ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಕುಡಿವ ನೀರಿನ ಸಮಸ್ಯೆ ಉಲ್ಬಣಿಸದಂತೆ ಎಚ್ಚರ ವಹಿಸಿ

Mainashree
Updated On : 2 Mar 2014, 11:04 am

ರಾಮನಗರ: ಮಳೆ ಅಭಾವದಿಂದ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ತೀವ್ರ ಕುಸಿದಿದ್ದು, ಕೆರೆ-ಕಟ್ಟೆಗಳು ಬರಿದಾಗಿವೆ. ಕೊಳವೆ ಬಾವಿಗಳು ವಿಫಲಗೊಂಡಿದ್ದು ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದೆ. ಬೇಸಿಗೆಯಲ್ಲಿ ಯಾವ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸದಂತೆ ಎಚ್ಚರ ವಹಿಸಲು ಸಂಸದ ಡಿ.ಕೆ.ಸುರೇಶ್ ಅಧಿಕಾರಿಗಳಿಗೆ ತಾಕೀತು ಮಾಡಿದರು.  
ಕೂಟಗಲ್ ಹೋಬಳಿಯ ಲಕ್ಷ್ಮೀಪುರ ಗ್ರಾಮದಲ್ಲಿ ಶನಿವಾರ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಜನರು ಎದುರಿಸುತ್ತಿರುವ ಮೂಲಭೂತ ಸಮಸ್ಯೆಗಳ ಅರಿವು ನನಗಿದೆ. ವಿಶೇಷವಾಗಿ ಕುಡಿಯುವ ನೀರಿನ ವಿಷಯದಲ್ಲಿ ಯಾವುದೇ ತೊಂದರೆ ಆಗಕೂಡದು. ಈ ನಿಟ್ಟಿನಲ್ಲಿ  ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಯೋಜನೆ ರೂಪಿಸಿ ಎಂದರು.  
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕುಡಿಯುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಪ್ರತಿ ವ್ಯಕ್ತಿಗೆ ಕನಿಷ್ಟ 50 ರಿಂದ 75 ಲೀಟರ್ ನೀರನ್ನು ಒದಗಿಸಲು ಮಾನದಂಡ ಸಿದ್ಧಪಡಿಸಲಾಗಿದೆ. ಈ ಆಧಾರದ ಮೇಲೆ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅಧಿಕಾರಿಗಳು ಮುಂದಾಗಿ ಎಂದು ತಿಳಿಸಿದರು.
ಕುಡಿಯುವ ನೀರಿನ ಜತೆಗೆ ವಿದ್ಯುತ್ ಸಮಸ್ಯೆ ತೀವ್ರತರವಾಗಿದೆ. ಇಡೀ ಜಿಲ್ಲೆಯನ್ನು ನಿರಂತರ ಜ್ಯೋತಿ ಯೋಜನೆಗೆ ಸೇರಿಸಲು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಯತ್ನಿಸಿದ್ದಾರೆ. ಜಿಲ್ಲೆಯಲ್ಲಿ ಹೆಚ್ಚುವರಿ ಟ್ರಾನ್ಸ್‌ಫಾರ್‌ಮರ್‌ಗಳ ಅಳವಡಿಕೆಗೆ ಪ್ರತಿ ತಾಲೂಕಿಗೆ ರು.1.5 ರಿಂದ 2 ಕೋಟಿ ಒದಗಿಸಲು ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಿದ್ದಾರೆ ಎಂದು ಸುರೇಶ್ ವಿವರಿಸಿದರು.  
ನೀರಾವರಿ ಯೋಜನೆ ಜಾರಿ: ಜಿಲ್ಲೆಯ ನೀರಿನ ಬವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸಮಗ್ರ ನೀರಾವರಿ ಯೋಜನೆಗಳನ್ನು ರೂಪಿಸಿ ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿ ಮಾ.3ಕ್ಕೆ ಶಂಕುಸ್ಥಾಪನೆಗೊಳ್ಳುತ್ತಿರುವ ಎತ್ತಿನಹೊಳೆ ಯೋಜನೆಯಿಂದ ರಾಮನಗರ ಜಿಲ್ಲೆಗೆ 2 ಟಿಎಂಸಿ ನೀರು ಲಭ್ಯವಾಗಲಿದೆ ಎಂದು ಅವರು ಹೇಳಿದರು.  
ನರೇಗಾದಿಂದ ಸ್ವ ಉದ್ಯೋಗ: ಕೇಂದ್ರ ಸರ್ಕಾರವು ಉದ್ಯೋಗ ಖಾತ್ರಿ ಯೋಜನೆಗೆ ವಿಶೇಷ ಒತ್ತು ನೀಡಿದೆ. ಅದರಿಂದ ಗ್ರಾಮೀಣ ದುಡಿಯುವ ಕೈಗಳಿಗೆ ಸ್ವ ಉದ್ಯೋಗ ಮತ್ತು ಸ್ವಾವಲಂಬಿ ಬದುಕು ಕಟ್ಟಿಕೊಡುವ ಮಹತ್ವಾಕಾಂಕ್ಷೆ ಸರ್ಕಾರಕ್ಕೆ ಇದೆ. ಈ ನಿಟ್ಟಿನಲ್ಲಿ ವಯಕ್ತಿಕ ಫಲಾನುಭವಿಗಳಿಗೆ ಆದ್ಯತೆ ನೀಡಿದ್ದು, ಯೋಜನೆ ಸಾಕಾರಕ್ಕೆ ಅಧಿಕಾರಿಗಳು ಸಹಕರಿಸಬೇಕು ಎಂದು ಸುರೇಶ್ತಾಕೀತು ಮಾಡಿದರು.  
ಲಕ್ಷ್ಮೀಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಲಾಗುವುದು. ಗ್ರಾಮದಲ್ಲಿ ಹಾದು ಹೋಗಿರುವ ರಾಜ್ಯ ಹೆದ್ದಾರಿ ಅಗಲೀಕರಣಕ್ಕೆ ಗ್ರಾಮಸ್ಥರು  ಮತ್ತು ಗ್ರಾಮ ಪಂಚಾಯತಿ ವತಿಯಿಂದ ಪ್ರಸ್ತಾವನೆ ಸಲ್ಲಿಸಿದರೆ, ಸದರಿ ಯೋಜನೆ ಮಂಜೂರು ಮಾಡಿಸಲು ಬದ್ಧ ಎಂದು ಭರವಸೆ ನೀಡಿದರು.  ಇದೇ ವೇಳೆ ಗ್ರಾಮಸ್ಥರು ಸಂಸದ ಸುರೇಶ್ ಅವರಿಗೆ ಅಹವಾಲು ಸಲ್ಲಿಸಿದರು. ಜನಸಂಪರ್ಕ ಸಭೆಯಲ್ಲಿ ಕೆಎಂಎಫ್ ನಿರ್ದೇಶಕ ಪಿ.ನಾಗರಾಜು, ತಾಲೂಕು ಪಂಚಾಯತಿ ಅಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ಕಾಂಗ್ರೆಸ್ ಮುಖಂಡರಾದ ಮರಿದೇವರು, ಎ.ಮಂಜು, ಕಾಂತರಾಜ ಪಟೇಲ್ ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement