ನೀತಿ ಸಂಹಿತೆ ನಡುವೆಯೂ ಜೆಡಿಎಸ್ ಪ್ರತಿಭಟನೆ
ರಾಮನಗರ: ರೇಷ್ಮೆನಗರಿ ರಾಮನಗರ ಜಿಲ್ಲೆಯಲ್ಲಿ ಬೇಸಿಗೆ ಆರಂಭದಲ್ಲೇ ಕುಡಿಯುವ ನೀರಿನ ಬವಣೆ ಹೆಚ್ಚಿದ್ದು, ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ಜೆಡಿಎಸ್ ಬೀದಿಗಿಳಿದಿದೆ. ನಗರದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಚುನಾವಣಾ ನೀತಿ ಸಂಹಿತೆ ನಡುವೆಯೂ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ನೀರಿನ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಹಾಗೂ ಜಿಲ್ಲಾಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಅಪರ ಜಿಲ್ಲಾಧಿಕಾರಿ ಬಸವರಾಜು ಅವರಿಗೆ ಮನವಿ ಸಲ್ಲಿಸಿದರು.
ದಶಕದಿಂದಲೂ ಜಿಲ್ಲೆಯಲ್ಲಿ ಭೀಕರ ಬರ: ಕಳೆದೊಂದು ದಶಕದಿಂದಲೂ ಜಿಲ್ಲೆಯಲ್ಲಿ ಭೀಕರ ಬರ ಆವರಿಸಿದ್ದು, ಜನ ಜಾನುವರುಗಳಿಗೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಹಲವಾರು ಪ್ರತಿಭಟನೆಗಳನ್ನು ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗಿದೆ. ಜಿಲ್ಲಾಡಳಿತ ಸಂಪೂರ್ಣ ನಿರ್ಲಕ್ಷ್ಯ ಧೋರಣೆ ತಾಳಿರುವುದರಿಂದ ನೀರಿನ ಬವಣೆ ದಿನೇ ದಿನೇ ಹೆಚ್ಚುತ್ತಿದೆ ಎಂದು ದೂರಿದರು.
ಜಿಲ್ಲೆಯಾದ್ಯಂತ ನಗರ ಪ್ರದೇಶ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ನೀರಿನ ಕೊರತೆ ಎದುರಾಗಿದೆ. ಗ್ರಾಮೀಣ ಭಾಗದಲ್ಲಿ ಹತ್ತಾರು ಕಿ.ಮೀ. ದೂರದಿಂದ ನೀರನ್ನು ತರಬೇಕು ಇಲ್ಲವೇ ಹಣ ಕೊಟ್ಟು ಖರೀದಿಸುವಂತಹ ದು:ಸ್ಥಿತಿ ಎದುರಾಗಿದೆ. ನಗರ ಪ್ರದೇಶದಲ್ಲಿ 10 ರಿಂದ 15 ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತಿದೆ ಎಂದರು.
ಕೊಳವೆ ಬಾವಿ ಕೊರೆಸಲು ಹಣ ಮಂಜೂರಾತಿಯಿಲ್ಲ: ಟಾಸ್ಕ್ಫೋರ್ಸ್ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಹೊಸದಾಗಿ ಕೊಳವೆ ಬಾವಿಗಳನ್ನು ಕೊರೆಸಲು, ಟ್ಯಾಂಕರ್ ಮೂಲಕ ನೀರು ಪೂರೈಸಲು ಹಣವನ್ನು ಮಂಜೂರು ಮಾಡುತ್ತಿಲ್ಲ. ಜನರಿಗೆ ಅತ್ಯಗತ್ಯವಾಗಿರುವ ನೀರು ಪೂರೈಕೆ ಮಾಡುವುದು ಸರ್ಕಾರದ ಕರ್ತವ್ಯವಾಗಿದ್ದು, ಯಾವುದೇ ರೀತಿಯಲ್ಲಾದರೂ ನೀರನ್ನು ಒದಗಿಸಬೇಕು ಎಂದು ಆಗ್ರಹಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಂದಿನಿಂದಲೂ ಅಭಿವೃದ್ಧಿ ಕುಂಠಿತಗೊಂಡಿದೆ. ಕೇವಲ ಆಶ್ವಾಸನೆಗಳನ್ನು ನೀಡುತ್ತಾ ಕಾಲ ಕಳೆಯುತ್ತಿದೆ. ಸಮರ್ಪಕ ಕುಡಿಯುವ ನೀರು ಒದಗಿಸಲು ವಿಫಲವಾಗಿರುವ ಸರ್ಕಾರ ಅಧಿಕಾರದಲ್ಲಿ ಮುಂದುವರೆಯಲು ನೈತಿಕ ಹಕ್ಕು ಕಳೆದುಕೊಂಡಿದೆ. ನೀರು ಕೊಡಿ ಇಲ್ಲವೇ ಅಧಿಕಾರ ಬಿಡಿ ಎಂದು ಕಿಡಿ ಕಾರಿದರು.
ಶಂಕುಸ್ಥಾಪನೆ ಕೈಕೊಂಡು ಜನರಿಗೆ ಮಂಕುಬೂದಿ: ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಚುನಾವಣೆಯಲ್ಲಿ ಮತಗಳಿಸುವ ಸಲುವಾಗಿ ಹಲವಾರು ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಿ ಜನರನ್ನು ದಿಕ್ಕುತಪ್ಪಿಸುತ್ತಿದ್ದಾರೆ. ಆದರೆ, ಕುಡಿಯುವ ನೀರು ಪೂರೈಕೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ಸಮರ್ಪಕ ನೀರು ಪೂರೈಕೆ ಆಗ್ರಹಿಸಿ ಕಳೆದ ತಿಂಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗಿತ್ತು. ಶೀಘ್ರ ಸಮಸ್ಯೆ ಬಗೆಹರಿಸದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳುವ ಎಚ್ಚರಿಕೆಯನ್ನೂ ನೀಡಲಾಗಿತ್ತು. ಸಮಸ್ಯೆ ಬಗೆಹರಿಯದ ಹಿನ್ನೆಲೆಯಲ್ಲಿ ಪ್ರತಿಭಟನೆ ಅನಿವಾರ್ಯವಾಗಿದೆ. ಸಾಂಕೇತಿಕವಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಕೂಡಲೇ ಸಮರ್ಪಕ ನೀರು ಪೂರೈಸದಿದ್ದಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು. ನೀತಿ ಸಂಹಿತೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಪ್ರತಿಭಟನೆಯಲ್ಲಿ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ರಾಜು, ಜಿ.ಪಂ. ಅಧ್ಯಕ್ಷ ಎಚ್.ಸಿ.ರಾಜು, ಉಪಾಧ್ಯಕ್ಷೆ ಎಸ್.ಬಿ.ಗೌರಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ರಘುಕುಮಾರ್, ಸದಸ್ಯ ಎಚ್.ಎಲ್.ಚಂದ್ರ, ಮುದ್ದುರಾಜಯಾದವ್, ಸುಮಿತ್ರಮ್ಮ, ಮುಖಂಡರಾದ ಬ್ಯಾಟಪ್ಪ, ಸಿಂ.ಲಿಂ.ನಾಗರಾಜು, ದೇವೇಗೌಡ, ರಾಜಶೇಖರ್, ಮಂಜುನಾಥ್, ನಾಗರಾಜು, ಭದ್ರಯ್ಯ, ಮುಕುಂದರಾಜ್ ಇತರರು ಭಾಗವಹಿಸಿದ್ದರು.