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿದರು.
ಕೂಡಲೇ ಕೇಂದ್ರ ಸರ್ಕಾರ ಜನ ವಿರೋಧಿ ಬೆಲೆ ಏರಿಕೆ ಹಿಂತೆಗೆದುಕೊಳ್ಳಬೇಕು. ಬೆಲೆ ಏರಿಕೆ ಮಾಡಿ ಜನ ಸಾಮಾನ್ಯರನ್ನು ಆರ್ಥಿಕ ಸಂಕಷ್ಟಕ್ಕೀಡು ಮಾಡುವುದನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ದೇಶದ ಸಾಮಾನ್ಯ ಜನತೆ ಹಾಗೂ ಮಹಿಳಾ ಸಮುದಾಯವನ್ನು ಎದುರು ಹಾಕಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಜನವಿರೋಧಿ ಆರ್ಥಿಕ ನೀತಿಯನ್ನು ಅನುಸರಿಸುತ್ತಿರುವ ಕೇಂದ್ರ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ರಾಷ್ಟ್ರದ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು.
ಪ್ರವಾಸಿ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ತಾಲೂಕು ಕಚೇರಿ ಮುಂಭಾಗ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.