ಸುರೇಶ್‌ಗೆ ಅಭೂತಪೂರ್ವ ಬೆಂಬಲ
ಮಾಗಡಿ: ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದ ಡಿ.ಕೆ. ಸುರೇಶ್ ಅವರಿಗೆ ಸತತ ಎರಡನೇ ಬಾರಿಗೂ ಅಭೂತಪೂರ್ವ ಬೆಂಬಲ ನೀಡಿ ಗೆಲ್ಲಿಸಿದ ಮಾಗಡಿ ಕ್ಷೇತ್ರದ ಮತದಾರರಿಗೆ ಹಾಗೂ ಕಾರ್ಯಕರ್ತರಿಗೆ ಕೆಪಿಸಿಸಿ ಸದಸ್ಯ ಎ.ಮಂಜು ಕೃತಜ್ಞತೆ ಸಲ್ಲಿಸಿದರು.
ಅವರು ಕಾಂಗ್ರೆಸ್ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮತದಾರರು ಮತ್ತು ಕಾರ್ಯಕರ್ತರು ಹಾಗೂ ಮುಖಂಡರು ಕಾಂಗ್ರೆಸ್ ಪಕ್ಷವನ್ನು ಕೈಹಿಡಿದು ಗೆಲ್ಲಿಸಲು ಶಕ್ತಿ ಮೀರಿ ಶ್ರಮಿಸಿದ್ದಾರೆ. ಸುಮಾರು 2.34 ಲಕ್ಷ ಅಧಿಕ ಮತ ನೀಡುವ ಮೂಲಕ ಡಿ.ಕೆ. ಸುರೇಶ್ ಅವರನ್ನು ಗೆಲ್ಲಿಸಿದ ಎಲ್ಲಾ ಮತದಾರರಿಗೆ ಹಾಗೂ ಕಾರ್ಯಕರ್ತರಿಗೆ ಮುಖಂಡರಿಗೆ ಅಭಿನಂದನೆ ಸಲ್ಲಿಸಿದರು.
ಕಳೆದ ಉಪ ಚುನಾವಣೆಯಲ್ಲಿ ಡಿ.ಕೆ. ಸುರೇಶ್ ಅವರು ನೀಡಿದ ಮಾತನ್ನು ಉಳಿಸಿಕೊಂಡಿದ್ದಾರೆ. ಈ ಬಾರಿಯೂ ಅವರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಂಕಲ್ಪ ತೊಟ್ಟಿದ್ದಾರೆ. ಕ್ಷೇತ್ರದ ಮತದಾರರು ಕೈಜೋಡಿಸಿ ಕ್ಷೇತ್ರದ ಅಭಿವೃದ್ಧಿಗೆ ಬೆಂಬಲಿಸಬೇಕು. ಈಗಾಗಲೇ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಗ್ರಾಮ ಸಂದರ್ಶನ ಹಾಕಿಕೊಳ್ಳುವ ಮೂಲಕ ಜನರ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೊಟ್ಟಿದ್ದಾರೆ ಎಂದರು.
ಶಂಕುಸ್ಥಾಪನೆ ಶೀಘ್ರ: ಕ್ಷೇತ್ರಕ್ಕೆ ಶಾಶ್ವತವಾದ ನೀರಾವರಿ ಯೋಜನೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 281 ಕೋಟಿ ರು ಬಿಡುಗಡೆ ಮಾಡಿದ್ದಾರೆ. ಸದ್ಯದಲ್ಲೇ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದರಲ್ಲದೆ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಸಲು ಕೈಗಾರಿಕೆ ಸ್ಥಾಪಿಸಲು ಚಿಂತಿಸಿದ್ದಾರೆ. ಈ ನಿಟ್ಟಿನಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಆದಷ್ಟು ಬೇಗ ಕೈಗಾರಿಕೆ ಸ್ಥಾಪನೆಗೆ ಸಂಸದರು, ಉಸ್ತವಾರಿ ಸಚಿವ ಡಿ.ಕೆ. ಶಿವಕುಮಾರ್, ಮಾಜಿ ಸಚಿವ ಎಚ್.ಎಂ. ರೇವಣ್ಣ. ಸಿ.ಎಂ. ಲಿಂಗಪ್ಪ ಇತರರ ಸಹಕಾರದಿಂದ ಪ್ರಾಮಾಣಿಕವಾಗಿ ಶ್ರಮಿಸಲಿದ್ದಾರೆ ಎಂದರು.
ನೀರಿನ ಘಟಕ ಆರಂಭ: ಮಾಗಡಿ ತಾಲೂಕಿನಾದ್ಯಂತ ಈಗಾಗಲೇ ಸುಮಾರು 150ಕ್ಕೂ ಹೆಚ್ಚು ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಲಾಗುತ್ತಿದೆ. ಕಟ್ಟಡ ನಿರ್ಮಾಣವಾದ ಕೂಡಲೆ ಪ್ರತ್ಯೇಕವಾಗಿ ಕೊಳವೆ ಬಾವಿ ಕೊರೆಸಿ ಜನಸಾಮಾನ್ಯರು ಶುದ್ಧ ಕುಡಿಯುವ ನೀರು ಕುಡಿಯಬೇಕು ಎಂದು ಸಂಸದ ಡಿ.ಕೆ. ಸುರೇಶ್ ಅವರು ಅಗತ್ಯ ಕ್ರಮ ಕೈಗೊಂಡಿದ್ದಾರೆ ಎಂದು ಎ.ಮಂಜು ವಿವರಿಸಿದರು.
ಕೃಷಿಕ ಸಮಾಜ ಅಧ್ಯಕ್ಷ ಕೆ.ಎಚ್. ಕೃಷ್ಣಮೂರ್ತಿ, ಲೋಕಸಭಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಗಾಣಕಲ್ ನಟರಾಜು, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಗಿರಿಯಣ್ಣ್ಣ ಇತರರು ಇದ್ದರು.