ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಹೈಟೆಕ್ ಆಸ್ಪತ್ರೆ ನಿರ್ಮಾಣಕ್ಕೆ ಶೀಘ್ರ ಟೆಂಡರ್

Mainashree
Updated On : 24 Jul 2014, 11:50 am

ದೊಡ್ಡಬಳ್ಳಾಪುರ: ತಾಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ನೇತೃತ್ವದಲ್ಲಿ ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಮಾಲೋಚನಾ ಸಭೆ ನಡೆಯಿತು.
ಶಾಸಕ ಟಿ.ವೆಂಕಟರಮಣಯ್ಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ, ನಾನಾ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರನ್ನು ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆಯುವ ಪರೇಡ್‌ನಲ್ಲಿ ಸನ್ಮಾನಿಸಲಾಗುವುದು. ಅಲ್ಲದೆ ಪರೇಡ್‌ನಲ್ಲಿ ಭಾಗವಹಿಸುವ ಎನ್‌ಸಿಸಿ, ಭಾರತ ಸೇವಾದಳ, ನಾನಾ ಶಾಲೆಗಳ ಮಕ್ಕಳು ಸೇರಿದಂತೆ ಸುಮಾರು 1500 ಜನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು. ಮಳೆಗಾಲದಲ್ಲಿ ಕ್ರೀಡಾಂಗಣಕ್ಕೆ ನುಗ್ಗುವ ಚರಂಡಿ ನೀರು ನಿಯಂತ್ರಿಸಲು ಸಂಬಂಧ ಪಟ್ಟವರು ಸೂಕ್ತ ಕ್ರಮ ಕೈಗೊಳ್ಳಲು ಆದೇಶಿಸಲಾಗುವುದು ಎಂದರು.
ಆಸ್ಪತ್ರೆ ನಿರ್ಮಾಣಕ್ಕೆ ಟೆಂಡರ್: ದೊಡ್ಡಬಳ್ಳಾಪುರ ನಗರದಲ್ಲಿ 100 ಹಾಸಿಗೆಗಳ ಸುಸಜ್ಜಿತ ಹೈಟೆಕ್ ಆಸ್ಪತ್ರೆ ನಿರ್ಮಾಣ ಮಾಡಲು ಸರ್ಕಾರದಿಂದ ಮಂಜೂರು ದೊರೆತಿದೆ. 13.6 ಕೋಟಿ ವೆಚ್ಚದಲ್ಲಿ ಆಸ್ಪತ್ರೆ ಕಟ್ಟಡ ನಿರ್ಮಾಣಗೊಳ್ಳಲಿದೆ. ಸದ್ಯದಲ್ಲೇ ಕಾಮಗಾರಿಗೆ ಟೆಂಡರ್ ಕರೆಯಲಾಗುವುದು. ಇದಲ್ಲದೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಅಗತ್ಯವಿರುವ ಸ್ಥಳಾವಕಾಶ ಮತ್ತು ಬಸ್ ನಿಲ್ದಾಣಕ್ಕೆ ತಗುಲುವ ವೆಚ್ಚದ ವಿವರವನ್ನು ಸಾರಿಗೆ ಸಚಿವರಿಗೆ ನೀಡಿದ್ದು, ಯೋಜನೆಗೆ ಮಂಜೂರು ನೀಡುವಂತೆ ಕೋರಲಾಗಿದೆ ಎಂದು ಅವರು ವಿವರಿಸಿದರು. ಸಭೆಯಲ್ಲಿ ದೊಡ್ಡಬಳ್ಳಾಪುರ ನಗರ ಮತ್ತು ತಾಲೂಕಿನ ಹಲವು ಸಂಘಟನೆಗಳ ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿ ಸಲಹೆ-ಸೂಚನೆ ನೀಡಿದರು.
ಉಪವಿಭಾಗಾಧಿಕಾರಿ ಸಿ.ಮಂಜುನಾಥ್, ತಹಸೀಲ್ದಾರ್ ರಮೇಶ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅಶ್ವತ್ಥರೆಡ್ಡಿ, ತಾ.ಪಂ ಪ್ರಭಾರ ಅಧ್ಯಕ್ಷೆ ರಮಾದೇವಿ, ನಗರಸಭಾಧ್ಯಕ್ಷೆ ಶಂಶುನ್ನೀಸಾ ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement