'ಫೆ.22ರಂದು ಕನ್ನಡ ಭವನ ಉದ್ಘಾಟನೆ'
ಮಾಗಡಿ: ಕುದೂರಿನಲ್ಲಿ ನಿರ್ಮಾಣಗೊಂಡಿರುವ ಕನ್ನಡ ಭವನ, ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಮತ್ತು ಗ್ರಂಥಾಲಯದ ಉದ್ಘಾಟನಾ ಸಮಾರಂಭವನ್ನು ಫೆ.22 ಮತ್ತು 23 ರಂದು ಆಯೋಜಿಸಲು ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಗಂ.ದಯಾನಂದ್ ತಿಳಿಸಿದರು.
ಅವರು ಮಾಗಡಿ ತಾಲೂಕಿನ ಕುದೂರಿನಲ್ಲಿ ಏರ್ಪಡಿಸಿದ್ದ ತಾಲೂಕು ಕಸಾಪ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಸಾಹಿತ್ಯ ಸಮ್ಮೇಳನಗಳು ಅರ್ಥಪೂರ್ಣವಾಗಿ ಮೂಡಿಬರಬೇಕು. ಸ್ಥಳೀಯ ಪ್ರತಿಭೆಗಳನ್ನು ಪತ್ತೆ ಹಚ್ಚಿ, ಪ್ರೋತ್ಸಾಹಿಸುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಸಾಹಿತ್ಯಾಸಕ್ತರ ಸಹಕಾರ ಮತ್ತು ಪ್ರೋತ್ಸಾಹ ಅಗತ್ಯವಿದೆ ಎಂದರು.
ಕನ್ನಡ ಭವನ ಉದ್ಘಾಟನೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಕೇಂದ್ರ ಕಸಾಪ ಅಧ್ಯಕ್ಷ ಪುಂಡಲೀಕ ಹಾಲಂಬಿ, ಹಿರೇಮಗಳೂರು ಕಣ್ಣನ್, ತುಮಕೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ವೀರೇಶಾನಂದ ಸರಸ್ವತಿ ಸ್ವಾಮೀಜಿ, ಸಂಸದ ಡಿ.ಕೆ. ಸುರೇಶ್, ಶಾಸಕ ಎಚ್.ಸಿ. ಬಾಲಕೃಷ್ಣ, ಮಾಜಿ ಸಚಿವ ಎಚ್.ಎಂ. ರೇವಣ್ಣರನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ. ಸಮ್ಮೇಳನದಲ್ಲಿ ಕವಿಗೋಷ್ಠಿ, ಸನ್ಮಾನಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.