ಜಿಲ್ಲೆಯ ಅಭಿವೃದ್ಧಿ ವಿಷಯದಲ್ಲಿ ನಾನೆಂದೂ ರಾಜಕೀಯ ಬೆರೆಸಲ್ಲ
ರಾಮನಗರ: ಈ ಜಿಲ್ಲೆಯ ಅಭಿವೃದ್ಧಿ ವಿಷಯದಲ್ಲಿ ನಾನೆಂದೂ ರಾಜಕೀಯ ಬೆರೆಸಲು ಹೋಗುವುದಿಲ್ಲ. ಎಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಜಿಲ್ಲೆಗೆ ಮಂಜೂರು ಮಾಡಿರುವ ಯೋಜನೆಗಳನ್ನು ಕಾರ್ಯಗತಗೊಳಿಸಲು ಬದ್ಧನಾಗಿರುವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು. ನನ್ನದೇನಿದ್ದರೂ ಅಭಿವೃದ್ಧಿಯ ರಾಜಕಾರಣವಷ್ಟೇ. ಯಾವುದೇ ಹಂತದಲ್ಲೂ ಸಂಘರ್ಷ, ಪಕ್ಷಪಾತಕ್ಕೆ ಆಸ್ಪದ ನೀಡುವುದಿಲ್ಲ. ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವುದೇ ನನ್ನ ಗುರಿ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಸ್ಥಾಪನೆ ಕುರಿತಂತೆ ಸಂಬಂಧಿಸಿದ ಅಧಿಕಾರಿಗಳ ಜತೆ ಚರ್ಚಿಸಿ, ಶೀಘ್ರವೇ ಯೋಜನೆ ಕಾರ್ಯಗತಕ್ಕೆ ಮುಂದಾಗುವೆ. ಇಂಧನ ಇಲಾಖೆಯಲ್ಲಿ ಅಮೂಲಾಗ್ರ ಬದಲಾವಣೆಗೆ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಕೃಷಿ ಪಂಪ್ಸೆಟ್ ಅವಲಂಬಿತ ಹಿತದೃಷ್ಟಿಯಿಂದ ದಿನಕ್ಕೆ 6 ತಾಸು ಇದ್ದ ತ್ರೀಫೇಸ್ ವಿದ್ಯುತ್ ಪೂರೈಕೆ ಅವಧಿಯನ್ನು 7 ತಾಸಿಗೆ ಹೆಚ್ಚಳ ಮಾಡಲಾಗಿದೆ. ಪರೀಕ್ಷೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ರಾತ್ರಿ ವೇಳೆ ನಿರಂತರ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಶಿವಕುಮಾರ್ ಹೇಳಿದರು.