ಎಲ್ಲಾ ಬಸ್ಗಳನ್ನು ಕಾಲೇಜಿನ ಬಳಿ ನಿಲ್ಲಿಸಿ, ಮೂಲ ಸೌಕರ್ಯ ಒದಗಿಸಿ
ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಚರಿಸುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ಬಸ್ಗಳು ಕಾಲೇಜಿನ ಬಳಿ ನಿಲುಗಡೆ ನೀಡಬೇಕು ಹಾಗೂ ಕಾಲೇಜಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಸರ್ಕಾರಿ ಎಂಜಿನಿಯರಿಂಗ್ ಹಾಗೂ ಡಿಪ್ಲೊಮಾ ಕಾಲೇಜಿನ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಸೋಮವಾರ ಪ್ರತಿಭಟನೆ ನಡೆಸಿದರು.
ಕಾಲೇಜಿನ ಆವರಣದಲ್ಲಿ ಜಮಾವಣೆಗೊಂಡ ಸಾವಿರಾರು ವಿದ್ಯಾರ್ಥಿಗಳು ಸರ್ಕಾರ, ಜಿಲ್ಲಾಡಳಿತ, ಸಾರಿಗೆ ಸಂಸ್ಥೆವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳು ಖುದ್ದು ಆಗಮಿಸಿ ಪರಿಶೀಲನೆ ನಡೆಸಿ, ಸಮಸ್ಯೆ ಬಗೆಹರಿಸುವವರೆಗೆ ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದರು.
ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಬಹುತೇಕ ವಿದ್ಯಾರ್ಥಿಗಳು ಗ್ರಾಮಾಂತರ ಪ್ರದೇಶದ ಬಡವರಾಗಿದ್ದಾರೆ.
ಸ್ವಂತ ವಾಹನದಲ್ಲಿ ಬರಲು ಆರ್ಥಿಕವಾಗಿ ಸಬಲರಾಗಿಲ್ಲ. ಹಾಗಾಗಿ ಸರ್ಕಾರಿ ಬಸ್ಗಳನ್ನೇ ಅವಲಂಬಿಸಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರತಿ ನಿಮಿಷಕ್ಕೊಂದು ಸಂಚರಿಸುವ ಬಸ್ಗಳು ಕಾಲೇಜಿನ ಬಳಿ ನಿಲುಗಡೆಯನ್ನೇ ನೀಡುವುದಿಲ್ಲ ಎಂದು ದೂರಿದರು. ಬಸ್ ನಿಲ್ದಾಣಗಳಲ್ಲಿ ಕಾಲೇಜಿನ ಬಳಿ ನಿಲ್ಲಿಸುವ ಬಸ್ಗಳಿಗಾಗಿ ಗಂಟೆಗಟ್ಟಲೆ ಕಾಯಬೇಕಾದ ದುಃಸ್ಥಿತಿ ಎದುರಾಗಿದೆ. ಇದರಿಂದಾಗಿ ಪ್ರತಿ ದಿನವೂ 1 ಅಥವಾ 2 ಗಂಟೆ ತಡವಾಗಿ ಕಾಲೇಜಿಗೆ ಬರಬೇಕಾಗಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿದ್ದರೂ ಬಸ್ ನಿಲುಗಡೆಗೆ ಕ್ರಮ ಕೈಗೊಂಡಿಲ್ಲ ಎಂದರು.