1.80 ಲಕ್ಷ ಹುದ್ದೆ ಕೂಡಲೇ ಭರ್ತಿ ಮಾಡಿ
ಕ.ಪ್ರ.ವಾರ್ತೆ ರಾಮನಗರ ಜ.21
ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 1.80 ಲಕ್ಷ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಒತ್ತಾಯಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಘಟಕದ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ನಗರದ ಕಂದಾಯ ಭವನದ ಆವರಣದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಅಪರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ರಾಜ್ಯದ 60 ಸರ್ಕಾರಿ ಇಲಾಖೆಗಳಲ್ಲಿ ಒಟ್ಟು 1.80 ಲಕ್ಷ ಹುದ್ದೆಗಳು ಹಾಗೂ 5-6 ಸಾವಿರ ಬ್ಯಾಕ್ ಲಾಗ್
ಹುದ್ದೆಗಳು ಖಾಲಿ ಇವೆ. ಸಿಬ್ಬಂದಿ ಕೊರತೆಯಿಂದ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆಯುವಂತಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳೂ ಕುಂಠಿತಗೊಂಡಿದ್ದು, ಖಾಲಿ ಹುದ್ದೆಗಳನ್ನು ಭರ್ತಿ ಮಾಡದ ಹೊರತು ಆಡಳಿತ ಯಂತ್ರ ಚುರುಕುಗೊಳಿಸಲು ಸಾಧ್ಯವಿಲ್ಲ ಎಂದರು.
ಸರ್ಕಾರದ ಜವಾಬ್ದಾರಿ: ದೇಶದಲ್ಲಿ 15 ರಿಂದ 35 ವರ್ಷದೊಳಗಿನ 40 ಕೋಟಿ ಯುವಕರಿದ್ದಾರೆ. ದೇಶದ ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡುವುದು ಸರ್ಕಾರದ ಜವಾಬ್ದಾರಿ. 2008ರಲ್ಲಿ ಬಿಜೆಪಿ ಸರ್ಕಾರ ಸರ್ಕಾರಿ ನೌಕರರ ವಯೋವುತಿಯನ್ನು 58 ರಿಂದ 60ಕ್ಕೇರಿಸಿದ್ದಾರೆ. ಇದರಿಂದ ವಿದ್ಯಾವಂತ ಯುವಕರು ಉದ್ಯೋಗಾವಕಾಶದಿಂದ ವಂಚಿತರನ್ನಾಗಿಸಿತು ಎಂದು ಆರೋಪಿಸಿದರು.
ಪ್ರಸ್ತುತ ಅಧಿಕಾರಿದಲ್ಲಿರುವ ಕಾಂಗ್ರೆಸ್ ಸರ್ಕಾರವು ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ವಿಶೇಷ ಆಸಕ್ತಿ ತೋರಿಸುತ್ತಿಲ್ಲ. ದೇಶದ ಭವಿಷ್ಯವನ್ನು ಉಜ್ವಲಗೊಳಿಸಬೇಕಾದರೆ ಯುವಕರ ಕೈಗೆ ದುಡಿಮೆ ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಹಮದ್ ಫಾರೂಕ್, ಪ್ರಧಾನ ಕಾರ್ಯದರ್ಶಿ ಫೈರೋಜ್ ಅಲಿಖಾನ್, ಮತೀನ್ ಮತ್ತಿತರರು ಪಾಲ್ಗೊಂಡಿದ್ದರು.