ಕುಡಿವ ನೀರಿನ ಸಮಸ್ಯೆ ಪರಿಹಾರ ಶೀಘ್ರ: ಶಾಸಕ
ದೊಡ್ಡಬಳ್ಳಾಪುರ: ರಾಜ್ಯಾದ್ಯಂತ ನೀರಿನ ಸಮಸ್ಯೆ ಈ ಬಾರಿ ಮತ್ತಷ್ಟು ಬಿಗಡಾಯಿಸಲಿದ್ದು, ಸಮಸ್ಯೆ ಪರಿಹಾರಕ್ಕೆ ಸರ್ಕಾರ ಪೂರಕ ಮಾರ್ಗೋಪಾಯಗಳ ಕುರಿತು ಚಿಂತನೆ ನಡೆಸುತ್ತಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.
ಶನಿವಾರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ತಾಲೂಕು ಪಂಚಾಯಿತಿ ಮತ್ತು ಸ್ಥಳೀಯ ಗ್ರಾಮ ಪಂಚಾಯಿತಿ ಸಹಭಾಗಿತ್ವದಲ್ಲಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಮುಂಗಾರು ಕೈಕೊಟ್ಟಿರುವ ಹಿನ್ನೆಲೆಯಲ್ಲಿ ರೈತರ ನೆರವಿಗೆ ಸರ್ಕಾರ ಬರಬೇಕಿದೆ. ಈ ಹಿನ್ನೆಲೆಯಲ್ಲಿ ರಾಗಿ ಮತ್ತು ಜೋಳದ ಬೆಳೆಗೆ ಬೆಂಬಲ ಬೆಲೆ ಘೋಷಿಸುವಂತೆ ಸದನದಲ್ಲಿ ಒತ್ತಾಯಿಸಲಾಗುವುದು. ಅಂತರ್ಜಲ ಕಲುಷಿತಗೊಂಡಿದ್ದು, ನೀರಿನ ಗುಣಮಟ್ಟ ಕುಸಿದಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸುತ್ತಿದೆ. ಸಾರ್ವಜನಿಕರು ಈ ಘಟಕದ ನೀರನ್ನು ಬಳಕೆ ಮಾಡುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ ಎಂದರು.
ದೊಡ್ಡಬೆಳವಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಸಿ.ಶಶಿಧರ್ ಮಾತನಾಡಿ, ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಹೊರೆಯಾಗದಂತೆ 20 ಲೀಟರ್ ನೀರಿಗೆ 5 ದರ ನಿಗದಿ ಮಾಡಲಾಗಿದೆ. ಜನ ಇದರ ಸದುಪಯೋಗ ಪಡೆಯಬೇಕು ಎಂದರು.
ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ, ತಾಲೂಕು ಪಂಚಾಯಿತಿ ಅಧ್ಯಕ್ಷೆ ನರಸಮ್ಮ, ಉಪಾಧ್ಯಕ್ಷ ರಾಜು, ಜಿಲ್ಲಾ ಪಂಚಾಯಿತಿ ಸದಸ್ಯೆ ಕಲ್ಪನಾ, ಎಪಿಎಂಸಿ ಅಧ್ಯಕ್ಷ ತಿ.ರಂಗರಾಜು, ನಿರ್ದೇಶಕ ಜಿ.ಲಕ್ಷ್ಮೀಪತಿ ಮತ್ತಿತರರು ಭಾಗವಹಿಸಿದ್ದರು.