ಅಪೆರಲ್‌ಪಾರ್ಕ್‌ನಲ್ಲಿ ಬಾಲಕಾರ್ಮಿಕರು; ದೂರು
ದೊಡ್ಡಬಳ್ಳಾಪುರ: ಇಲ್ಲಿನ ಅಪೆರಲ್ ಪಾರ್ಕ್‌ನ ವಿವಿಧ ಗಾರ್ಮೆಂಟ್ ಮತ್ತಿತರ ಕಾರ್ಖಾನೆಗಳಲ್ಲಿ ಬಾಲಕಾರ್ಮಿಕರನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಬೆಂ.ಗ್ರಾ. ಜಿಲ್ಲಾಧಿಕಾರಿ ಶಂಕರ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಶುಕ್ರವಾರ ವಿವಿಧ ಕಾರ್ಖಾನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಪರಿಶೀಲನೆ ವೇಳೆ ಯಾವುದೇ ಬಾಲಕಾರ್ಮಿಕರೂ ಕಂಡು ಬರಲಿಲ್ಲ. ಆದರೂ ಜಿಲ್ಲಾಧಿಕಾರಿಗಳು ಕಾರ್ಖಾನೆ ಅಧಿಕಾರಿಗಳು ಮತ್ತು ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿ ಈ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಸೂಚಿಸಿದರು. ಬಾಲಕಾರ್ಮಿಕರ ಕುರಿತ ಯಾವುದೇ ಪ್ರಕರಣ ಕಂಡು ಬಂದರೆ ನಿರ್ದಾಕ್ಷಿಣ್ಯವಾಗಿ ಸಂಬಂಧಪಟ್ಟ ಕೈಗಾರಿಕೆ ವಿರುದ್ಧ ದೂರು ದಾಖಲಿಸಿ ಕಾನೂನು ಕ್ರಮ ಜರುಗಿಸುವಂತೆ ಸ್ಥಳೀಯ ಕಾರ್ಮಿಕ ಅಧಿಕಾರಿಗಳು ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.
8ಕ್ಕೂ ಹೆಚ್ಚು ಕಾರ್ಖಾನೆಗಳಿಗೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿಗಳು ಕಾರ್ಖಾನೆ ಮಾಲೀಕರು ಮತ್ತು ಸ್ಥಳೀಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಉಪವಿಭಾಗಾಧಿಕಾರಿ ಮಂಜುನಾಥ್, ತಹಸೀಲ್ದಾರ್ ಕೆ.ಬಿ.ಸಿದ್ದಲಿಂಗಯ್ಯ, ಕಾರ್ಮಿಕ ಇಲಾಖೆ ಅಧಿಕಾರಿ ವೆಂಕಟೇಶ್ ಇತರರಿದ್ದರು.
ಜಿಲ್ಲಾಧಿಕಾರಿ ಭೇಟಿ ಕುರಿತು ಪ್ರತಿಕ್ರಿಯಿಸಿರುವ ಸಾರ್ವಜನಿಕರು ನಗರದ ಹಲವು ಹೊಟೇಲ್‌ಗಳಲ್ಲಿ, ಗ್ಯಾರೇಜ್‌ಗಳಲ್ಲಿ ಬಾಲಕಾರ್ಮಿಕರು ಹಲವು ಸಂಖ್ಯೆಯಲ್ಲಿದ್ದಾರೆ. ಅಲ್ಲದೆ ಸರ್ಕಾರಿ ಸ್ವಾಮ್ಯದ ಕೆಲಸಗಳಿಗೂ ಬಾಲಕಾರ್ಮಿಕರನ್ನು ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ದೂರುಗಳಿವೆ. ಅಪೆರಲ್ ಪಾರ್ಕ್‌ನಲ್ಲಿ ಮಕ್ಕಳು ಕೆಲಸಗಾರರಾಗಿ ದುಡಿಯುತ್ತಿರುವುದು ಸತ್ಯ. ಆದರೆ ಅಧಿಕಾರಿಗಳ ದಾಳಿ ವೇಳೆ ಯಾರೂ ಕಂಡು ಬಾರದಿರುವುದು ಅಚ್ಚರಿಗೆ ಕಾರಣವಾಗಿದೆ ಎಂದಿದ್ದಾರೆ.