ಫಲಿತಾಂಶ: ವಿದ್ಯಾರ್ಥಿ ಆತ್ಮಹತ್ಯೆ
ರಾಮನಗರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣತೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಒಬ್ಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗುರುವಾರ ಸಂಭವಿಸಿದೆ. ಕನಕಪುರ ತಾಲೂಕಿನ ಗುಳ್ಳಹಟ್ಟಿ ಕಾವಲು ಗ್ರಾಮದ ಸಚಿನ್(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದ ಆತ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಾರೋಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆತ್ಮಹತ್ಯೆ ಯತ್ನ: ರಾಮನಗರದ ಐಜೂರು ಬಡಾವಣೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ನಪಾಸಾದ ಹಿನ್ನೆಲೆಯಲ್ಲಿ ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತಕ್ಷಣ ಗಮನಿಸಿದ ಪೋಷಕರು ನೇಣಿನಿಂದ ಇಳಿಸಿ, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ ಕುರಿತು ಪೊಲೀಸ್ ಪ್ರಕರಣ ದಾಖಲಾಗಿಲ್ಲ.