ತೋಟಗಾರಿಕಾ ಕಚೇರಿಗೆ ಶಿಲಾನ್ಯಾಸ
ದೇವನಹಳ್ಳಿ: ದೇವನಹಳ್ಳಿ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯು 42 ವರ್ಷಗಳಷ್ಟು ಹಳೆಯದಾಗಿ ಶಿಥಿಲಗೊಂಡಿದ್ದು ಸುಮಾರು 50 ಲಕ್ಷ ರು. ವೆಚ್ಚದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಪಿಳ್ಳಮುನಿಶಾಮಪ್ಪ ಶನಿವಾರ ಶಂಕುಸ್ಥಾಪನೆ ನೆರವೇರಿಸಿದರು. ಸಮಾರಂಭದ ಉದ್ಘಾಟನೆ ನೆರವೇರಿಸಿದ ಶಾಸಕ ಪಿಳ್ಳಮುನಿಶಾಮಪ್ಪ ಮಾತನಾಡಿ ತಾಲೂಕಿನಲ್ಲಿ ವಿವಿಧ ಕಾಮಗಾರಿಗಳು ಚಾಲನೆಯಲ್ಲಿದ್ದು ಸಮಾಜ ಕಲ್ಯಾಣ ಇಲಾಖೆಯ 72 ಲಕ್ಷ ರು. ವೆಚ್ಚದ ನಿರ್ಮಿತಿ ಕೇಂದ್ರ, 2.68 ಲಕ್ಷ ರು. ವೆಚ್ಚದಲ್ಲಿ ವಿದ್ಯಾರ್ಥಿನಿಲಯ, ಪಿಎಂಜಿಎಸ್‌ವೈ ಯೋಜನೆಯಲ್ಲಿ 17.5 ಕಿ.ಮೀ ರಸ್ತೆಕಾಮಗಾರಿಗಳು ಚಾಲನೆಯಾಗಿವೆ ಎಂದರು.
ಬೈಕ್ ಸವಾರ ಸ್ಥಳದಲ್ಲೇ ಸಾವು
ನೆಲಮಂಗಲ: ಕೆಎಸ್‌ಆರ್‌ಟಿಸಿ ಬಸ್ಸೊಂದು ಬೈಕ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಕುಣಿಗಲ್ ರಾಷ್ಟ್ರೀಯ ಹೆದ್ದಾರಿ 48ರ ಮಹದೇವಪುರ ಬಳಿ ನಡೆದಿದೆ. ಮೃತ ಬೈಕ್ ಸವಾರನನ್ನು ಮಾಗಡಿ ತಾಲೂಕಿನ ಕೆಂಪಚಿಕ್ಕನಹಳ್ಳಿಯ ಜಯರಾಮ್ (45) ಎಂದು ಗುರುತಿಸಲಾಗಿದೆ. ಈತ ಮಾಗಡಿಯಿಂದ ನೆಲಮಂಗಲದ ಕಡೆ ಬೈಕ್‌ನಲ್ಲಿ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಈ ಬಗ್ಗೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಬೈಕ್ ನಡುವೆ ಡಿಕ್ಕಿ ಯುವಕ ಸ್ಥಳದಲ್ಲೇ ಸಾವು
ನೆಲಮಂಗಲ: ಬೈಕ್ ಒಂದು ಮತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಯುವಕ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ಗಾಯಗೊಂಡಿರುವ ಘಟನೆ ಶನಿವಾರ ಬೆಂಗಳೂರು-ಕುಣಿಗಲ್ ರಾಷ್ಟ್ರೀಯ ಹೆದ್ದಾರಿಯ ಮಹದೇವಪುರ ಬಳಿ ನಡೆದಿದೆ. ಮೃತ ಬೈಕ್ ಸವಾರನನ್ನು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸುನಿಲ್ (18) ಎಂದು ಗುರುತಿಸಲಾಗಿದೆ. ಗಾಯಗೊಂಡ ಉದಯ್ ಕುಮಾರ್‌ನನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಬಗ್ಗೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜಿಂಕೆ ಚರ್ಮ ಮಾರಾಟ ಇಬ್ಬರ ಬಂಧನ
ಚನ್ನಪಟ್ಟಣ: ಜಿಂಕೆ ಚರ್ಮ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರವಿ ಹಾಗೂ ಗಂಗ ಬಂಧಿತರು. ಮಂಡ್ಯ ಜಿಲ್ಲೆ ನಾಗಮಂಗಲದವರರಾದ ಇಬ್ಬರೂ ಎಲ್ಲೋ ಜಿಂಕೆಯನ್ನು ಬೇಟೆಯಾಡಿ, ಅವುಗಳ ಚರ್ಮವನ್ನು ಚನ್ನಪಟ್ಟಣದಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಸಿಕ್ಕಿಬಿದ್ದಿದ್ದಾರೆ. ಬಸ್ ನಿಲ್ದಾಣದ ಬಳಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪುರ ಠಾಣೆ ಎಸ್‌ಐ ಭಾಸ್ಕರ್ ಹಾಗೂ ಸಿಬ್ಬಂದಿ ಇಬ್ಬರನ್ನೂ ಬಂಧಿಸಿ ವನ್ಯಮೃಗ ಸಂರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.