ಕಾಲೇಜು ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ
ದೊಡ್ಡಬಳ್ಳಾಪುರ: ಇಲ್ಲಿನ ಪ್ರತಿಷ್ಠಿತ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪ್ರಾಂಶುಪಾಲರ ಬದಲಾವಣೆಗೆ ಪಟ್ಟುಹಿಡಿದು ಕಾಲೇಜಿನ ಮುಂದೆ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.
ಕಳೆದ ವಾರ ಕಾಲೇಜಿನಲ್ಲಿ ಆಯೋಜನೆಗೊಂಡಿದ್ದ ವಾರ್ಷಿಕೋತ್ಸವ ಸಮಾರಂಭದ ವೇಳೆ ಪ್ರಾಂಶುಪಾಲರು, ಕ್ಷುಲ್ಲಕ ಕಾರಣ ಮುಂದಿಟ್ಟುಕೊಂಡು ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಮೊಟಕುಗೊಳಿಸಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಅಲ್ಲದೆ ಪ್ರಾಂಶುಪಾಲರ ವಿರುದ್ಧ ಅನೇಕ ಆರೋಪಗಳನ್ನು ವಿದ್ಯಾರ್ಥಿಗಳು ಮಾಡಿದ್ದು, ಈ ಕೂಡಲೇ ಅವರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
2 ದಿನ ಧರಣಿ: ಈ ಬೇಡಿಕೆಗಳನ್ನು ಮುಂದಿಟ್ಟುಕೊಂಡು ವಿದ್ಯಾರ್ಥಿಗಳು 2 ದಿನಗಳ ಕಾಲ ಕಾಲೇಜಿನ ಮುಂದೆ ಧರಣಿ ನಡೆಸಿದ್ದರು. ಆಡಳಿತ ಮಂಡಲಿ ಮನಮೊಲಿಕೆ ಕಾರ್ಯ ಕೂಡ ಯಶಸ್ವಿಯಾಗಲಿಲ್ಲ. ನಂತರ ಸಂಸ್ಥೆಯ ಮುಖ್ಯಸ್ಥ ಜಾಲಪ್ಪ ಅವರು ಈ ಕುರಿತು ಪರಿಶೀಲನೆ ನಡೆಸಿ ನ್ಯಾಯ ಒದಗಿಸಿಕೊಡುವ ಭರವಸೆಯನ್ನು ವಿದ್ಯಾರ್ಥಿಗಳಿಗೆ ಕೊಟ್ಟ ನಂತರ ಪ್ರತಿಭಟನೆಯನ್ನು ವಿದ್ಯಾರ್ಥಿಗಳು ಹಿಂದಕ್ಕೆ ತೆಗೆದುಕೊಂಡಿದ್ದಾರೆ. ಪ್ರತಿಭಟನೆ ಪರಿಣಾಮ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿದ್ದರು.