ತಾಪಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸುವಲ್ಲಿ ಅಧಿಕಾರಿಗಳು ವಿಫಲ ಗೊಂಡಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ತಾಪಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಕಳೆದ ಎರಡು ತಿಂಗಳಿಂದ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರ ಗೊಂಡಿದೆಯಾದರೂ ಇದಕ್ಕೆ ಪರಿಹಾರ ಕಲ್ಪಿಸಲು ಜಿಪಂ, ತಾಪಂ ಹಾಗೂ ಗ್ರಾಪಂ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮುಂದಾಗಿಲ್ಲ. ಸಮಸ್ಯೆಯ ಬಗ್ಗೆ ಸಾಕಷ್ಟು ಬಾರಿ ಮನವರಿಕೆ ಮಾಡಿ ಕೊಡಲಾಗಿದೆಯಾದರೂ ಕಾಟಾಚಾರದ ಉತ್ತರ ನೀಡಿ ಜಾರಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.
ಕಲುಷಿತ ನೀರು: ಗ್ರಾಮದಲ್ಲಿ ಕೆಲ ತಿಂಗಳ ಹಿಂದೆ ಕುಡಿಯುವ ನೀರು ಪೂರೈಕೆ ಮಾಡುತ್ತಿದ್ದ ಕೊಳವೆ ಬಾವಿ ಕಲುಷಿತ ನೀರು ಎಂಬ ಕಾರಣಕ್ಕೆ ನೀರು ಪೂರೈಕೆ ನಿಲ್ಲಿಸಲಾಗಿದ್ದು ಇದರಿಂದಾಗಿ ಗ್ರಾಮಕ್ಕೆ ಕುಡಿಯಲು ಹಾಗೂ ದಿನಬಳಕೆಗೆ ನೀರಿಲ್ಲದೆ ಜನ ಜಾನುವಾರುಗಳು ಪರದಾಡುವಂತಾಗಿದೆ ಎಂದು ಕಿಡಿಕಾರಿದರು.
ಈ ಹಿಂದೆ ತಿಮ್ಮಸಂದ್ರ ಮತ್ತು ನಮ್ಮ ಗ್ರಾಮಕ್ಕೆ ಎರಡು ದಿನಕ್ಕೊಮ್ಮೆ ನೀರು ಬಿಡುಗಡೆ ಮಾಡುತ್ತಿದ್ದಾರಾದರೂ ಸಂಕ್ರಾಂತಿ ಹಬ್ಬದ ಬಳಿಕ ಇದನ್ನು ಸ್ಥಗಿತ ಗೊಳಿಸಿದ್ದಾರೆ. ಕುಡಿಯುವ ನೀರಿಗಾಗಿ ಗ್ರಾಮಸ್ಥರು ಸಾಕಷ್ಟು ದೂರ ಅಲೆದಾಡುವಂತಾಗಿದ್ದು ಅಧಿಕಾರಿಗಳು ನಮಗೂ ಇದಕ್ಕೂ ಸಂಬಂಧವೇ ಇಲ್ಲ ಎಂಬಂತೆ ಮೌನಕ್ಕೆ ಶರಣಾಗಿದ್ದಾರೆ.
ಟ್ಯಾಂಕ್ ನೀರಿನಲ್ಲಿ ಮೋಸ: ಶಿವರಾತ್ರಿ ಹಬ್ಬದ ದಿನ ಗ್ರಾಮಕ್ಕೆ 5 ಟ್ಯಾಂಕರ್ ನೀರು ಪೂರೈಕೆ ಮಾಡಲಾಗಿತ್ತು, ಅದೂ ಇಡೀ ಗ್ರಾಮಕ್ಕೆ ಪೂರೈಕೆ ಮಾಡದೆ ಕೆಲವೇ ಭಾಗಕ್ಕೆ ಮಾಡಿ ಸಾಕಷ್ಟು ಅವಾಂತರ ಸೃಷ್ಟಿಸಿದ ಗ್ರಾಪಂ ನವರು 15 ಟ್ಯಾಂಕರ್ ನೀರು ಪೂರೈಕೆ ಮಾಡಿದ್ದೇವೆ ಎಂದು ಸುಳ್ಳು ಲೆಕ್ಕ ತೋರಿಸಿದ್ದು, ನಮ್ಮ ಗ್ರಾಮಕ್ಕೆ ಟ್ಯಾಂಕರ್ನಿಂದ ನೀರು ಪೂರೈಕೆ ಮಾಡಿಲ್ಲವಾದರೂ ಸುಳ್ಳು ದಾಖಲೆ ಸೃಷ್ಟಿಸಿ ಹಣ ಲಪಟಾಯಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸ ಬೇಕಿದ್ದು ಗ್ರಾಮದಲ್ಲಿ ಕೊಳವೆ ಬಾವಿ ಕೊರೆಸಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ವರೆಗೆ ನಾವು ಸ್ಥಳದಿಂದ ಕದಲುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದರು.
ಪ್ರತಿಭಟನಾ ನಿರತ ಗ್ರಾಮಸ್ಥರ ಮನ ಒಲಿಸಲು ಅಧಿಕಾರಿಗಳು ಪ್ರಯತ್ನಿಸಿದರಾದರೂ ಅದು ಸಫಲ ಗೊಳ್ಳಲಿಲ್ಲ. ಬಳಿಕ ಸ್ಥಳಕ್ಕೆ ಆಗಮಿಸಿದ ಹಿರಿಯ ಅಧಿಕಾರಿಗಳು ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ನೀರು ಪೂರೈಸುವುದಾಗಿ ತಿಳಿಸಿ, ಶೀಘ್ರವಾಗಿ ಕುಡಿಯುವ ನೀರಿಗಾಗಿ ಕೊಳವೆ ಬಾವಿ ಕೊರೆಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ಹಿಂದಕ್ಕೆ ಪಡೆದರು.