ಜಿಲ್ಲೆಯ 11 ಕೇಂದ್ರಗಳಲ್ಲಿ ದ್ವಿತೀಯ ಪಿಯು ಪರೀಕ್ಷೆ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ದೇವನಹಳ್ಳಿ, ನೆಲಮಂಗಲ ಮತ್ತು ಹೊಸಕೋಟೆಯ ಹಲವು ಪರೀಕ್ಷಾ ಕೇಂದ್ರಗಳಲ್ಲಿ ಮಾ.12ರ ಬುಧವಾರದಿಂದ ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆಗಳು ಆರಂಭವಾಗಲಿವೆ. ಪರೀಕ್ಷೆಗಳು ವ್ಯವಸ್ಥಿತವಾಗಿ ನಡೆಯಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪ.ಪೂ.ಶಿಕ್ಷಣ ಇಲಾಖೆ ಉಪನಿರ್ದೇಶಕಿ ಎನ್. ಸಾವಿತ್ರಮ್ಮ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ದೊಡ್ಡಬಳ್ಳಾಪುರದಲ್ಲಿ 3, ನೆಲಮಂಗಲದಲ್ಲಿ 3, ಹೊಸಕೋಟೆಯಲ್ಲಿ 3, ದೇವನಹಳ್ಳಿಯಲ್ಲಿ 1 ಮತ್ತು ವಿಜಯಪುರದಲ್ಲಿ 1 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಒಟ್ಟಾರೆ ಜಿಲ್ಲೆಯ 11 ಪರೀಕ್ಷಾ ಕೇಂದ್ರಗಳಲ್ಲಿ ಈ ಬಾರಿ 7259 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಈ ಪೈಕಿ 3913 ಬಾಲಕಿಯರು ಮತ್ತು 3346 ಬಾಲಕರು ಸೇರಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 3241, ಕಲಾ ವಿಭಾಗದಲ್ಲಿ 2915 ಮತ್ತು ವಿಜ್ಞಾನ ವಿಭಾಗದಲ್ಲಿ 1103 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ.
ವದಂತಿಗಳಿಗೆ ಕಿವಿಗೊಡಬೇಡಿ: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಹರಡುವ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗಳನ್ನು ಉತ್ತಮ ಗುಣಮಟ್ಟದಲ್ಲಿ ನಡೆಸಲು ಹಲವು ಅಧಿಕಾರಿಗಳ ತಂಡಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ರಚಿಸಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಗಸ್ತು ತಂಡ ರಚನೆಯಾಗಿದೆ. ಪ.ಪೂ.ಶಿಕ್ಷಣ ಇಲಾಖೆ ರಚಿಸಿರುವ ಅಧಿಕಾರಗಳ ತಂಡ ಪರೀಕ್ಷೆಗೆ ಸಂಬಂಧಿಸಿದ ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ಸಂಶಯ ಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಎಫ್ಐಆರ್ಗಳನ್ನು ದಾಖಲಿಸಲು ಅಧಿಕಾರ ಹೊಂದಿದೆ. ವದಂತಿ ಹರಡುತ್ತಿರುವ ಬಗ್ಗೆ ಸಾರ್ವಜನಿಕರ ಗಮನಕ್ಕೆ ಬಂದರೆ ಸಮೀಪದ ಪೊಲೀಸ್ ಠಾಣೆಗೆ ಮತ್ತು ಅಧಿಕಾರಿಗಳಿಗೆ ಮಾಹಿತಿ ನೀಡಿ ಸಹಕರಿಸಬೇಕು ಎಂದು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರದಲ್ಲಿ 3 ಕೇಂದ್ರಗಳು: ದೊಡ್ಡಬಳ್ಳಾಪುರ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜು ಮತ್ತು ದೇವರಾಜ ಅರಸ್ ಪದವಿ ಪೂರ್ವ ಕಾಲೇಜು ಸೇರಿದಂತೆ 3 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯುತ್ತಿದ್ದು, ತಾಲೂಕಿನ ಒಟ್ಟು 5 ಸರ್ಕಾರಿ ಕಾಲೇಜುಗಳು, 1 ಅನುದಾನಿತ, 2 ಅನುದಾನರಹಿತ ಕಾಲೇಜುಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.