ನಿತ್ಯಾ ಪುರುಷತ್ವ ಪರೀಕ್ಷೆಗೆ ಸಿದ್ಧತೆ: ಸಿಐಡಿ ಅಧಿಕಾರಿಗಳಿಂದ ನೋಟಿಸ್
ಬೆಂಗಳೂರು: ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ವಿವಾದಿತ ನಿತ್ಯಾನಂದ ಸ್ವಾಮಿ ಪುರುಷತ್ವ ಪರೀಕ್ಷೆಗೆ ಸಿದ್ಧತೆ ನಡೆಸಿರುವ ಸಿಐಡಿ ಅಧಿಕಾರಿಗಳು ಶನಿವಾರ ನಿತ್ಯಾನಂದನಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಆಗಸ್ಟ್ 6ರ ಒಳಗೆ ಸಿಐಡಿ ಕಚೇರಿಗೆ ಬಂದು ಪುರುಷತ್ವ ಪರೀಕ್ಷೆಗೆ ಹಾಜರಾಗುವ ಬಗ್ಗೆ ವಿವರಣೆ ನೀಡಬೇಕು ಎಂದು ನೋಟಿಸ್‌ನಲ್ಲಿ ಸಿಐಡಿ ಅಧಿಕಾರಿಗಳು ತಿಳಿಸಿದ್ದಾರೆ. ಚಿತ್ರನಟಿ ರಂಜಿತಾ ಜತೆ ನಡೆಸಿದ್ದ ರಾಸಲೀಲೆ ಪ್ರಕರಣ ಬೆಳಕಿಗೆ ಬಂದ ಬಳಿಕ, ವಿದೇಶದಲ್ಲಿ ನೆಲೆಸಿದ್ದ ಮಹಿಳೆಯೊಬ್ಬರು ನಿತ್ಯಾನಂದನ ವಿರುದ್ಧ ಅತ್ಯಾಚಾರ ದೂರು ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವೇಳೆ ನಿತ್ಯಾನಂದ ತಾನು 'ಆರು ವರ್ಷದ ಬಾಲಕ' ಇದ್ದಂತೆ. ತನಗೆ ಲೈಂಗಿಕ ಕ್ರಿಯೆ ನಡೆಸುವ ಸಾಮರ್ಥ್ಯ ಇಲ್ಲ ಎಂದು ತಿಳಿಸಿದ್ದ. ಈ ಹಿನ್ನೆಲೆಯಲ್ಲಿ 2012 ಜೂನ್ 18ರಂದು ರಾಮನಗರ ಜೆಎಂಎಫ್‌ಸಿ ನ್ಯಾಯಾಲಯ, ನಿತ್ಯಾನಂದನ ಪುರುಷತ್ವ ಪರೀಕ್ಷೆ ನಡೆಸಿ ಎಂದು ಪೊಲೀಸರಿಗೆ ಸೂಚನೆ ನೀಡಿತ್ತು.
ನಿತ್ಯಾನಂದ ಪರ ವಕೀಲರು ಜೆಎಂಎಫ್‌ಸಿ ನ್ಯಾಯಾಲಯದ ಆದೇಶ ರದ್ದುಗೊಳಿಸಬೇಕು ಎಂದು ಹೈಕೋರ್ಟ್ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ನಿತ್ಯಾನಂದನ ಪರೀಕ್ಷೆ ನಡೆಸಬೇಕು ಎನ್ನುವ ಜೆಎಂಎಫ್‌ಸಿ ನ್ಯಾಯಾಲಯದ ಆದೇಶ ಎತ್ತಿಹಿಡಿದಿತ್ತು. ಅಲ್ಲದೇ ಅಗತ್ಯ ಬಿದ್ದರೆ ಅವರನ್ನು ವಶಕ್ಕೆ ತೆಗೆದುಕೊಂಡು ಪುರುಷತ್ವ ಪರೀಕ್ಷೆಗೆ ಒಳಪಡಿಸಿ ಎಂದು ಸಿಐಡಿ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು. ಈ ಹಿನ್ನೆಲೆಯಲ್ಲಿ ನಿತ್ಯಾನಂದನನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಿರುವ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಒಂದು ವೇಳೆ ನಿತ್ಯಾನಂದ ನೋಟಿಸ್‌ಗೆ ಉತ್ತರ ನೀಡದಿದ್ದಲ್ಲಿ ವಶಕ್ಕೆ ಪಡೆದು ಪರೀಕ್ಷೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.